ಎಸ್‌.ಎಸ್‌.ಎಲ್‌.ಸಿ ವಾರ್ಷಿಕ ಪರೀಕ್ಷೆ ಅಚ್ಚುಕಟ್ಟಾಗಿ ನಡೆಸಿ: ಜಿಲ್ಲಾಧಿಕಾರಿ ನಲಿನ್ ಅತುಲ್

Conduct SSLC annual exams in a proper manner: District Collector Nalin Atul

ಎಸ್‌.ಎಸ್‌.ಎಲ್‌.ಸಿ ವಾರ್ಷಿಕ ಪರೀಕ್ಷೆ ಅಚ್ಚುಕಟ್ಟಾಗಿ ನಡೆಸಿ: ಜಿಲ್ಲಾಧಿಕಾರಿ ನಲಿನ್ ಅತುಲ್ 

ಕೊಪ್ಪಳ 12: ಪರೀಕ್ಷಾ ಮಾರ್ಗಸೂಚಿಗಳನ್ವಯ ಕೊಪ್ಪಳ ಜಿಲ್ಲೆಯಲ್ಲಿ 2025ರ ಎಸ್‌.ಎಸ್‌.ಎಲ್‌.ಸಿ ವಾರ್ಷಿಕ ಪರೀಕ್ಷೆಗಳನ್ನು ಅಚ್ಚುಕಟ್ಟಾಗಿ ನಡೆಸುವಂತೆ ಜಿಲ್ಲಾಧಿಕಾರಿ ನಲಿನ್ ಅತುಲ್ ಹೇಳಿದರು.  ಅವರು ಬುಧವಾರ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಮಾರ್ಚ್‌/ಏಪ್ರಿಲ್‌-2025ರ ಎಸ್‌.ಎಸ್‌.ಎಲ್‌.ಸಿ ವಾರ್ಷಿಕ ಪರೀಕ್ಷೆಗಳ ಕುರಿತು ಶಾಲಾ ಶಿಕ್ಷಣ ಇಲಾಖೆಯಿಂದ ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು. ಇದೇ ಮಾರ್ಚ್‌ 21 ರಿಂದ ಏಪ್ರಿಲ್ 4 ರವರೆಗೆ ನಡೆಯಲಿರುವ ಎಸ್‌.ಎಸ್‌.ಎಲ್‌.ಸಿ ವಾರ್ಷಿಕ ಪರೀಕ್ಷೆಗಳನ್ನು ಯಾವುದೇ ಅಕ್ರಮ ಚಟುವಟಿಕೆಗೆ ಅವಕಾಶ ಕೊಡದೇ ಪರೀಕ್ಷಾ ನಿಯಮಗಳಂತೆ ನಡೆಸಬೇಕು. ಪರೀಕ್ಷೆ ಮುಖ್ಯ ಅಧೀಕ್ಷಕರು ಮಾರ್ಗಸೂಚಿಗಳನ್ನು ಓದಿಕೊಂಡು ಅದರಂತೆ ಕಾರ್ಯನಿರ್ವಹಿಸಬೇಕು. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸೂಕ್ತ ಆಸನದ ವ್ಯವಸ್ಥೆ, ಅಗತ್ಯ ಕುಡಿಯುವ ನೀರು ಮತ್ತು ಶೌಚಾಲಯಗಳ ವ್ಯವಸ್ಥೆಯನ್ನು ಸಹ ಕಲ್ಪಿಸಬೇಕು. ಪರೀಕ್ಷೆ ಬರೆಯುವ ವಿಕಲಚೇತನ ವಿದ್ಯಾರ್ಥಿಗಳಿಗೆ ನೆಲ ಮಹಡಿಯಲ್ಲಿ ಸೂಕ್ತ ಆಸನದ ವ್ಯವಸ್ಥೆ ಮಾಡಬೇಕು. ಅಂಧ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿಯ ವ್ಯವಸ್ಥೆ ಮತ್ತು ಬರವಣಿಗೆ ಸಹಾಯಕರ ಒಪ್ಪಿಗೆ ಪತ್ರವನ್ನು ಪರೀಶೀಲಿಸಿ ಅಗತ್ಯ ಕ್ರಮ ವಹಿಸಬೇಕು. ಪರೀಕ್ಷಾ ಕೇಂದ್ರದೊಳಗೆ ಯಾವುದೇ ಬಗೆಯ ಮೊಬೈಲ್ ಫೋನ್, ಕ್ಯಾಲ್ಕುಲೇಟರ್ ಅಥವಾ ಇನ್ನಿತರೆ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರುವುದನ್ನು ಮತ್ತು ಪರೀಕ್ಷಾ ಅವಧಿಯಲ್ಲಿ ಕೊಠಡಿ ಮೇಲ್ವಿಚಾರಕರು ಮೊಬೈಲ್ ಬಳಕೆ ಮಾಡುವುದನ್ನು ಸಹ ನಿಷೇಧಿಸಲಾಗಿದೆ ಎಂದರು.  ಖಜಾನೆ ಇಲಾಖೆಯಲ್ಲಿ ಠೇವಣಿಯಲ್ಲಿರಿಸಲಾದ ಪ್ರಶ್ನೆಪತ್ರಿಕೆಗಳನ್ನು ಪರೀಕ್ಷಾ ದಿನದಂದು ನಿಗದಿತ ಅವಧಿಯೊಳಗೆ ಪರೀಕ್ಷಾ ಕೇಂದ್ರಗಳಿಗೆ ತಲುಪಿಸಲು ಹೊಣೆ ಆಯಾ ಮಾರ್ಗಾಧಿಕಾರಿಗಳಿಗೆ ವಹಿಸಲಾಗಿದ್ದು, ವಿಳಂಬಕ್ಕೆ ಅವಕಾಶವಿಲ್ಲದಂತೆ ಪ್ರಶ್ನೆಪತ್ರಿಕೆಯನ್ನು ನಿಗದಿತ ಅವಧಿಯೊಳಗೆ ತಲುಪಿಸಬೇಕು. ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಗಳಿಗೆ ತೆರಳಲು ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಅಗತ್ಯ ಬಸ್ ವ್ಯವಸ್ಥೆಯನ್ನು ಕಲ್ಪಿಸಬೇಕು. ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್‌ ಕೈಗೊಳ್ಳಬೇಕು. ಪರೀಕ್ಷೆ ನಡೆಸುವುದಕ್ಕೆ ಸಂಬಂಧಿಸಿದಂತೆ ಸರ್ಕಾರದ ಸೂಚನೆಗಳನ್ನು ಎಲ್ಲ ಅಧಿಕಾರಿಗಳು ಕಟ್ಟುನಿಟ್ಟಾಗಿ ಪಾಲಿಸಬೇಕು. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಹಾಗೂ ಪರೀಕ್ಷಾ ಕಾರ್ಯಕ್ಕೆ ನಿಯೋಜನೆಗೊಂಡ ಶಿಕ್ಷಕರು, ಅಧಿಕಾರಿ, ಸಿಬ್ಬಂದಿಗಳನ್ನು ಹೊರತುಪಡಿಸಿ, ಇನ್ನುಳಿದವರ ಪ್ರವೇಶಕ್ಕೆ ಅವಕಾಶ ನೀಡಬಾರದು. ಪರೀಕ್ಷಾ ಕೇಂದ್ರದ 200 ಮೀಟರ್ ಸುತ್ತಲು ನಿಷೇಧಾಜ್ಞೆ ಜಾರಿಗೊಳಿಸಲಾಗುವುದು. ಶಿಕ್ಷಕರು, ಪರೀಕ್ಷಾ ನಿಯೋಜಿತ ಸಿಬ್ಬಂದಿಗಳು ಜವಾಬ್ದಾರಿ ಹಾಗೂ ಎಚ್ಚರಿಕೆಯಿಂದ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೇಯ ಅವರು ಮಾತನಾಡಿ, ಪರೀಕ್ಷೆ ಸಂದರ್ಭದಲ್ಲಿ ಸಿಸಿ ಕ್ಯಾಮರಾ ಆಫ್ ಆಗದಂತೆ ಕ್ರಮ ವಹಿಸಬೇಕು. ಯಾವುದೇ ತಾಂತ್ರಿಕ ಸಮಸ್ಯೆಯಾದಲ್ಲಿ ಕೂಡಲೇ ಸರಿಪಡಿಸಬೇಕು. ಕ್ಯಾಮರಾ ಒಂದು ನಿಮಿಷಕ್ಕಿಂತ ಹೆಚ್ಚು ಬಂದ್ ಆಗಬಾರದು. ಪರೀಕ್ಷಾ ಕೇಂದ್ರಗಳಲ್ಲಿ ಯುಪಿಎಸ್ ಬ್ಯಾಟರಿ ವ್ಯವಸ್ಥೆ ಇರಬೇಕು. ವೆಬ್‌ಕಾಸ್ಟಿಂಗ್ ಮಾದರಿಯಲ್ಲಿ ನಡೆಯುವ ಪರೀಕ್ಷೆಯ ಕುರಿತು ಕಳೆದ ಬಾರಿ ಸಿಸಿ ಕ್ಯಾಮರಾದ ಬಗ್ಗೆ ಮಕ್ಕಳಿಗೆ ಶಿಕ್ಷಕರೇ ಭಯ ಹುಟ್ಟಿಸಿದ್ದರು ಎಂದು ಹೇಳಲಾಗುತ್ತಿದೆ. ಈ ಬಾರಿ ಮಕ್ಕಳಿಗೆ ಯಾವುದೇ ರೀತಿಯ ಭಯ ಹುಟ್ಟಿಸದೇ, ಪರೀಕ್ಷೆಯನ್ನು ಅರಾಮಾಗಿ, ಚೆನ್ನಾಗಿ ಬರೆಯಿರಿ ಎಂದು ಅವರಿಗೆ ಭರವಸೆ ನೀಡಬೇಕು. ಪ್ರಸ್ತುತ ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದ್ದು, ಪರೀಕ್ಷೆ ಬರೆಯುವ ಮಕ್ಕಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಿ. ಕುಡಿಯುವ ನೀರಿನ ಪೂರೈಕೆಯಲ್ಲಿ ತೊಂದರೆ ಇದ್ದಲ್ಲಿ ಆಯಾ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು, ಸಂಬಂಧಿಸಿದ ನಗರಸಭೆ ಅಥವಾ ಗ್ರಾಮ ಪಂಚಾಯತ್ ಅಧಿಕಾರಿಗಳನ್ನು ಮುಂಚಿತವಾಗಿ ಸಂಪರ್ಕಿಸಿ ಕ್ರಮ ಕೈಗೊಳ್ಳಬೇಕು ಎಂದರು.  ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕ ಶ್ರೀಶೈಲ ಬಿರಾದಾರ ಅವರು ಮಾತನಾಡಿ, ಈ ಬಾರಿಯ ಎಸ್‌.ಎಸ್‌.ಎಲ್‌.ಸಿ ವಾರ್ಷಿಕ ಪರೀಕ್ಷೆಗೆ ಜಿಲ್ಲೆಯ ಒಟ್ಟು 25,578 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಜಿಲ್ಲೆಯ ಗಂಗಾವತಿ ತಾಲ್ಲೂಕಿನ 23, ಕೊಪ್ಪಳ ತಾಲ್ಲೂಕಿನ 21, ಕುಷ್ಟಗಿ ತಾಲ್ಲೂಕಿನ 15 ಹಾಗೂ ಯಲಬುರ್ಗಾ ತಾಲ್ಲೂಕಿನ 14 ಸೇರಿದಂತೆ ಒಟ್ಟು 73 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿವೆ. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಒಬ್ಬ ಮುಖ್ಯ ಅಧೀಕ್ಷಕರು ಹಾಗೂ ಪ್ರಶ್ನೆಪತ್ರಿಕೆ ಅಭಿರಕ್ಷಕರನ್ನು ನೇಮಿಸಲಾಗಿದೆ ಹಾಗೂ ಕೊಪ್ಪಳ, ಗಂಗಾವತಿ, ಕುಷ್ಟಗಿ ಮತ್ತು ಯಲಬುರ್ಗಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ಆಯಾ ವಿಭಾಗಗಳ ಪ್ರಶ್ನೆ ಪತ್ರಿಕೆ ಪಾಲಕರಾಗಿರುತ್ತಾರೆ ಎಂದು ಮಾಹಿತಿ ನೀಡಿದರು. ಸಭೆಯಲ್ಲಿ ವಿವಿಧ ತಾಲ್ಲೂಕುಗಳ ತಹಶೀಲ್ದಾರರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ವಿಷಯ ಪರೀವೀಕ್ಷಕರು, ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು, ಎಸ್‌.ಎಸ್‌.ಎಲ್‌.ಸಿ ವಾರ್ಷಿಕ ಪರೀಕ್ಷೆಯ ತಾಲ್ಲೂಕು ನೋಡಲ್ ಅಧಿಕಾರಿಗಳು, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಎಲ್ಲಾ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.