ಬೆಳಗಾವಿ-ಧಾರವಾಡ ರೈಲ್ವೆ ಮಾರ್ಗ ಯೋಜನೆ ಸಮೀಕ್ಷೆ ಕಾರ್ಯ ತ್ವರಿತವಾಗಿ ಪೂರ್ಣಗೊಳಿಸಿ ಸಂಸದ ಜಗದೀಶ್ ಶೆಟ್ಟರ್
ಬೆಳಗಾವಿ 04: ಬೆಳಗಾವಿ-ಧಾರವಾಡ ಮಾರ್ಗದ ರೈಲ್ವೆ ಯೋಜನೆಗೆ ಮಂಜೂರಾತಿ ದೊರೆತು ಬಹಳ ದಿನಗಳ ಕಳೆದಿವೆ. ಬೆಳಗಾವಿ ಜಿಲ್ಲಾ ವ್ಯಾಪ್ತಿಯಲ್ಲಿ ಭೂಸ್ವಾಧೀನ ಪ್ರಕ್ರಿಯೆ, ಸಮೀಕ್ಷೆ ಪೂರ್ಣಗೊಳ್ಳದ ಕಾರಣ ಕಾಮಗಾರಿ ವಿಳಂಬವಾಗುತ್ತಿದೆ. ಮಾರ್ಚ್ ಅಂತ್ಯದೊಳಗೆ ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಿ ಸಮೀಕ್ಷೆ ಕಾರ್ಯ ಪ್ರಾರಂಭಿಸಬೇಕು ಎಂದು ಲೋಕಸಭಾ ಸಂಸದ ಜಗದೀಶ್ ಶೆಟ್ಟರ್ ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಮಾ.4ರಂದು ನಡೆದ ಜಿಲ್ಲೆಯ ವಿವಿಧ ಕಾಮಗಾರಿಗಳ ಪ್ರಗತಿ ಪರೀಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಹಲಗಾ-ಮಚ್ಚೆ ಮಾರ್ಗವಾಗಿ ರಸ್ತೆ ನಿರ್ಮಾಣಕ್ಕೆ ಈಗಾಗಲೇ ರೈತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಭೂ ಸ್ವಾಧೀನ ಪಡಿಕೊಳ್ಳಲಾಗಿದೆ. ಖಾನಾಪುರ-ರಾಮನಗರ ರೈಲ್ವೆ ಮಾರ್ಗದಲ್ಲಿ ಸಣ್ಣ ಪುಟ್ಟ ಸೇತುವೆಗಳಿದ್ದು, ಮೇಲ್ಸೇತುವೆಗಳ ನಿರ್ಮಾಣಕ್ಕೆ ಕ್ರಮ ವಹಿಸಬೇಕು.ಬಾಕಿ ಉಳಿದಿರುವ ಭೂಸ್ವಾಧೀನವನ್ನು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಬೇಕು. ಬಳಿಕ ಏಪ್ರಿಲ್ ಮೊದಲ ವಾರದಲ್ಲಿ ಕಾಮಗಾರಿ ಆರಂಭಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು. 24/7 ಶುದ್ಧ ಕುಡಿಯುವ ನೀರು ಸರಬರಾಜು ಯೋಜನೆ ವಿಳಂಬವಾಗದಂತೆ ನಿಗದಿತ ಕಾಲಮಿತಿಯೊಳಗೆ ಕಾಮಗಾರಿಗಳನ್ನು ಪೂರ್ಣಗಳೊಳ್ಳಬೇಕು ಎಂದು ಸಂಸದ ಜಗದೀಶ್ ಶೆಟ್ಟರ್ ಸೂಚಿಸಿದರು. ಖಾನಾಪುರ ತಾಲೂಕಿನ ಕುಸುಮಳ್ಳಿ ಸೇತುವೆ ನಿರ್ಮಾಣಕ್ಕೆ ಟೆಂಡರ್ ಕರೆದು, ಕಾಮಗಾರಿ ಪ್ರಾರಂಭಿಸಲಾಗಿದೆ ಸದ್ಯದಲ್ಲೇ ಪೂರ್ಣಗೊಳಿಸಲಾಗುವುದು. ಬೆಳಗಾವಿ ಧಾರವಾಡ ರೈಲ್ವೆ ಮಾರ್ಗ ನಿರ್ಮಾಣಕ್ಕೆ ಬೆಳಗಾವಿ ವ್ಯಾಪ್ತಿಯಲ್ಲಿ ಬರುವ ಜಾಮೀನುಗಳನ್ನು ಸಮೀಕ್ಷೆ ನಡೆಸಿ ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಬೇಕು. ತಕರಾರು ಇರುವ ಊರುಗಳಿಗೆ ನೋಟಿಸ್ ಜಾರಿ ಮಾಡಿ ಸ್ಥಳೀಯ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು. ಕೆಲವು ರೈತರು ನೋಟಿಸ್ ಜಾರಿ ಮಾಡಿದರೂ ನೋಟಿಸ್ ಸ್ವೀಕರಿಸುತ್ತಿಲ್ಲ. ಹಾಗಾಗಿ ಸಮೀಕ್ಷೆ ಸಂದರ್ಭಲ್ಲಿ ಅಡತಡೆಗಳು ಉಂಟಾಗುತ್ತಿವೆ ಎಂದು ರೈಲ್ವೆ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಬಾಕಿ ಗ್ರಾಮಗಳ ವ್ಯಾಪ್ತಿಯಲ್ಲಿರುವ ಭೂ ಸಮೀಕ್ಷೆ ಪೂರ್ಣಗೊಳಿಸಬೇಕು. ಸಮೀಕ್ಷೆ ಬಳಿಕ ಟೆಂಡರ್ ಕರೆದು ಕಾಮಗಾರಿಗೆ ಚಾಲನೆ ನೀಡಲಾಗುವುದು. ನೋಟಿಸ್ ಸ್ವೀಕರಿಸದ ರೈತರೊಂದಿಗೆ ಚರ್ಚಿಸಿ ಸರ್ಕಾರದ ಮಾರ್ಗಸೂಚಿ ಅನ್ವಯ ಕಡ್ಡಾಯವಾಗಿ ಸಮೀಕ್ಷೆ ಮಾಡಬೇಕಾಗಿದೆ ಎಂದು ತಿಳಿಸಬೇಕು. ಇದಕ್ಕೆ ಬೆಳಗಾವಿ ಉಪ ವಿಭಾಗಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ರೈತರಿಗೆ ತಿಳಿಹೇಳಬೇಕು ಎಂದು ಸೂಚನೆ ನೀಡಿದರು. ತಿಳಕವಾಡಿ ರೈಲ್ವೆ ಗೇಟ್ ಮೇಲ್ಸೇತುವೆ ನಿರ್ಮಾಣಕ್ಕೆ ಈಗಾಗಲೇ ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಲಾಗಿದ್ದು, ಏಪ್ರಿಲ್ ಮೊದಲ ವಾರದಲ್ಲಿ ಕಾಮಗಾರಿಗಳನ್ನು ಪ್ರಾರಂಭಿಸಬೇಕು. ಕಾಮಗಾರಿ ಹಂತದಲ್ಲಿ ತಾನಾಜಿ ರೈಲ್ವೆ ಗೇಟ್ ಈಗಾಗಲೇ ಬಂದ್ ಇರಿಸಲು ಸೂಚನೆ ನೀಡಲಾಗಿದೆ ಎಂದು ಹೇಳಿದರು. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಬೆಳಗಾವಿ ವಿಶೇಷ ಭೂ ಸ್ವಾಧೀನಾಧಿಕಾರಿ ಬಲರಾಮ ಚವ್ಹಾಣ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಬಾಗಲಕೋಟೆ ಭೂ ವಿಶೇಷ ಸ್ವಾಧೀನಾಧಿಕಾರಿ ರಾಜಶ್ರೀ ಜೈನಾಪುರ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಲೋಕೋಪಯೋಗಿ ಇಲಾಖೆ, ರೈಲ್ವೆ ಇಲಾಖೆ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.