ರೈತ ವಿರೋಧಿ ನೀತಿ ಹಾಗೂ ಭ್ರಷ್ಟಾಚಾರದ ವಿರುದ್ಧ ರಾಣೇಬೆನ್ನೂರಿನಲ್ಲಿ ತಮಟೆ ಚಳವಳಿ
'Tamate' protest in Ranebennur against anti-farmer policies and corruption.
ರಾಣೇಬೆನ್ನೂರು 02 : ಭ್ರಷ್ಟಾಚಾರ ಮತ್ತು ರೈತ ವಿರೋಧಿ ಧೋರಣೆ ಅನುಸರಿಸುತ್ತಿರುವ ಅಧಿಕಾರಿಗಳನ್ನು ಎಚ್ಚರಿಸುವ ಹಾಗೂ ಅವರ ವಿರುದ್ಧ ಹೋರಾಟದ ಧ್ವನಿ ಎತ್ತುವ ಉದ್ದೇಶದಿಂದ ರೈತ ಮುಖಂಡರು ತಮಟೆ ಚಳವಳಿ ನಡೆಸಿದರು.
ಪ್ರಗತಿಪರ ಚಿಂತಕ ಹಾಗೂ ರೈತ ಮುಖಂಡ ರವೀಂದ್ರಗೌಡ ಎಫ್. ಪಾಟೀಲ ಅವರ ನೇತೃತ್ವದಲ್ಲಿ ರಾಣೇಬೆನ್ನೂರು ತಾಲೂಕಿನ ಸುಣಕಲ್ಬಿದರಿ ಗ್ರಾಮದ ಗ್ರಾಮೀಣ ಬ್ಯಾಂಕ್ ಎದುರು ಪ್ರತಿಭಟನೆ ನಡೆಯಿತು. ರೈತ ವಿರೋಧಿ ಮತ್ತು ಪಿಂಚಣಿದಾರರ ವಿರೋಧಿ ನೀತಿ ಅನುಸರಿಸುತ್ತಿರುವ ಬ್ಯಾಂಕ್ ವ್ಯವಸ್ಥಾಪಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಅವರ ಅಮಾನತಿಗೆ ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಮಾತನಾಡಿದ ರವೀಂದ್ರಗೌಡ ಪಾಟೀಲ, ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟ ಪರಿಣಾಮ ರೈತಾಪಿ ವರ್ಗ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ. ಜನರು, ಜಾನುವಾರುಗಳು ಹಾಗೂ ಪ್ರಾಣಿ-ಪಕ್ಷಿಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ದುಬಾರಿ ವೆಚ್ಚದಲ್ಲಿ ಬೀಜ, ರಸಗೊಬ್ಬರ ಖರೀದಿಸಿ ಬೆಳೆ ಬೆಳೆದ ರೈತರು ಮಳೆಯ ಕೊರತೆಯಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದರು.
ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆ ಸೇರಿದಂತೆ ವಿವಿಧ ಯೋಜನೆಗಳ ಹಣವನ್ನು ರೈತರಿಗೆ ತಲುಪಿಸುವಲ್ಲಿ ಕೆಲವು ಅಧಿಕಾರಿಗಳು ನಿರ್ಲಕ್ಷ್ಯ ತೋರುತ್ತಿದ್ದಾರೆ ಎಂದು ಆರೋಪಿಸಿದ ಅವರು, ರೈತರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಹೋರಾಟ ಮುಂದುವರಿಸಲಾಗುವುದು ಎಂದು ಎಚ್ಚರಿಸಿದರು.
ಮನವಿ ಪತ್ರವನ್ನು ಜಿಲ್ಲಾಧಿಕಾರಿ, ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕರು, ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು, ಡಿವೈಎಸ್ಪಿ, ತಹಶೀಲ್ದಾರ್ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಸಲ್ಲಿಸಲಾಯಿತು. ಪ್ರತಿಭಟನಾಕಾರರು ರೈತ ವಿರೋಧಿ ಹಾಗೂ ಭ್ರಷ್ಟ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
ಮನವಿ ಸ್ವೀಕರಿಸಿದ ರಿಜಿನಲ್ ಕಚೇರಿ ಅಧಿಕಾರಿ ಪ್ರಕಾಶ್ ಅವರು, ಬೆಳೆ ವಿಮೆ ತುಂಬಲು ಬಾಕಿ ಇರುವ ರೈತರಿಗೆ ಸಹಕಾರ ನೀಡಲಾಗುವುದು. ಪಿಂಚಣಿದಾರರ ಗ್ಯಾರಂಟಿ ಯೋಜನೆಗಳ ಹಣ ಹಾಗೂ ಸರ್ಕಾರದ ಸಹಾಯಧನ ಯೋಜನೆಗಳ ಫಲಾನುಭವಿಗಳಿಗೆ ಯಾವುದೇ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂಪಡೆಯಲಾಯಿತು.
ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಪರ್ವತಗೌಡ ಕುಸಗೂರ್, ಶಿವಾನಂದಪ್ಪ ಲಿಂಗದಹಳ್ಳಿ, ಸುರೇಶ್ ಅರಳಿ, ಗೀರೀಶ್ ಹುಡೆದ, ಬಸಪ್ಪ ಓಲೇಕಾರ, ಶಿವಮೂರ್ತಪ್ಪ ಅರಳಿ, ಹಾಲಪ್ಪ ಆನವೇರಿ, ಬಸಪ್ಪ ನೋಟದ, ಸುರೇಶ್ ನಾರಜ್ಜಿ, ಸಂಜೀವ ಪುಟ್ಟನಗೌಡ್ರ, ಕರಬಸಪ್ಪ ಕೂಲೇರ ಸೇರಿದಂತೆ 500ಕ್ಕೂ ಹೆಚ್ಚು ರೈತರು ಹಾಗೂ ರೈತ ಮುಖಂಡರು ಭಾಗವಹಿಸಿದ್ದರು.
ಹಲಗೇರಿ ಪಿಎಸ್‌ಐ ಕೃಷ್ಣಕುಮಾರ ಬಿ. ಮಾನೆ ಅವರು ಸೂಕ್ತ ಪೊಲೀಸ್ ಬಂದೋಬಸ್ತ್ ಒದಗಿಸಿ, ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 