ಲೋಕದರ್ಶನ ವರದಿ
ಬಳ್ಳಾರಿ 18: ಮಕ್ಕಳ ಹಕ್ಕುಗಳನ್ನು ಉಲ್ಲಂಘನೆಯಾಗದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕಾರ್ಯಪ್ರವೃತರಾಗಿ ಕಾರ್ಯನಿರ್ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಎಂ.ಸತೀಶ್ ಕುಮಾರ್ ಅವರು ಹೇಳಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯ ವೀಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆ ಸಂಬಂಧಿಸಿದಂತೆ ಎಲ್ಲಾ ತಾಲೂಕು ತಶೀಲ್ದಾರ ಹಾಗೂ ಸಿಡಿಪಿಒ ಅಧಿಕಾರಿಗಳೊಂದಿಗೆ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ಮಕ್ಕಳ ರಕ್ಷಣೆ ಹಾಗೂ ಉಲ್ಲಂಘನೆ ಬಗ್ಗೆ ಪರಾರ್ಮಶಿ ಗಮನ ಹರಿಸಿ ಎಂದು ಎಲ್ಲಾ ತಾಲೂಕುಗಳಲ್ಲಿ ಅಧಿಕ ಪ್ರಚಾರ ನೀಡಿ ವರದಿ ಸಲ್ಲಿಸಬೇಕು. ಸಿಡಿಪಿಒ ಅಧಿಕಾರಿಗಳನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಿ ಆಯಾ ತಾಲೂಕಿನ ವಿವಿಧ ಸಂಘ ಸಂಸ್ಥೆಗಳು, ಎನ್.ಜಿ.ಒ ಜೊತೆಗೂಡಿ ಮಕ್ಕಳ ಹಕ್ಕುಗಳ ಉಲ್ಲಂಘನೆ ಬಗ್ಗೆ ತರಬಯಸಬೇಕು.
ಮಕ್ಕಳ ಹಕ್ಕುಗಳ ಉಲ್ಲಂಘನೆಯ ಪ್ರಕರಣಗಳಲ್ಲಿ ದೂರುಗಳ ಕುರಿತಂತೆ ಸಾರ್ವಜನಿಕರ ಅಹವಾಲನ್ನು ಸ್ವೀಕರಿಸಿ ಅಧಿಕಾರಿಗಳ ಗಮನಕ್ಕೆ ತರಬೇಕು. ಸಿಡಿಪಿಒ, ಕಾರ್ಮಿಕರ, ಶಿಕ್ಷಣ ಹಾಗೂ ಪೊಲೀಸ್ ಇಲಾಖೆಯವರು ಮಕ್ಕಳ ಹಕ್ಕುಗಳ ರಕ್ಷಣೆ ಮಾಡಲು ಪ್ರಮುಖ ಪಾತ್ರವಹಿಸುತ್ತದೆ. ಹಾಗಾಗಿ ಈ ಇಲಾಖೆಯ ಅಧಿಕಾರಿಗಳು ಹೆಚ್ಚು ಗಮನವಹಿಸಿ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು. ವಿವಿಧ ಹಳ್ಳಿಗಳಿಂದ ನಗರಕ್ಕೆ ಕರೆತಂದು ಮನೆ ಕೆಲಸ, ಹೋಟಲ್, ಗ್ಯಾರೇಜ್ನಲ್ಲಿ ಕೆಲಸ ಮಾಡುತ್ತಿರುವುದು ಗಮನಕ್ಕೆ ಬಂದಿದ್ದು, ಇದು ಕಾನೂನು ಬಾಹಿರವಾಗಿರುತ್ತದೆ ಎಂದರು.
ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು ಜೂನ್ 30 ರೊಳಗೆ ಸಂಕ್ಷೀಪ್ತ ವರದಿಯನ್ನು ಸಲ್ಲಿಸಬೇಕು. ಈ ಎಲ್ಲ ಪ್ರಕರಣಗಳ ಕುರಿತು ಕಲಬುರಗಿ ವಿಭಾಗೀಯ ಮಟ್ಟದದಲ್ಲಿ ಇಲಾಖೆಗಳ ಪ್ರಕರಣಗಳ ಕುರಿತ ಸಾರ್ವಜನಿಕರ ಅಹವಾಲುಗಳ ಸಭೆಯನ್ನು ಕಲಬುರಗಿಯಲ್ಲಿ ನಡೆಯಲಿದೆ ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯಕುಮಾರ್.ಕೆ.ಹೆಚ್, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ವಿಜಯಲಕ್ಷೀ ಮೈದೂರು, ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು ಇದ್ದರು.