ಅಪರಾಧಗಳನ್ನು ನಿಯಂತ್ರಿಸಲು ಇಲಾಖೆ ಕಟ್ಟುನಿಟ್ಟಿನ ಕ್ರಮ: ಐಜಿಪಿ

ಅಪರಾಧಗಳನ್ನು ನಿಯಂತ್ರಿಸಲು ಇಲಾಖೆ ಕಟ್ಟುನಿಟ್ಟಿನ ಕ್ರಮ: ಐಜಿಪಿ Department takes strict action to control crimes: IGP

ಲೋಕದರ್ಶನ ವರದಿ 

ಜಮಖಂಡಿ 18: ಸಮಾಜಘಾತುಕ ಚಟುವಟಿಕೆಗಳು ಸೇರಿದಂತೆ ವಿವಿಧ ಅಪರಾಧಗಳನ್ನು ನಿಯಂತ್ರಿಸಲು ಪೋಲಿಸ್ ಇಲಾಖೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಉತ್ತರ ವಲಯದ ನೂತನ ಐಜಿಪಿ ಸಂದೀಪ ಪಾಟೀಲ ಹೇಳಿದರು. 

ಸಂಜೆ ನಗರದ ಶಹರ ಪೊಲೀಸ್ ಠಾಣೆಗೆ ಭೇಟಿ ನೀಡಿ ಪರೀಶೀಲನೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೂತನವಾಗಿ ಅಧಿಕಾರ ವಹಿಸಿಕೊಂಡ ನಂತರ ನಮ್ಮ ವ್ಯಾಪ್ತಿಯಲ್ಲಿ ಇರುವ ವಿವಿಧ ಜಿಲ್ಲೆಗಳು ಹಾಗೂ ಠಾಣೆಗಳಿಗೆ ಭೇಟಿ ನೀಡಿ ಅಲ್ಲಿನ ಕಾನೂನು ಸುವ್ಯವಸ್ಥೆಯ ಸ್ಥಿತಿಗತಿಗಳನ್ನು ಪರೀಶೀಲಿಸಲಾಗುತ್ತಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಪೊಲೀಸ್ ಇಲಾಖೆಯ ಮೊದಲ ಆದ್ಯತೆಯಾಗಿದೆ ಎಂದರು. 

ಮುಧೋಳ ಹಾಗೂ ಜಮಖಂಡಿ ಪೊಲೀಸ್ ಠಾಣೆಗಳಿಗೆ ಭೇಟಿ ನೀಡಿ ದಾಖಲಾದ ಅಪರಾಧ ಪ್ರಕರಣಗಳು, ತನಿಖೆಯ ಪ್ರಗತಿ ಹಾಗೂ ಕೈಗೊಂಡಿರುವ ಕ್ರಮಗಳ ಕುರಿತು ಮಾಹಿತಿ ಪಡೆದಿದ್ದೇನೆ. ಗಾಂಜಾ, ಮಾವಾ, ಡ್ರಗ್ಸ್‌ ಮಾರಾಟ ಜಾಲಗಳನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು. 

ತಾಲೂಕಿನಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಅದನ್ನು ತಡೆಗಟ್ಟಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗುವುದು ಎಂದು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು. ಡಿವೈಎಸ್‌ಪಿ ಸೈಯದ್ ರೋಷನ್ ಜಮೀರ್, ಸಿಪಿಐ ಮಲ್ಲಪ್ಪ ಮಡ್ಡಿ, ಪಿಎಸ್‌ಐ ಅನೀಲ ಕುಂಬಾರ ಸೇರಿದಂತೆ ಪೊಲೀಸ್ ಇಲಾಖೆಯ ಸಿಬ್ಬಂದಿ ಇದ್ದರು.