ಬೆಂಗಳೂರು, ಡಿ 7- ಕೇಂದ್ರದ ಎನ್.ಡಿ.ಎ ಸರ್ಕಾರ ರಾಜ್ಯಗಳಿಗೆ ತನ್ನ ಪಾಲಿನ ಸರಕು ಮತ್ತು ಸೇವಾ ತೆರಿಗೆ ಜಿಎಸ್‌ಟಿ ಹಣ ನೀಡದೇ ನಿರ್ಲಕ್ಷ್ಯವಹಿಸಿರುವುದರ ವಿರುದ್ಧ ಕಾಂಗ್ರೆಸ್ ತೀವ್ರ ಹೋರಾಟ ನಡೆಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಎಚ್ಚರಿಕೆ ನೀಡಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ಕೇಂದ್ರದಿಂದ ಜಿಎಸ್ ಟಿ ಅನುದಾನ ಬಿಡುಗಡೆ ಆಗುತ್ತಿಲ್ಲ. ಯುಪಿಎ ಸರ್ಕಾರದ ಅವಧಿಯಲ್ಲಿ ಜಿಎಸ್ ಟಿ ಜಾರಿಗೆ ತರಲು ಪ್ರಯತ್ನ ನಡೆದಿತ್ತು. ಅದಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸಿತ್ತು. ನಂತರ ಬಿಜೆಪಿ ಸರ್ಕಾರವೇ ಜಿಎಸ್ ಟಿ ಜಾರಿಗೆ ತಂದಿದೆ. ಆದರೆ ರಾಜ್ಯಕ್ಕೆ ಆಗಸ್ಟ್ ನಿಂದ ಬರಬೇಕಾಗಿರುವ ಅನುದಾನ ಬಿಡುಗಡೆ ಮಾಡಿಲ್ಲ ಎಂದರು.
ಕೇಂದ್ರ ರಾಜ್ಯಕ್ಕೆ ಜಿ.ಎಸ್.ಟಿ 5600 ಕೋಟಿ ರೂ. ಬಾಕಿ ನೀಡಬೇಕಿದ್ದು, ಇಷ್ಟು ದೊಡ್ಡ ಪ್ರಮಾಣದ ಹಣ ಬಾಕಿ ಉಳಿಸಿಕೊಂಡರೆ ರಾಜ್ಯ ಸರ್ಕಾರ ಆಡಳಿತ ನಡೆಸಲು ಹೇಗೆ ಸಾಧ್ಯ. ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಮತ್ತು ರಾಜ್ಯಗಳ ನಡುವೆ ಉತ್ತಮ ಬಾಂಧವ್ಯ ಇರಬೇಕು. ಇದನ್ನು ಅರ್ಥಮಾಡಿಕೊಂಡು ಕೂಡಲೇ ನೆರವು ಬಿಡುಗಡೆ ಮಾಡಲು ಎನ್.ಡಿ.ಎ ಸರ್ಕಾರ ಮುಂದಾಗಬೇಕು ಎಂದರು.
ರಾಜ್ಯ ಸರ್ಕಾರ ಪ್ರವಾಹ ಹಾಗೂ ಬರಗಾಲದ ಸುಳಿಗೆ ಸಿಲುಕಿದೆ. ಇಂಥ ಪರಿಸ್ಥಿತಿಯಲ್ಲಿ ರಾಜ್ಯದ ಪಾಲಿನೆ ನೆರವು ನೀಡದಿದ್ದರೆ ಸರ್ಕಾರ ನಡೆಸುವುದು ಹೇಗೆ ಸಾಧ್ಯ?. ಕೇಂದ್ರ ಸರ್ಕಾರ ನಮ್ಮ ಪಾಲಿನ ಹಣವನ್ನೇ ನಮಗೆ ನೀಡುತ್ತಿಲ್ಲ ಎಂದರೆ ಏನರ್ಥ? ಎಂದು ಪ್ರಶ್ನಿಸಿದರು.
ಕೇಂದ್ರ ಸರ್ಕಾರ ರಾಜ್ಯಕ್ಕೆ ಪತ್ರ ಬರೆದು ಈಗ ಜಿಎಸ್ ಟಿ ಹಣ ನೀಡಲು ಆಗುವುದಿಲ್ಲ ಎಂದು ಹೇಳಿದೆ. ಆದರೆ
ಮುಖ್ಯಮಂತ್ರಿ ಯಡಿಯೂರಪ್ಪ ಈ ಬಗ್ಗೆ ಮಾತ್ರ ಧ್ವನಿ ಎತ್ತುತ್ತಿಲ್ಲ. ರಾಜ್ಯದ ಅಭಿವೃದ್ಧಿಗೆ ಕೇಂದ್ರದ ಮೇಲೆ ಒತ್ತಡ ಹೇರಬೇಕು. ಇಲ್ಲವಾದಲ್ಲಿ ಕೇಂದ್ರ ಸರ್ಕಾರ ರಾಜ್ಯದ ನೆರವಿಗೆ ಧಾವಿಸುವುದಿಲ್ಲ ಎಂದು ದಿನೇಶ್ ಗುಂಡೂರಾವ್ ಹೇಳಿದರು.
ಕೇಂದ್ರ ಜಿಎಸ್‌ಟಿ ಪಾಲನ್ನು ನೀಡದೇ ಹೋದರೆ ರಾಜಕ್ಕೆ ದೊಡ್ಡ ಹೊಡೆತ ಬೀಳಲಿದೆ. ಈಗಾಗಲೇ ಪಂಜಾಬ್ ಸರ್ಕಾರ ಕೇಂದ್ರದ ವಿರುದ್ಧ ಕಾನೂನು ಹೋರಾಟಕ್ಕೆ ಮುಂದಾಗಿದೆ. ಜಿಎಸ್‌ಟಿ ಪಾಲನ್ನು ಕೇಂದ್ರ ನೀಡದಿರುವ ಬಗ್ಗೆ ರಾಜ್ಯ ಸರ್ಕಾರದ ನಿಲುವು ಏನು ಎನ್ನುವುದು ಸ್ಪಷ್ಟಪಡಿಸಬೇಕು. ರಾಜ್ಯದ ಪಾಲು ನೀಡದೇ ಹೋದರೆ ಕಾಂಗ್ರೆಸ್ ಪ್ರತಿಭಟನೆ ನಡೆಸುವಲಿದೆ ಎಂದರು.
ಪಶ್ಚಿಮ ಬಂಗಾಳ, ಕೇರಳ, ಪಂಜಾಬ್, ರಾಜಸ್ಥಾನ, ದೆಹಲಿ ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ನಡೆಸಲು ಧ್ವನಿ ಎತ್ತಿದ್ದಾರೆ. ಅದರಂತೆ ನಮ್ಮ ಸರ್ಕಾರವೂ ಕೇಂದ್ರದ ಧೋರಣೆಯನ್ನು ಪ್ರಶ್ನಿಸಬೇಕು. ಇಲ್ಲದಿದ್ದರೆ ರಾಜ್ಯದ ಅಭಿವೃದ್ಧಿಗೆ ಹೊಡೆತ ಬೀಳಲಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.