ಜಿಲ್ಲಾಧ್ಯಕ್ಷರ ನೇಮಕಕ್ಕೆ ಎಐಸಿಸಿ ಸಿದ್ಧತೆ: ಬೆಳಗಾವಿ ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕಾಂಗ್ರೆಸ್ ವೀಕ್ಷಕರಿಂದ ಸಮೀಕ್ಷೆ
AICC prepares to appoint district presidents: Congress observers conduct surveys across all distric
ಬೆಳಗಾವಿ 25: ದೇಶದ ವಿವಿಧ ರಾಜ್ಯಗಳಲ್ಲಿ ಕಾಂಗ್ರೆಸ್ ಜಿಲ್ಲಾ ಘಟಕಗಳ ಅಧ್ಯಕ್ಷರ ಅಧಿಕಾರ ಅವಧಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ನೂತನ ಜಿಲ್ಲಾಧ್ಯಕ್ಷರ ನೇಮಕ ಪ್ರಕ್ರಿಯೆಗೆ ಎಐಸಿಸಿ ಮುಂದಾಗಿದೆ. ಇದರ ಭಾಗವಾಗಿ ಕರ್ನಾಟಕ ಸೇರಿದಂತೆ ಬಾಕಿ ಉಳಿದಿರುವ ರಾಜ್ಯಗಳಲ್ಲಿ ಪಕ್ಷ ಸಂಘಟನೆ ಕುರಿತು ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಕಾಂಗ್ರೆಸ್ ಸಂಘಟನಾ ಸೃಜನ ಅಭಿಯಾನದ ಎಐಸಿಸಿ ವೀಕ್ಷಕ ಮನೋಜ್ ಚವ್ಹಾಣ್ ಹೇಳಿದರು. ಶನಿವಾರ ಬೆಳಗಾವಿ ನಗರದ ಕಾಂಗ್ರೆಸ್ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಎಐಸಿಸಿ ಸೂಚನೆಯಂತೆ ನಾವು ವೀಕ್ಷಕರಾಗಿ ರಾಜ್ಯದ ವಿವಿಧ ಜಿಲ್ಲೆಗಳಿಗೆ ಭೇಟಿ ನೀಡಿ ಸಮೀಕ್ಷೆ ನಡೆಸುತ್ತಿದ್ದೇವೆ. ಜಿಲ್ಲೆಗಳಲ್ಲಿ ಕಾಂಗ್ರೆಸ್ ಸಂಘಟನೆ, ಕಾರ್ಯಕರ್ತರ ಅಭಿಪ್ರಾಯ, ಮುಖಂಡರ ಕಾರ್ಯವೈಖರಿ ಹಾಗೂ ಪಕ್ಷವನ್ನು ಮುನ್ನಡೆಸುವ ಸಾಮರ್ಥ್ಯ ಹೊಂದಿರುವ ನಾಯಕರ ಕುರಿತು ಮಾಹಿತಿ ಸಂಗ್ರಹಿಸಲಾಗುತ್ತಿದೆ” ಎಂದು ತಿಳಿಸಿದರು.
ಜಿಲ್ಲಾಧ್ಯಕ್ಷರ ಆಯ್ಕೆ ಪ್ರಕ್ರಿಯೆಯಲ್ಲಿ ಕೇವಲ ಹಿರಿಯ ಮುಖಂಡರ ಅಭಿಪ್ರಾಯಕ್ಕೆ ಮಾತ್ರ ಸೀಮಿತವಾಗದೆ, ಬ್ಲಾಕ್, ಮಂಡಳ ಮಟ್ಟದ ಪದಾಧಿಕಾರಿಗಳು ಹಾಗೂ ಸಾಮಾನ್ಯ ಕಾರ್ಯಕರ್ತರ ಅಭಿಪ್ರಾಯಕ್ಕೂ ಆದ್ಯತೆ ನೀಡಲಾಗುವುದು ಎಂದು ಹೇಳಿದರು.“ಬ್ಲಾಕ್ ಮತ್ತು ಮಂಡಳ ಮಟ್ಟದಿಂದ ಪಕ್ಷವನ್ನು ಕಟ್ಟುವ ಉತ್ಸಾಹ ಹಾಗೂ ಸಂಘಟನಾ ಸಾಮರ್ಥ್ಯ ಹೊಂದಿರುವ ಜಿಲ್ಲಾಧ್ಯಕ್ಷ ಆಕಾಂಕ್ಷಿಗಳು ಅರ್ಜಿ ಸಲ್ಲಿಸಬಹುದು. ಕಾರ್ಯಕರ್ತರು ಹಾಗೂ ಪದಾಧಿಕಾರಿಗಳ ಅಭಿಪ್ರಾಯ ಪಡೆದು ಪಕ್ಷದ ಹಿತದೃಷ್ಟಿಯಿಂದ ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡಲಾಗುವುದು” ಎಂದು ಮನೋಜ್ ಚವ್ಹಾಣ್ ಹೇಳಿದರು.
ಕರ್ನಾಟಕ, ಉತ್ತರ ಪ್ರದೇಶ, ಅಸ್ಸಾಂ ಹಾಗೂ ಕೇರಳ ರಾಜ್ಯಗಳಲ್ಲಿ ಮಾತ್ರ ಜಿಲ್ಲಾಧ್ಯಕ್ಷರ ನೇಮಕ ಪ್ರಕ್ರಿಯೆ ಬಾಕಿ ಉಳಿದಿದ್ದು, ದೇಶದ ಬಹುತೇಕ ರಾಜ್ಯಗಳಲ್ಲಿ ಈಗಾಗಲೇ ಜಿಲ್ಲಾಧ್ಯಕ್ಷರ ನೇಮಕ ಪೂರ್ಣಗೊಂಡಿದೆ ಎಂದು ತಿಳಿಸಿದರು. ಬೆಳಗಾವಿ ಜಿಲ್ಲೆಯಲ್ಲಿ ಇಂದಿನಿಂದ ಆಗಸ್ಟ್ 5ರವರೆಗೆ ವಿವಿಧ ವಿಧಾನಸಭಾ ಕ್ಷೇತ್ರಗಳಿಗೆ ಭೇಟಿ ನೀಡಿ ಕಾಂಗ್ರೆಸ್ ಕಾರ್ಯಕರ್ತರು, ಮುಖಂಡರು ಹಾಗೂ ಪದಾಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು. ಬೆಳಗಾವಿ ನಗರ ಮತ್ತು ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಘಟಕಗಳ ಅಧ್ಯಕ್ಷರ ಆಯ್ಕೆ ಕುರಿತು ಅಭಿಪ್ರಾಯ ಸಂಗ್ರಹಿಸಿ ಸಮಗ್ರ ವರದಿಯನ್ನು ಎಐಸಿಸಿಗೆ ಸಲ್ಲಿಸಲಾಗುವುದು ಎಂದರು.
“ಪಕ್ಷವನ್ನು ತಳಮಟ್ಟದಿಂದ ಮತ್ತಷ್ಟು ಬಲಿಷ್ಠಗೊಳಿಸುವ ಉದ್ದೇಶದಿಂದ ಈ ಪ್ರಕ್ರಿಯೆ ನಡೆಯುತ್ತಿದೆ. ಕಾರ್ಯಕರ್ತರ ಅಭಿಪ್ರಾಯ, ಸಂಘಟನಾ ಶಕ್ತಿ ಹಾಗೂ ಪಕ್ಷವನ್ನು ಮುನ್ನಡೆಸುವ ಸಾಮರ್ಥ್ಯವನ್ನು ಪರಿಗಣಿಸಿ ಜಿಲ್ಲಾಧ್ಯಕ್ಷರ ಆಯ್ಕೆ ಮಾಡಲಾಗುವುದು” ಎಂದು ಅವರು ಹೇಳಿದರು.ಈ ಸಂದರ್ಭದಲ್ಲಿ ಶಾಸಕರಾದ ಆಸೀಫ್ ಸೇಠ್, ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್, ರಾಜ್ಯ ಕಾಂಗ್ರೆಸ್ ಯುವ ಘಟಕದ ಪ್ರಧಾನ ಕಾರ್ಯದರ್ಶಿ ರಾಹುಲ್ ಜಾರಕಿಹೊಳಿ, ಕಾಂಗ್ರೆಸ್ ಮುಖಂಡರಾದ ಮೃಣಾಲ್ ಹೆಬ್ಬಾಳ್ಕರ್, ಬೆಳಗಾವಿ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಗಟ್ಟಿ, ಸದಾನಂದ ಪಾಟೀಲ, ಪ್ರದೀಪ್ ಎಂ.ಜೆ., ಕಾರ್ತಿಕ್ ಪಾಟೀಲ, ಮೋಹನ್ ಯಕ್ಕುಂಡಿ, ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ
ನೀಟ್: ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ, ಮೃತ ವಿದ್ಯಾರ್ಥಿಗಳ ಆತ್ಮಕ್ಕೆ ಶಾಂತಿ ಕೋರಿ ಕ್ಯಾಂಡಲ್ ಪ್ರತಿಭಟನೆ
1991ರ ಆರ್ಥಿಕ ಸುಧಾರಣೆಗಳನ್ನು ಶ್ಲಾಘಿಸಿದ ಖರ್ಗೆ; ಸಮಗ್ರ ಅಭಿವೃದ್ಧಿಗೆ ಎರಡನೇ ಹಂತದ ಉದಾರೀಕರಣಕ್ಕೆ ಕರೆ
ಬಡ ಅಂಗವಿಕಲ ಸರ್ಫರಾಜ್ ಬಿಸ್ತಿಗೆ ಫೇಸ್ಬುಕ್ ಫ್ರೆಂಡ್ಸ್ ಸರ್ಕಲ್ ತಂಡದಿಂದ ಹೊಸ ವೀಲ್ಚೇರ್ ಉಡುಗೊರೆ 