ಗ್ರಾಮ ಪಂಚಾಯತ್ ಸದಸ್ಯರ ಮಾಸಿಕ ಗೌರವ ಧನ ಹೆಚ್ಚಳ ಬಗ್ಗೆ ಸಿಎಂ ಬಳಿ ಚರ್ಚೆ: ಸಚಿವ ಪ್ರಿಯಾಂಕ್ ಖರ್ಗೆ

Discussion with CM about increase in monthly honorarium of Gram Panchayat members: Minister Priyank

ಗ್ರಾಮ ಪಂಚಾಯತ್ ಸದಸ್ಯರ ಮಾಸಿಕ ಗೌರವ ಧನ  ಹೆಚ್ಚಳ ಬಗ್ಗೆ ಸಿಎಂ ಬಳಿ ಚರ್ಚೆ: ಸಚಿವ ಪ್ರಿಯಾಂಕ್ ಖರ್ಗೆ 

ಸುವರ್ಣಸೌಧ 13: ರಾಜ್ಯದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳಿಗೆ ಮಾಸಿಕ ಗೌರವ ಧನವನ್ನು ಹೆಚ್ಚಳ ಮಾಡುವ ಕುರಿತ ಬೇಡಿಕೆಯನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. 

ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಡಾ. ಧನಂಜಯ ಸರ್ಜಿ ಹಾಗೂ ಡಿ.ಎಸ್ ಅರುಣ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. 

ರಾಜ್ಯದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರುಗಳಿಗೆ ಕೇರಳ ರಾಜ್ಯದಲ್ಲಿರುವಂತೆ ಮಾಸಿಕ ಗೌರವ ಧನವನ್ನು ಹೆಚ್ಚಳ ಮಾಡಲು ಸಾಧ್ಯವಿಲ್ಲ. ಆದರೆ ಹೆಚ್ಚಳ ಮಾಡುವ ಕುರಿತ ಮನವಿಯನ್ನು ಮುಖ್ಯಮಂತ್ರಿ ಅವರ ಗಮನಕ್ಕೆ ತರಲಾಗುವುದು ಎಂದರು. 

ಗ್ರಾಮ ಪಂಚಾಯತ್ ಸದಸ್ಯರಿಗೆ ಪಿಂಚಣಿ, ಉಚಿತ ಬಸ್ ಪಾಸ್ ಮತ್ತು ಆರೋಗ್ಯ ವಿಮೆ ನೀಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇರುವುದಿಲ್ಲ ಎಂದು ತಿಳಿಸಿದರು. 

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಎಲ್ಲಾ ವೃಂದ ಸಂಘಗಳು ಹಾಗೂ ಗ್ರಾಮ ಪಂಚಾಯತಿ ಸದಸ್ಯರ ಒಕ್ಕೂಟಗಳು ಸಲ್ಲಿಸಿರುವ ಬೇಡಿಕೆಗಳ ಕುರಿತು ಪರೀಶೀಲಿಸಲಾಗಿರುತ್ತದೆ.  

ಅಧಿಕಾರಿ/ ಕೆಲವು ಸಿಬ್ಬಂದಿಗಳ ಸೇವಾ ವಿಷಯ/ ಬೇಡಿಕೆಗಳನ್ನು ಪರೀಶೀಲಿಸಲು ಆಯುಕ್ತರು, ಪಂಚಾಯತ್ ರಾಜ್ ಆಯುಕ್ತಾಲಯ ರವರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಲಾಗಿದ್ದು, ಸದರಿ ಸಮಿತಿಗೆ ಪರೀಶೀಲಿಸಿ ವರದಿಯನ್ನು ಸಲ್ಲಿಸಲು 3 ತಿಂಗಳ ಕಾಲಾವಕಾಶ ನೀಡಲಾಗಿದೆ. ಸಮಿತಿ ವರದಿ ಸಲ್ಲಿಸಿದ ನಂತರ ಬೇಡಿಕೆಗಳ ಕುರಿತು ಪರೀಶೀಲಿಸಿ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು. 

******* 

ಗ್ರಾಮ ಪಂಚಾಯತ್ ಆಸ್ತಿಗಳ ಸಮೀಕ್ಷೆ: ಸಚಿವ ಪ್ರಿಯಾಂಕ್ ಖರ್ಗೆ 

ಸುವರ್ಣಸೌಧ 13: ರಾಜ್ಯದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೃಷಿ ತೆರಿಗೆ ನಿರ್ಧರಣೆಗೆ ಒಳಪಟ್ಟಿರದ ಎಲ್ಲಾ ಭೂಮಿ ಮತ್ತು ಕಟ್ಟಡಗಳ ಮ್ಯಾನ್ಯುಯಲ್ ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. 

ಅವರು ಇಂದು ವಿಧಾನ ಪರಿಷತ್ತಿನಲ್ಲಿ ಸದಸ್ಯ ಎನ್‌. ರವಿಕುಮಾರ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. 

ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕೃಷಿ ತೆರಿಗೆ ನಿರ್ಧರಣೆಗೆ ಒಳಪಟ್ಟಿರದ ಎಲ್ಲಾ ಭೂಮಿ ಮತ್ತು ಕಟ್ಟಡಗಳ ಮ್ಯಾನ್ಯೂಯಲ್ ಸಮೀಕ್ಷೆ ನಡೆಸಿ ತೆರಿಗೆ ವ್ಯಾಪ್ತಿಗೆ ಒಳಪಡಿಸಿ ವಂಚತಂತ್ರ 2.0 ತಂತ್ರಾಂಶದಲ್ಲಿ ಅಳವಡಿಸುವ ಬಗ್ಗೆ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ. ಇಲ್ಲಿಯವರೆಗೆ ಮ್ಯಾನ್ಯೂಯಲ್ ಸಮೀಕ್ಷೆ ಮೂಲಕ 1,41,42,124 ಆಸ್ತಿ ಗಳನ್ನು ಸಮೀಕ್ಷೆ ಮಾಡಿ ಈ ಎಲ್ಲಾ ಆಸ್ತಿಗಳ ವಿವರಗಳನ್ನು ನಮೂನೆ-9ಎ ರಿಜಿಸ್ಟರ್ ನಲ್ಲಿ ನಮೂದಿಸಲಾಗಿದೆ ಎಂದರು. 

ಗ್ರಾಮ ಪಂಚಾಯತ್ ಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ತೆರಿಗೆ ಸಂಗ್ರಹ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.