ಅಂಬೇಡ್ಕರ್ ವ್ಯಸನವಲ್ಲ, ಆತ್ಮಸಮ್ಮಾನದ ಸಂಕೇತ : ಆರತಿ ಶಹಾಪೂರ
ವಿಜಯಪುರ 20: ಅಂಬೇಡ್ಕರ್ ಕುರಿತಾದ ಬಿಜೆಪಿಯ ಕೇಂದ್ರ ಸಚಿವ ಅಮಿತ್ ಷಾ ಅವರ ಹೇಳಿಕೆಯು ಮ(ನೋ)ನುವ್ಯಾದಿಯುಳ್ಳ ಜನರ ಮನಸ್ಥಿತಿಗೆ ಸಾಕ್ಷಿಯಾಗಿದೆ ಎಂದು ಜಿಲ್ಲೆಯ ಕಾಂಗ್ರೇಸ್ ಯುವನಾಯಕಿ ಕು.ಆರತಿ ಶಹಾಪೂರ ಅವರು ತೀವ್ರವಾಗಿ ಖಂಡಿಸಿದ್ದಾರೆ.
ಅಂಬೇಡ್ಕರ್ ನಮಗೆ ವ್ಯಸನ ಅಲ್ಲ, ನಿತ್ಯ ಸ್ಮರಣೆ. ನಮ್ಮ ಉಸಿರು ಇರುವವರೆಗೆ, ಈ ಭೂಮಿಯಲ್ಲಿ ಸೂರ್ಯ-ಚಂದ್ರ ಇರುವವರೆಗೆ ಅಂಬೇಡ್ಕರ್ ಸ್ಮರಣೆ ಇರಲಿದೆ. ನೀವು ತುಚ್ಛೀಕರಿಸಿದಷ್ಟೂ ಪುಟಿದು ಪುಟಿದು ಮೇಲೆದ್ದು ಬಂದು ಅವರು ನಮ್ಮ ಮುನ್ನಡೆಯ ಹಾದಿಗೆ ಬೆಳಕಾಗುತ್ತಾರೆ. ನಿಮ್ಮ ದುರಹಂಕಾರದ ಮಾತಿಗೆ ನಿಮ್ಮ ಬೆನ್ನಹಿಂದಿರುವ ಚೇಲಾಗಳು ಮೇಜುಕುಟ್ಟಿ ಸಂಭ್ರಮಿಸಿರಬಹುದು. ಆದರೆ ಅಂಬೇಡ್ಕರ್ ಅವರಿಂದಾಗಿ ಸಮಾನತೆ ಮತ್ತು ಘನತೆಯ ಬದುಕನ್ನು ಪಡೆದಿರುವ ದೇಶದ ಕೋಟ್ಯಂತರ ಜನ ನಿಮಗೆ ಛೀಮಾರಿ ಹಾಕುತ್ತಿದ್ದಾರೆ ಎನ್ನುವುದು ತಿಳಿದಿರಲಿ ಎಂದು ತಮ್ಮ ಆಕ್ರೋಶ ಹೊರಹಾಕಿದ್ದಾರೆ.
ಅಂಬೇಡ್ಕರ್ ಎಂಬ ಮನುಷ್ಯ ಈ ಭೂಮಿಯಲ್ಲಿ ಹುಟ್ಟದೆ ಇರುತ್ತಿದ್ದರೆ, ಸಿದ್ಧರಾಮಯ್ಯನವರಿಗೆ ಮುಖ್ಯಮಂತ್ರಿಯಾಗುವ ಅವಕಾಶವೇ ಬರುತ್ತಿರಲಿಲ್ಲ, ಅವರು ಊರಲ್ಲಿ ದನ-ಕುರಿ ಮೇಯಿಸಿಕೊಂಡು ಇರಬೇಕಾಗುತ್ತಿತ್ತು. ಮಲ್ಲಿಕಾರ್ಜುನ ಖರ್ಗೆಯವರು ರಾಜಕೀಯ ಕ್ಷೇತ್ರದಲ್ಲಿ ಉನ್ನತ ಸ್ಥಾನಗಳನ್ನು ಪಡೆದು ಎಐಸಿಸಿಯ ಅಧ್ಯಕ್ಷ ಸ್ಥಾನವನ್ನು ಅಲಂಕರಿಸುತ್ತಿರಲಿಲ್ಲ, ಕಲಬುರ್ಗಿಯ ಯಾವುದಾದರೂ ಕಾರ್ಖಾನೆಯಲ್ಲಿ ಕಾರ್ಮಿಕರಾಗಿರುತ್ತಿದ್ದರು. ನೀವು (ಅಮಿತ್ ಷಾ) ನಿಮ್ಮೂರಿನಲ್ಲಿ ಎಲ್ಲಾದರೂ ಗುಜರಿ ವ್ಯಾಪಾರ ಮಾಡಿಕೊಂಡು ಇರಬೇಕಾಗುತ್ತಿತ್ತು, ದೇಶದ ಪ್ರಧಾನಿ ನರೇಂದ್ರ ಮೋದಿ ಅವರು ಕೂಡಾ ರೈಲ್ವೆ ಸ್ಟೇಷನ್‌ನಲ್ಲಿ ಚಹಾ ಮಾರಿಕೊಂಡೇ ಇರಬೇಕಾಗಿತ್ತೋ ಏನೋ? ಅವರಿಗೂ ಪ್ರಧಾನಿಯಾಗುವ ಅವಕಾಶವೇ ಸಿಗುತ್ತಿರಲಿಲ್ಲ ಎಂದು ತಿಳಿಸಿದ್ದಾರೆ.
ನೀವು ಹೇಳುವ ವ್ಯಸನ ನಮ್ಮ ಪಾಲಿನ ಅಂಬೇಡ್ಕರ್ ಸ್ಮರಣೆ, ನಮ್ಮನ್ನೆಲ್ಲ ಇಲ್ಲಿಗೆ ತಂದು ನಿಲ್ಲಿಸಿ ನಮಗೆ ಸ್ಥಾನಮಾನ, ಗೌರವ ಮತ್ತು ಜನರ ಸೇವೆ ಮಾಡುವ ಅವಕಾಶವನ್ನು ಕೊಟ್ಟಿದೆ ಎನ್ನುವುದನ್ನು ನಾವು ಮರೆತಿಲ್ಲ. ಬಾಬಾಸಾಹೇಬ್ ಅಂಬೇಡ್ಕರ್ ಮತ್ತು ಅವರು ಕೊಟ್ಟಿರುವ ಸಂವಿಧಾನ ಇಲ್ಲದೆ ಇದ್ದರೆ ನಿಮಗೂ ಕೂಡಾ ಗೃಹಸಚಿವರಾಗಿ ಬದುಕು ಕೊಟ್ಟ ಮಹಾತ್ಮನನ್ನೇ ತುಚ್ಛೀಕರಿಸುವ ಅವಕಾಶ ನಿಮಗೆ ಸಿಗುತ್ತಿರಲಿಲ್ಲ' ಎಂದು ಟೀಕಾಪ್ರಹಾರ ನಡೆಸಿದ್ದಾರೆ.
ಮಹಾಮಾನವತಾವಾದಿಯಾಗಿ, ಸಮಾನತೆಯ ಹರಿಕಾರನಾಗಿ, ಸಮಸಮಾಜದ ಕನಸುಗಾರನಾಗಿ ಭರತ ಭೂಮಿಯಲ್ಲಿ ಅವತರಿಸಿದ ಮಹಾನಾಯಕ ಡಾ.ಬಿ.ಆರ್ ಅಂಬೇಡ್ಕರ್ ಅವರು ವಿಷನ್‌ಗಳ ಮೂಲಕ ಸ್ವತಂತ್ರ ಭಾರತ ದೇಶಕ್ಕೆ ಹೊಸ ದಿಕ್ಕು ತೋರಿಸಿದವರು. ಮಾದರಿ ಸಂವಿಧಾನ ರಚಿಸಿ ಭಾರತ ಭಾಗ್ಯ ವಿಧಾತ ಎನಿಸಿಕೊಂಡವರು. ಕೋಟ್ಯಾಂತರ ದಲಿತರು ಮತ್ತು ವಂಚಿತ ವರ್ಗದವರಿಗೆ ಅಂಬೇಡ್ಕರ್ ಎಂಬ ಹೆಸರು ಆತ್ಮ ಗೌರವದ ಸಂಕೇತವಾಗಿದೆ. ಆದ್ದರಿಂದಲೇ ಎಲ್ಲರೂ ಬಹಳ ಗೌರವ ಹಾಗೂ ಪ್ರೀತ್ಯಾಭಿಮಾನದಿಂದ ಡಾ.ಬಿ.ಆರ್ ಅಂಬೇಡ್ಕರ್ ಅವರನ್ನು ಬಾಬಾಸಾಹೇಬ್ ಎಂದೇ ಕರೆಯುತ್ತಾರೆ.
ಇಂತಹ ಮಹಾಮಾನವ ಡಾ.ಬಿ.ಆರ್ ಅಂಬೇಡ್ಕರ್ ಅವರಿಗೆ ಅವಮಾನ ಮಾಡುವುದನ್ನು ಯಾರೂ ಎಂದಿಗೂ ಸಹಿಸುವುದಿಲ್ಲ. ಅಂಬೇಡ್ಕರ್ ಅವರಿಗೆ ಅಥವಾ ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನಕ್ಕೆ ಅವಮಾನ ಮಾಡಿದರೆ ಈ ದೇಶದ ಜನ ಸಹಿಸುವುದಿಲ್ಲ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.