ವಚನ ಸಾಹಿತ್ಯ ಸಂರಕ್ಷಣೆಗೆ ಡಾ. ಫ.ಗು. ಹಳಕಟ್ಟಿ ಅವರ ಕೊಡುಗೆ ಅಪಾರ: ಡಾ. ಓದ್ರಾಮ

ವಚನ ಸಾಹಿತ್ಯ ಸಂರಕ್ಷಣೆಗೆ ಡಾ. ಫ.ಗು. ಹಳಕಟ್ಟಿ ಅವರ ಕೊಡುಗೆ ಅಪಾರ: ಡಾ. ಓದ್ರಾಮ Dr. F.G. Halakatti's contribution to the preservation of Vachana literature is immense: Dr. Odrama

ಲೋಕದರ್ಶನ ವರದಿ 

ವಿಜಯಪುರ   02: 12ನೇ ಶತಮಾನದ ಶರಣರ ವಚನ ಸಾಹಿತ್ಯವನ್ನು ಸಂಗ್ರಹಿಸಿ, ಸಂರಕ್ಷಿಸಿ ಮನುಕುಲಕ್ಕೆ ತಲುಪಿಸಿದ ಮಹಾನ್ ದಾರ್ಶನಿಕ ಡಾ. ಫ.ಗು. ಹಳಕಟ್ಟಿ ಅವರ ಸೇವೆ ಕನ್ನಡ ಸಾಹಿತ್ಯ ಲೋಕಕ್ಕೆ ಅನನ್ಯ ಕೊಡುಗೆಯಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಡಾ. ಓದ್ರಾಮ ಹೇಳಿದರು. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಗುರುವಾರ ಡಾ. ಫ.ಗು. ಹಳಕಟ್ಟಿ ಅವರ ಜನ್ಮದಿನದ ಅಂಗವಾಗಿ ಹಮ್ಮಿಕೊಂಡಿದ್ದ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಚನಗಳು ಕೇವಲ ಸಾಹಿತ್ಯವಲ್ಲ, ಬದುಕಿನ ಮೌಲ್ಯಗಳನ್ನು ಬೋಧಿಸುವ ಅಮೂಲ್ಯ ಸಂದೇಶಗಳಾಗಿವೆ.

ಅವು ವಿವಿಧ ಭಾಷೆಗಳಿಗೆ ಭಾಷಾಂತರಗೊಂಡು ಜಗತ್ತಿನಾದ್ಯಂತ ಪಸರಿಸಬೇಕು. ವಚನ ಸಾಹಿತ್ಯವನ್ನು ಸಂಗ್ರಹಿಸಿ ಮುಂದಿನ ಪೀಳಿಗೆಗೆ ಉಳಿಸಿಕೊಟ್ಟ ಡಾ. ಫ.ಗು. ಹಳಕಟ್ಟಿ ಅವರ ಸಾಧನೆ ಯುವಜನರಿಗೆ ಪ್ರೇರಣೆಯಾಗಬೇಕು. ವಿದ್ಯಾರ್ಥಿಗಳು ಇಂತಹ ಮಹನೀಯರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು. ಉಪನ್ಯಾಸ ನೀಡಿದ: ಡಾ. ವಿ.ಡಿ.ಐಹೊಳ್ಳಿ ಅವರು ಡಾ. ಫ.ಗು. ಹಳಕಟ್ಟಿ ಅವರ ಜೀವನ, ಸಾಹಿತ್ಯ ಸೇವೆ ಹಾಗೂ ವಚನ ಸಾಹಿತ್ಯ ಸಂರಕ್ಷಣೆಗೆ ಅವರು ನೀಡಿದ ಅಮೂಲ್ಯ ಕೊಡುಗೆ ಹಾಗೂ ಶರಣರ ವಚನಗಳನ್ನು ಸಂಗ್ರಹಿಸಿ, ಸಂರಕ್ಷಿಸಿ ಮುಂದಿನ ಪೀಳಿಗೆಗೆ ತಲುಪಿಸಿದ ಡಾ. ಫ.ಗು. ಹಳಕಟ್ಟಿ ಅವರ ಸೇವೆ ಕನ್ನಡ ಸಾಹಿತ್ಯದ ಇತಿಹಾಸದಲ್ಲಿ ಅಜರಾಮರವಾಗಿದೆ ಎಂದು ಅವರು ಹೇಳಿದರು.