ಕುಡಿಯುವ ನೀರಿನ ಕಾಮಗಾರಿಗಳನ್ನು ಆದ್ಯತೆಯಲ್ಲಿ ಪೂರ್ಣಗೊಳಿಸಿ: ಲಕ್ಷ್ಮಿಪ್ರಿಯಾ
ಕಾರವಾರ 20 : ಜಿಲ್ಲೆಯ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಕುಡಿಯುವ ನೀರಿನ ಅನುಮೋದಿತ ಕ್ರಿಯಾ ಯೋಜನೆಯ ಕಾಮಗಾರಿಗಳನ್ನು ಶೀಘ್ರದಲ್ಲಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಕೆ ಲಕ್ಷ್ಮಿಪ್ರಿಯಾ ನಿರ್ದೇಶನ ನೀಡಿದರು.ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ನಗರ ಸ್ಥಳೀಯ ಸಂಸ್ಥೆಗಳ ವಿವಿಧ ಯೋಜನೆಗಳ ಪ್ರಗತಿ ಪರೀಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಜಿಲ್ಲೆಯಲ್ಲಿನ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅನುಮೋದಿತ ಕ್ರಿಯಾ ಯೋಜನೆಗಳ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆಯನ್ನು ವಿಳಂಬ ಮಾಡುತ್ತಿರುವ ಬಗ್ಗೆ ಅಸಮಧಾನ ವ್ಯಕ್ತಪಡಿಸದ ಜಿಲ್ಲಾಧಿಕಾರಿ ಅವರು, ಅನುಮೋದನೆ ನೀಡಿದ ನಂತರವು ವಿಳಂಬ ಧೋರಣೆ ತೋರುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವ ಎಚ್ಚರಿಕೆ ನೀಡಿ , ಫೆಬ್ರವರಿ ಮೊದಲನೇ ವಾರದಲ್ಲಿ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ತಿಳಿಸಿದರು.ಕಾಮಗಾರಿಗಳು ಪೂರ್ಣಗೊಂಡ ಕೂಡಲೇ ಗುತ್ತಿಗೆದಾರರಿಗೆ ಹಣ ಪಾವತಿ ಮಾಡಬೇಕು, ನಗರ ಸ್ಥಳೀಯ ಸಂಸ್ಥೆಗಳು ಕಾಮಗಾರಿ ಪೂರ್ಣಗೊಂಡರೂ ಹಣ ಪಾವತಿ ಮಾಡದೇ ಇರುವುದರಿಂದ ಆರ್ಥಿಕ ಪ್ರಗತಿ ಕುಂಠಿತವಾಗಿದೆ. ಅಧಿಕಾರಿಗಳು ವಿಳಂಭ ದೋರಣೆ ಅನುಸರಿಸದೇ ಪೂರ್ಣಗೊಂಡ ಕಾಮಗಾರಿಗಳಿಗೆ ಸಕಾಲದಲ್ಲಿ ಹಣ ಪಾವತಿಸುವಂತೆ ಸೂಚಿಸಿದರು.ಜಿಲ್ಲೆಯಲ್ಲಿ 15ನೇ ಹಣಕಾಸು ಯೋಜನೆಯಡಿ ಬಾಕಿ ಉಳಿದಿರುವ 17 ಕಾಮಗಾರಿಗಳನ್ನು ನಿಗಧಿತ ಅವಧಿಯೊಳಗೆ ಪೂರ್ಣಗೊಳಿಸಿ ಶೇ.100 ರಷ್ಟು ಭೌತಿಕ ಮತ್ತು ಆರ್ಥಿಕ ಪ್ರಗತಿ ಸಾಧಿಸುವಂತೆ ಸೂಚಿಸಿದ ಅವರು ಅಧಿಕಾರಿಗಳು ಸರಿಯಾಗಿ ಕಾರ್ಯನಿರ್ವಹಿಸದಿದ್ದರೆ ಅಂತಹ ಅಧಿಕಾರಿಗಳಿಗೆ ನೋಟಿಸ್ ನೀಡುವಂತೆ ನಗರಾಭಿವೃದ್ಧಿಕೋಶದ ಯೋಜನಾ ನಿರ್ದೇಶಕರಿಗೆ ನಿರ್ದೇಶನ ನೀಡಿದರು.ನಗರಾಭಿವೃಧ್ಧಿಕೋಶದ ಯೋಜನಾ ನಿರ್ದೇಶಕಿ ಸ್ಟೇಲಾ ವರ್ಗಿಸ್ ಮಾತನಾಡಿ, ನಗರಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳಿಗೆ 2 ಲಕ್ಷದವರೆಗೆ ಕಾಮಗಾರಿಗಳಿಗೆ ಮಂಜೂರಾತಿ ನೀಡಲು ಅವಕಾಶವಿದ್ದು, 2 ಲಕ್ಷದೊಳಗಿನ ಕಾಮಗಾರಿಗಳನ್ನು ಶೀಘ್ರದಲ್ಲಿ ಪೂರ್ಣಗೊಳಿಸಲು ಸಾಧ್ಯವಿದೆ. ಆ ನಿಟ್ಟಿನಲ್ಲಿ ಎಲ್ಲಾ ಪೌರಾಯುಕ್ತರು ಮತ್ತು ಮುಖ್ಯಾಧಿಕಾರಿಗಳು ಕಾರ್ಯಪ್ರರ್ವತರಾಗಿ ಕಾಮಗಾರಿಗಳನ್ನು ಶೀಘ್ರದಲ್ಲೇ ಪೂರ್ಣಗೊಳಿಸಬೇಕು ಎಂದರು.ಸಭೆಯಲ್ಲಿ ನಗರಾಭಿವೃದ್ಧಿ ಕೋಶದ ಕಾರ್ಯಪಾಲಕ ಅಭಿಯಂತರ ಕೆ. ರವಿಕುಮಾರ, ಸಹಾಯಕ ಕಾರ್ಯಪಾಲಕ ಅಭಿಯಂತರ ಭಾಸ್ಕರ ಗೌಡ, ನಗರ ಸ್ಥಳೀಯ ಸಂಸ್ಥೆಗಳ ಪೌರಾಯುಕ್ತರು, ಮುಖ್ಯಾಧಿಕಾರಿಗಳು ಮತ್ತಿತರರು ಇದ್ದರು.