ಕನಕಪುರಕ್ಕೆ ಮತ್ತೆ ವೈದ್ಯಕೀಯ ಕಾಲೇಜಿಗೆ ಆಗ್ರಹಿಸಿ ಬಿಜೆಪಿ ಸರ್ಕಾರಕ್ಕೆ ಡಿ.ಕೆ. ಶಿವಕುಮಾರ್ ಪತ್ರ

ಬೆಂಗಳೂರು,ಡಿ 7- ಮೈತ್ರಿ ಸರ್ಕಾರದಲ್ಲಿ ರಾಮನಗರ ಜಿಲ್ಲೆಯ ಕನಕಪುರಕ್ಕೆ ಮಂಜೂರಾಗಿದ್ದ ವೈದ್ಯಕೀಯ ಕಾಲೇಜನ್ನು ರದ್ದುಪಡಿಸಿರುವ ಸರ್ಕಾರದ ಅದೇಶವನ್ನು ಹಿಂತೆಗೆದುಕೊಂಡು ಕನಕಪುರದಲ್ಲೇ ಕಾಲೇಜು ಸ್ಥಾಪನೆಗೆ ಮರು ಆದೇಶ ಹೊರಡಿಸಬೇಕೆಂದು ಆಗ್ರಹಿಸಿ ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ. 

ಈ  ಕುರಿತು ಯಡಿಯೂರಪ್ಪ ಅವರಿಗೆ ಬರೆದಿರುವ ಪತ್ರ ಬರೆದಿರುವ ಶಿವಕುಮಾರ್, ಕನಕಪುರಕ್ಕೆ ಮಂಜೂರಾಗಿದ್ದ ವೈದ್ಯಕೀಯ ಕಾಲೇಜು ರದ್ದುಪಡಿಸಿ ಚಿಕ್ಕಬಳ್ಳಾಪುರಕ್ಕೆ ವರ್ಗಾವಣೆ ಮಾಡಿರುವುದು ಸರಿಯಲ್ಲ. ಕೂಡಲೇ ಕಾಲೇಜು ಸ್ಥಾಪನೆಗೆ ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ. 

ಚಿಕ್ಕಬಳ್ಳಾಪುರಕ್ಕೆ ವೈದ್ಯಕೀಯ ಕಾಲೇಜು ಮಂಜೂರಾಗಿರುವುದಕ್ಕೆ ನಮ್ಮ ಅಭ್ಯಂತರವಿಲ್ಲ. ಆದರೆ ಕನಕಪುರಕ್ಕೆ ಮಂಜೂರಾಗಿದ್ದ ಕಾಲೇಜು ರದ್ದುಮಾಡಿರುವುದಕ್ಕೆ ನಮ್ಮ ಆಕ್ಷೇಪವಿದೆ. ಕೂಡಲೇ ಕನಕಪುರಕ್ಕೆ ಮೆಡಿಕಲ್ ಕಾಲೇಜು ಮಂಜೂರು ಮಾಡಿ, ಭೂಮಿಪೂಜೆ ನೆರವೇರಿಸಲು ಸಮಯ ನೀಡುವಂತೆ ಮನವಿ ಮಾಡಿದ್ದಾರೆ. 

ಒಂದುವೇಳೆ ತಮ್ಮ ಮತಕ್ಷೇತ್ರಕ್ಕೆ ಕಾಲೇಜು ನೀಡದಿದ್ದರೆ ತಮ್ಮದೇ ಆದ ಹಾದಿಯಲ್ಲಿ ಗಂಭೀರ ಹೋರಾಟಮಾಡುವುದಾಗಿ ಶಿವಕುಮಾರ್ ಸರ್ಕಾರಕ್ಕೆ ಪತ್ರದ ಮೂಲಕ ಎಚ್ಚರಿಕೆ ರವಾನಿಸಿದ್ದಾರೆ.