ಬಳ್ಳಾರಿಯಲ್ಲಿ ಸಂವಿಧಾನ ದಿನಾಚರಣೆ: ಗಮನಸೆಳೆದ ಬೃಹತ್ ಜಾಥ
Constitution Day celebration in Bellary: Huge procession draws attention
ಬಳ್ಳಾರಿ 26: ಭಾರತದ ಸಂವಿಧಾನ ನಮ್ಮ ದೇಶದ ಹೃದಯ ಇದ್ದಂತೆ ಎಂದು ಡಾ.ಬಾಬು ಜಗನ್ ಜೀವನ್ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಮಹರ್ಷಿ ವಾಲ್ಮೀಕಿ ಭವನದಲ್ಲಿ ಬುಧವಾರ ಏರಿ್ಡಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಭಾರತ ವೈವಿಧ್ಯತೆಯಿಂದ ಕೂಡಿರುವ ದೇಶ. ಹೀಗಾಗಿ ಭಾರತೀಯ ಸಂವಿಧಾನ ರಚಿಸುವುದು ಸುಲಭದ ಕೆಲಸವಾಗಿರಲಿಲ್ಲ. ಎಲ್ಲಾ ಧರ್ಮಗಳು, ನಂಬಿಕೆಗಳು, ಜಾತಿಗಳು ಮತ್ತು ವೈವಿಧ್ಯಮಯ ಸಿದ್ಧಾಂತಗಳ ಜನರ ಒಟ್ಟುಗೂಡಿಸುವುದು ಕಷ್ಟಕರವಾಗಿತ್ತು. ಸಂವಿಧಾನವನ್ನು ರಚಿಸುವಾಗ ಸಾಮಾನ್ಯರ ಜೀವನವನ್ನು ಸುಧಾರಣೆ ತರುವ ತತ್ವಗಳನ್ನು ಸೇರಿಸಿ ಜಾರಿಗೆ ತರಲಾಯಿತು ಎಂದು ತಿಳಿಸಿದರು.
ಪ್ರಸ್ತುತ ಸಮಾಜದಲ್ಲಿ ಓದು ಮತ್ತು ಜ್ಞಾನದಿಂದ ಮಾತ್ರ ಸಮಸ್ಯೆ ಎದುರಿಸಲು ಸಾಧ್ಯ. ಮಕ್ಕಳಿಗೆ ಉಜ್ವಲ ಭವಿಷ್ಯವಿದ್ದು, ಅಂಬೇಡ್ಕರ್ ರಂತೆ ಅಪಾರ ಜ್ಞಾನ ಹೊಂದಿ, ಮೊಬೈಲ್ ಗೀಳಿಗೆ ಬೀಳದೇ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಉತ್ತಮ ನಾಗರಿಕನಾಗಿ ಬಾಳುವುದಾಗಿ ಮಕ್ಕಳು ಸಂಕಲ್ಪ ಹೊಂದಬೇಕು ಎಂದರು.
ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ ಅವರು ಮಾತನಾಡಿ, ವಿದ್ಯಾರ್ಥಿಗಳು ಸಂವಿಧಾನವನ್ನು ತಿಳಿದುಕೊಂಡು ಅರ್ಥೈಸಿಕೊಳ್ಳಬೇಕು. ಇದು ಭವಿಷ್ಯದಲ್ಲಿ ಪ್ರಮುಖ ಪಾತ್ರವಹಿಸಲಿದೆ. ಜಗತ್ತಿನ ಅತಿದೊಡ್ಡ ಸಂವಿಧಾನವನ್ನು ಡಾ.ಬಿ.ಆರ್ ಅಂಬೇಡ್ಕರ್ ಅವರು ಭಾರತೀಯರಿಗೆ ನೀಡಿದ್ದಾರೆ. ಸಂವಿಧಾನವನ್ನು ರಚಿಸಲು ಅನೇಕರ ಶ್ರಮವಿದೆ. ಬಾಬಾ ಸಾಹೇಬರು ಸಂವಿಧಾನ ಕರಡು ರಚನಾ ಸಮಿತಿಯ ಅಧ್ಯಕ್ಷತೆ ವಹಿಸಿ ಪ್ರಪಂಚದ ಎಲ್ಲಾ ಸಂವಿಧಾನಗಳನ್ನು ಅಧ್ಯಯನ ಮಾಡಿ ನಮ್ಮ ದೇಶದ ಆರ್ಥಿಕ ಮತ್ತು ಸಾಮಾಜಿಕ ಸ್ಥಿತಿಗೆ ಹೊಂದುವಂತೆ ಒಂದು ಸಮಗ್ರವಾದ ಸಂವಿಧಾನವನ್ನು ಸಿದ್ಧಪಡಿಸಿದ್ದಾರೆ. ನಮ್ಮ ಸಂವಿಧಾನ ವಿಶ್ವದ ಅತಿದೊಡ್ಡ ಲಿಖಿತ ಸಂವಿಧಾನವಾಗಿದೆ ಎಂದು ತಿಳಿಸಿದರು.
ಭಾರತವನ್ನು ಸಾರ್ವಭೌಮ, ಜಾತ್ಯತೀತ, ಸಮಾಜವಾದಿ ಮತ್ತು ಪ್ರಜಾಸತ್ತಾತ್ಮಕ ಗಣತಂತ್ರ ದೇಶ ಎಂದು ಸಂವಿಧಾನದಲ್ಲಿ ಘೋಷಿಸಲಾಗಿದೆ. ಇಲ್ಲಿರುವ ಪ್ರತಿಯೊಬ್ಬ ಪ್ರಜೆಗೂ ಸಮಾನತೆ, ನ್ಯಾಯ ಮತ್ತು ಸ್ವಾತಂತ್ರ್ಯ ಒದಗಿಸಲಾಗಿದೆ. ಭಾರತದ ಸಂವಿಧಾನವನ್ನು ವಿಶ್ವದ ಶ್ರೇಷ್ಠ ಸಂವಿಧಾನಗಳಲ್ಲಿ ಒಂದು ಎಂದು ಪರಿಗಣಿಸಲಾಗಿದೆ. ಸಾಮಾನ್ಯರು ಅತ್ಯುನ್ನತ ಪದವಿ ಅಲಂಕರಿಸಲು ಸಂವಿಧಾನವೇ ಮೂಲ ಕಾರಣ ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್ ಅವರು ಮಾತನಾಡಿ, ಸಂವಿಧಾನವನ್ನು ಕೇವಲ ಓದಿದರೆ ಸಾಲದು. ಸಂವಿಧಾನದ ಆಶಯ ಮತ್ತು ಅದರ ಮೌಲ್ಯಗಳನ್ನು ಅಳವಡಿಸಿಕೊಂಡಾಗ ಮಾತ್ರ ಭಾರತ ದೇಶ ಸುಸ್ಥಿರ ಅಭಿವೃದ್ಧಿ ಹೊಂದಲಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಗಂಗಾವತಿಯ ಎಸ್‌ಕೆಎನ್‌ಜಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಬಾರಿಕರ ಫಣಿರಾಜ ಅವರು ವಿಶೇಷ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ‘ನನ್ನ ಮತ ನನ್ನ ಹಕ್ಕು’ ಎಂಬ ಧ್ಯೇಯವಾಕ್ಯದ ಮಹತ್ವ ತಿಳಿಯಲು ಹಮ್ಮಿಕೊಂಡಿದ್ದ ಸ್ಪರ್ಧೆಗಳಲ್ಲಿ ವಿಜೇತರಾದ ಸ್ಪರ್ಧಾರ್ಥಿಗಳನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಮೇಯರ್ ಪಿ.ಗಾದೆಪ್ಪ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ., ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಚಿದಾನಂದ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಶಾಷು ಮೋದಿನ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಜಲಾಲಪ್ಪ, ಬಳ್ಳಾರಿ ತಾಲ್ಲೂಕು ತಹಶೀಲ್ದಾರ ರೇಖಾ, ಸಫಾಯಿ ಕರ್ಮಚಾರಿಗಳ ಜಿಲ್ಲಾ ಮಟ್ಟದ ಜಾಗೃತಿ ಸಮಿತಿಯ ಸದಸ್ಯ ಕಂದಕೂರ ರಾಮುಡು, ಮಹಾನಗರ ಪಾಲಿಕೆ ಸದಸ್ಯ ಹನುಮಂತಪ್ಪ, ಮುಖಂಡರಾದ ಮಾನಯ್ಯ, ಎಲ್.ಮಾರೆಣ್ಣ, ಡಿ.ವೆಂಕಮ್ಮ, ಕಮಲ ಮರಿಸ್ವಾಮಿ, ಬೌದ್ಧ ಧರ್ಮ ಗುರು ಕಮಲರತ್ನ ಬಜೆಂತಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು, ವಿವಿಧ ವಸತಿ ನಿಲಯಗಳ ಪ್ರಾಂಶುಪಾಲರು, ವಿದ್ಯಾರ್ಥಿಗಳು ಮತ್ತು ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು, ಎನ್‌ಎಸ್‌ಎಸ್ ಘಟಕ, ಸ್ಕೌಟ್ಸ್ ಮತ್ತು ಗೈಡ್ಸ್ ಘಟಕದ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ಸಂವಿಧಾನ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಜಾಥವು ನೋಡುಗರ ಗಮನ ಸೆಳೆಯಿತು. ಜಾಥಾಗೆ ಮೇಯರ್ ಪಿ.ಗಾದೆಪ್ಪ, ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಪಂ ಸಿಇಒ ಮಹಮ್ಮದ್ ಹಾರೀಸ್ ಸುಮೇರ್ ಅವರು ಹಸಿರು ನಿಶಾನೆ ತೋರಿಸಿ ಸೈಕಲ್ ಸವಾರಿ ಮಾಡುವ ಚಾಲನೆ ನೀಡಿದರು.
ಜಾಥಾದಲ್ಲಿ ಶಾಲಾ-ಕಾಲೇಜು ಮಕ್ಕಳು ಸಂವಿಧಾನ ಕುರಿತಂತೆ ರಾಷ್ಟ್ರಧ್ವಜ ಮತ್ತು ಸಂವಿಧಾನದ ಪ್ರಮುಖ ಕಲಂಗಳು, ಭಾಗಗಳು ಹಾಗೂ ಪ್ರಮುಖ ನುಡಿಮುತ್ತುಗಳನ್ನು ಪ್ಲಕಾರ್ಡ್ ನಲ್ಲಿ ಪ್ರತಿಬಿಂಬಿಸುವಂತೆ ಪ್ರದರ್ಶಿಸುವುದರ ಮೂಲಕ ಸಾಗಿದರು.
ಭಾರತ ಮಾತೆಯ ಜೊತೆಗೆ ಮಹಾತ್ಮ ಗಾಂಧೀಜಿ, ಜವಾಹರಲಾಲ್ ನೆಹರು, ಗೌತಮ ಬುದ್ಧ, ವಿಶ್ವಗುರು ಬಸವಣ್ಣ, ಡಾ.ಬಿ.ಆರ್.ಅಂಬೇಡ್ಕರ್, ಝಾನ್ಸಿ ರಾಣಿ ಲಕ್ಷ್ಮೀಬಾಯಿ ಒಳಗೊಂಡ ಮಹನೀಯರ ವೇಷಧಾರಿ ಮಕ್ಕಳು ಗಮನಸೆಳೆದರು.
ಜಾಥಾವು ಜಿಲ್ಲಾಧಿಕಾರಿಗಳ ಕಚೇರಿ ಆವರಣದಿಂದ ಆರಂಭಗೊಂಡು ಹೆಚ್.ಆರ್.ಗವಿಯಪ್ಪ ವೃತ್ತ, ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಮಾರ್ಗವಾಗಿ ಮಹರ್ಷಿ ವಾಲ್ಮೀಕಿ ಭವನದ ವೇದಿಕೆ ಕಾರ್ಯಕ್ರಮ ಸ್ಥಳ ತಲುಪಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 