ತೆಲಂಗಾಣದಲ್ಲೂ ಬಿಜೆಪಿ ಅಧಿಕಾರಕ್ಕೆ: ಮುರಳೀಧರರಾವ್

ಹೈದರಾಬಾದ್ 30: ಕರ್ನಾಟಕದಲ್ಲಿ ಬಿಜೆಪಿ ಅಧಿಕಾರದ ಗದ್ದುಗೆ ಏರಿದ್ದು, ಮುಂದೆ ತೆಲಂಗಾಣದಲ್ಲೂ ಬಿಜೆಪಿ ಅಧಿಕಾರ ಹಿಡಿಯಲಿದೆ ಎಂದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಬಿಜೆಪಿ ಕರ್ನಾಟಕ ಉಸ್ತುವಾರಿ ಪಿ.ಮುರಳೀಧರರಾವ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.  

  ಕರ್ನಾಟಕದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಧಾನಸಭೆಯಲ್ಲಿ ಬಹುಮತ ಸಾಬೀತು ಪಡೆಸಿದ ಹಿನ್ನೆಲೆಯಲ್ಲಿ ತೆಲಂಗಾಣ ರಾಜ್ಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಆಯೋಜಿಸಿದ್ದ ವಿಜಯೋತ್ಸವ ಸಮಾರಂಭದಲ್ಲಿ ಮಾತನಾಡಿದ ಮುರಳೀಧರರಾವ್ ಅವರು, ಯಡಿಯೂರಪ್ಪ ಅವರು ಸೋಮವಾರ  ವಿಧಾನಸಭೆಯಲ್ಲಿ ಬಹುಮತವನ್ನು ಸಾಬೀತುಪಡಿಸಿದ್ದು, ಈ ಮೂಲಕ ದಕ್ಷಿಣ ಭಾರತದಲ್ಲಿ ಬಿಜೆಪಿ ಪ್ರಗತಿಯ ಶಕ್ತಿಯನ್ನು ನಿರೂಪಿಸಿದ್ದಾರೆ ಎಂದು ಹೇಳಿದರು.   

   ವಿಧಾನಸಭಾ  ಸ್ಪೀಕರ್ ಕೆ ಆರ್ ರಮೇಶ್ ಕುಮಾರ್ ಅವರು ಪ್ರಜಾಪ್ರಭುತ್ವ ವಿರೋಧಿ ರೀತಿಯಲ್ಲಿ ನಡೆದುಕೊಂಡಿದ್ದರು ಎಂದು ಆರೋಪಿಸಿದ ಅವರು, ಬಿಜೆಪಿ ಶಾಂತತೆ ಕಾಪಾಡಿಕೊಂಡಿತ್ತು. ಅಧಿಕಾರವನ್ನು ಪ್ರಜಾಪ್ರಭುತ್ವದ ರೀತಿಯಲ್ಲಿ ಅಧಿಕಾರ ಗಳಿಸಿಕೊಂಡು ಕರ್ನಾಟಕದ ಜನರ ವಿಶ್ವಾಸವನ್ನು ಗೆದ್ದಿದೆ ಎಂದು ಹೇಳಿದ್ದರು.  

   ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತು ಜೆಡಿ (ಎಸ್) ನೇತೃತ್ವದ ಮೈತ್ರಿಕೂಟ ಸರ್ಕಾರ ತಾನಾಗಿಯೇ ಪತನಗೊಂಡಿದೆ ಎಂದ ಅವರು, ಬಿಜೆಪಿ ಸರ್ಕಾರ  ಕರ್ನಾಟಕದಲ್ಲಿ ಪೂರ್ಣ ಅವಧಿಯನ್ನು ಪೂರ್ಣಗೊಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.  

  ಬಿಜೆಪಿಗೆ ಅಗತ್ಯ ಬಹುಮತವಿರುವುದರಿಂದ  ಕಾಂಗ್ರೆಸ್ ಮತ್ತು ಜೆಡಿಎಸ್ ಸದಸ್ಯರ ಬೆಂಬಲ  ತೆಗೆದುಕೊಳ್ಳುವ ಅಗತ್ಯವಿಲ್ಲ ಎಂದು ಮುರಳೀಧರ್ ರಾವ್ ಪ್ರತಿಪಾದಿಸಿದ್ದಾರೆ. 

   ರೈತರ  ಸಮಸ್ಯೆಗಳ ನಿವಾರಣೆ ಮತ್ತು ಕರ್ನಾಟಕ ರಾಜ್ಯದ ಅಭಿವೃದ್ಧಿಗೆ ಯಡಿಯೂರಪ್ಪ ನೇತೃತ್ವದ ಸರ್ಕಾರ  ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಅವರು ಹೇಳಿದ್ದಾರೆ