ಬೆಂಗಳೂರು, ಜೂನ್ 29: ಖ್ಯಾತ ನಟ ಡಾ. ಅಂಬರೀಷ್ ಅವರ ಸ್ಮಾರಕವನ್ನು ನಿರ್ಮಿಸಲು ಕಂಠೀರವ ಸ್ಟುಡಿಯೋಸ್ ಆವರಣದಲ್ಲಿ 1 ಎಕರೆ 34 ಗುಂಟೆ ಜಾಗ ಗುರುತಿಸಲಾಗಿದ್ದು, ಶೀಘ್ರವೇ ಸ್ಮಾರಕ ನಿರ್ಮಾಣಕ್ಕೆ ಅಗತ್ಯ ಯೋಜನೆ ರೂಪಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೂಚಿಸಿದ್ದಾರೆ.ಅವರು ಇಂದು ಡಾ. ಅಂಬರೀಷ್ ಸ್ಮಾರಕ ಪ್ರತಿಷ್ಠಾನದ ಉನ್ನತ ಮಟ್ಟದ ಸಮಿತಿಯ ಪ್ರಥಮ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸ್ಮಾರಕ ನಿರ್ಮಾಣಕ್ಕಾಗಿ ರಾಜ್ಯ ಸರ್ಕಾರವು 5 ಕೋಟಿ ರೂ. ಒದಗಿಸಲಿದೆ. ಸ್ಮಾರಕ ನಿರ್ಮಾಣಕ್ಕೆ ಶೀಘ್ರವೇ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.ಅಲ್ಲದೆ, ಸ್ಮಾರಕ ನಿರ್ಮಾಣ ತ್ವರಿತಗತಿಯಲ್ಲಿ ನಡೆಯಲು ಅನುಕೂಲವಾಗುವಂತೆ ಇಲಾಖೆಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಉಪ ಸಮಿತಿ ರಚಿಸುವಂತೆ ಸೂಚಿಸಿದರು.ಸಭೆಯಲ್ಲಿ ಸಂಸದೆ ಸುಮಲತಾ ಅಂಬರೀಷ್, ನಟ ಅಭಿಷೇಕ್ ಅಂಬರೀಷ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಹಿರಿಯ ನಟ ದೊಡ್ಡಣ್ಣ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಕಾರ್ಯದರ್ಶಿ ಎಂ. ಮಹೇಶ್ವರರಾವ್, ಆಯುಕ್ತ ಡಾ. ಪಿ.ಎಸ್. ಹರ್ಷ ಮತ್ತು ಇತರರು ಭಾಗವಹಿಸಿದ್ದರು.