ಬಳ್ಳಾರಿ: 77 ನೇ ಗಣರಾಜ್ಯೋತ್ಸವ ಅಂಗವಾಗಿ ರಾಷ್ಟ್ರಧ್ವಜಾರೋಹಣಾ ನೆರವೇರಿಸಿ ಸಚಿವ ರಹೀಂ ಖಾನ್
Bellary: Minister Rahim Khan hoists the national flag as part of the 77th Republic Day
ಬಳ್ಳಾರಿ 27: ಮಹಾನ್ ಮಾನವತಾವಾದಿ ಡಾ.ಬಿ.ಆರ್ ಅಂಬೇಡ್ಕರ್ ಅವರು ರಚಿಸಿದ ಭಾರತದ ಸಂವಿಧಾನದಿಂದ ದೇಶದಲ್ಲಿ ಸರ್ವರಿಗೂ ಸಮಾನತೆ ಲಭಿಸಿದೆ ಎಂದು ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್ ಅವರು ಹೇಳಿದರು. ಜಿಲ್ಲಾಡಳಿತ ವತಿಯಿಂದ ನಗರದ ಬಿಎಂಸಿಆರ್‌ಸಿ ಮೈದಾನದ ಆವರಣದಲ್ಲಿ ಸೋಮವಾರ ಏರಿ್ಡಸಿದ್ದ 77ನೇ ಗಣರಾಜ್ಯೋತ್ಸವ ದಿನಾಚರಣೆಯ ಅಂಗವಾಗಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ ಬಳಿಕ ಅವರು ಮಾತನಾಡಿದರು.ನಮ್ಮ ದೇಶವು ವಿವಿಧತೆಯಲ್ಲಿ ಏಕತೆ ಹೊಂದಿದ ರಾಷ್ಟ್ರವಾಗಿದೆ. ದೇಶದಲ್ಲಿ ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ ಭಾವನೆಗಳು ಇವೆ ಎಂದರೆ ಅದು ಸಂವಿಧಾನ ನಮಗೆ ನೀಡಿರುವ ಕೊಡುಗೆಯಾಗಿದೆ ಎಂದರು.
ಭಾರತ ದೇಶದ ಇತಿಹಾಸದಲ್ಲಿ ಆಗಸ್ಟ್ 15 ಮತ್ತು ಜನವರಿ 26 ಅತ್ಯಂತ ಮಹತ್ವದ ದಿನಗಳಾಗಿವೆ. ಜ.26 ರಂದು ಇಡೀ ಸ್ವತಂತ್ರ ಭಾರತವನ್ನು ‘ಗಣರಾಜ್ಯ’ ಎಂದು ಘೋಷಿಸಲಾಯಿತು. ಭಾರತವು ಸಾರ್ವಭೌಮ ಗಣರಾಜ್ಯವಾಯಿತು. ಇದನ್ನು ಪ್ರಜಾರಾಜ್ಯೋತ್ಸವ ಎಂದು ಕರೆಯುತ್ತೇವೆ. ದೇಶಕ್ಕೆ ಪ್ರಜಾಪ್ರಭುತ್ವದ ಆಡಳಿತ ಪದ್ಧತಿಯನ್ನು ಅಳವಡಿಸಿಕೊಂಡ ಸಂಭ್ರಮದ ಈ ದಿನವಾಗಿದೆ ಎಂದು ತಿಳಿಸಿದರು.ನಮ್ಮ ಸಂವಿಧಾನದ ಪ್ರಸ್ತಾವನೆಯಲ್ಲಿ ನಮ್ಮ ದೇಶದ ಜನಜೀವನದ ಆಶೋತ್ತರಗಳು ಹುದುಗಿವೆ. ಅವುಗಳನ್ನು ಸಾಕಾರಗೊಳಿಸುವ ಪ್ರಯತ್ನದಲ್ಲಿ ನಾವೆಲ್ಲರೂ ತೊಡಗಬೇಕು.
ಸಂವಿಧಾನದ ಪೂರ್ವದಲ್ಲಿ ರಾಜನ ಮಗ ರಾಜ ಆಗುತ್ತಿದ್ದನು. ಆದರೆ ಸಂವಿಧಾನ ಜಾರಿಗೆ ಬಂದ ನಂತರ ಪ್ರತಿಯೊಬ್ಬರೂ ದೇಶ ಆಳುವ ನಾಯಕನಾಗುವ ಅವಕಾಶ ಕಲ್ಪಿಸಿಕೊಟ್ಟಿದೆ. ಶಿಕ್ಷಣದಿಂದ ಉನ್ನತ ಹುದ್ದೆಗಳನ್ನು ಅಲಂಕರಿಸುವ ಅವಕಾಶ ಕಲ್ಪಿಸಿಕೊಟ್ಟಿದೆ ಎಂದರು.ಪ್ರಜಾಪ್ರಭುತ್ವದ ಬೆನ್ನೆಲುಬಾಗಿರುವ ಸ್ಥಳೀಯ ಆಡಳಿತ ವ್ಯವಸ್ಥೆಯನ್ನು ಬಲಪಡಿಸಿ ಬಲಿಷ್ಠ ರಾಷ್ಟ್ರ ಕಟ್ಟುವ ಹಾಗೂ ದೇಶದ ಸಮಗ್ರತೆ ಮತ್ತು ಐಕ್ಯತೆಯನ್ನು ಕಾಪಾಡುವ ಕಾರ್ಯದಲ್ಲಿ, ದೇಶದ ರಕ್ಷಣಾ ಕಾರ್ಯದಲ್ಲಿ ಯೋಧರೊಂದಿಗೆ ಪ್ರತಿಯೊಬ್ಬ ಭಾರತೀಯನು ಕೈಜೋಡಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಪ್ರತಿಪಾದಿಸಿದರು.
ನಮ್ಮ ಸರ್ಕಾರವು ಬಡವರು, ರೈತರ ಪರವಾಗಿದೆ. ಎಲ್ಲರಿಗೂ ಸಮಾನತೆ ಕಲ್ಪಿಸಿದೆ. ನಮ್ಮ ಸರ್ಕಾರ ಬಂದ ಮೇಲೆ ಬಡ, ಶೋಷಿತ ಹಾಗೂ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಪಣತೊಟ್ಟಿದ್ದು, ಕರ್ನಾಟಕ ರಾಜ್ಯ ಸರ್ಕಾರ ಜಾರಿಗೊಳಿಸಿದ ಐದು ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರ, ರೈತರ, ನಗರ ಬಡಜನರ, ಸರ್ವರ ಆರ್ಥಿಕ ಹೊಣೆಯನ್ನು ನಿಭಾಯಿಸಿದೆ ಎಂದರು.ನಗರಗಳ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರದ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ, ಮಹಾತ್ಮಾ ಗಾಂಧಿ ನಗರ ವಿಕಾಸ ಯೋಜನೆ, ಸ್ವಚ್ಛ ಭಾರತ್ ಮಿಷನ್, ಅಮೃತ 2.0 ಯೋಜನೆ, 15ನೇ ಹಣಕಾಸು ಯೋಜನೆಗಳ ಮೂಲಕ ಪ್ರಗತಿ ಸಾಧಿಸಲಾಗಿದೆ. ಹಲವಾರು ವರ್ಷಗಳಿಂದ ದಾಖಲೆಗಳಿಲ್ಲದ ಜಾಗಗಳಿಗೆ ಖಾತಾ ವಿತರಿಸುವ ಯೋಜನೆ ಜಾರಿಗೊಳಿಸಲಾಗಿದೆ ಎಂದರು.
ಭಾರತವನ್ನು ಜಗತ್ತಿನ ಅತ್ಯಂತ ಪ್ರಬುದ್ಧ, ಪ್ರಗತಿಪರ, ಭದ್ರ, ಬಲಿಷ್ಟ ರಾಷ್ಟ್ರವನ್ನಾಗಿ ರೂಪಿಸಲು ದೇಶಭಕ್ತಿ ಅಳವಡಿಸಿಕೊಳ್ಳುವ ಮೂಲಕ ನಾವೆಲ್ಲಾ ಒಂದಾಗಿ ಪ್ರಯತ್ನಿಸೋಣ. ಪ್ರೀತಿ-ವಿಶ್ವಾಸ ಹಂಚುವ ಮೂಲಕ ಜಿಲ್ಲೆಯನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯಲು ಎಲ್ಲರೂ ಸಹಕರಿಸಬೇಕು. ಮುಂದಿನ ದಿನಗಳಲ್ಲಿ ರಾಜ್ಯದ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ದವಾಗಿದ್ದು, ಜನತೆಯ ಸಹಕಾರದೊಂದಿಗೆ ಪ್ರಗತಿಯನ್ನು ಸಾಧಿಸಲಿದೆ ಎಂದು ಅಭಿಮತ ವ್ಯಕ್ತಪಡಿಸಿದರು.ಕಾರ್ಯಕ್ರಮದಲ್ಲಿ ಪೊಲೀಸ್, ಅರಣ್ಯ ಇಲಾಖೆ, ಗೃಹರಕ್ಷಕ ದಳ ಇಲಾಖೆ ಮತ್ತು ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಂದ ಸಮವಸ್ತ್ರದಲ್ಲಿ ಶಿಸ್ತುಬದ್ದ ಪಥಸಂಚಲನ ನಡೆಯಿತು.
ಗಣರಾಜ್ಯೋತ್ಸವದ ದಿನಾಚರಣೆ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನಿಸಿ, ಗೌರವಿಸಲಾಯಿತು.ಬಳಿಕ ಶಾಲಾ ಶಿಕ್ಷಣ ಇಲಾಖೆಯ ವಿವಿಧ ಮಾಧ್ಯಮಿಕ ಮತ್ತು ಪ್ರೌಢ ಶಾಲೆಯ ವಿದ್ಯಾರ್ಥಿಗಳಿಂದ ಗಣರಾಜ್ಯೋತ್ಸವದ ನಿಮಿತ್ತ ಸಾಮೂಹಿಕ ನೃತ್ಯ, ದೇಶ ಭಕ್ತಿಗೀತೆ, ವೇಷಧಾರಿ ಒಳಗೊಂಡ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನೋಡುಗರ ಮನಸೂರೆಗೊಂಡವು.ಈ ಸಂದರ್ಭದಲ್ಲಿ ಸಂಸದ ಈ.ತುಕಾರಾಮ್, ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ,
ಮಹಾನಗರ ಪಾಲಿಕೆಯ ಮಹಾಪೌರರಾದ ಪಿ.ಗಾದೆಪ್ಪ, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯುಲು, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಪಾಲಿಕೆ ಉಪಮೇಯರ್ ಮುಬೀನಾ, ಬಳ್ಳಾರಿ ವಲಯ ಪೊಲೀಸ್ ಮಹಾನೀರೀಕ್ಷಕ ಡಾ.ಪಿ.ಎಸ್ ಹರ್ಷ, ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ ಪೆನ್ನೇಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್, ಸಹಾಯಕ ಆಯುಕ್ತ ರಾಜೇಶ್.ಹೆಚ್.ಡಿ., ಮಹಾನಗರ ಪಾಲಿಕೆ ಆಯುಕ್ತ ಪಿ.ಎಸ್.ಮಂಜುನಾಥ, ಡಿಎಂಎಫ್ ವಿಶೇಷಾಧಿಕಾರಿ ಲೋಕೇಶ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿ-ಸಿಬ್ಬಂದಿ ವರ್ಗ, ಶಾಲಾ-ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 