ರಕ್ತಹೀನತೆ ತಡೆಗೆ ಪೌಷ್ಟಿಕ ಆಹಾರ ಸೇವನೆ ಅಗತ್ಯ: ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ

Eating nutritious food is necessary to prevent anemia: GPM CEO Rahul Sharanappa Sankanur

ರಕ್ತಹೀನತೆ ತಡೆಗೆ ಪೌಷ್ಟಿಕ ಆಹಾರ ಸೇವನೆ ಅಗತ್ಯ: ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ 

ಬಳ್ಳಾರಿ 12: ರಕ್ತಹೀನತೆಗೆ ಪ್ರಮುಖ ಕಾರಣ ದೇಹದಲ್ಲಿನ ಕಬ್ಬಿಣಾಂಶ ಕೊರತೆ. ದೇಹಕ್ಕೆ ಅತ್ಯಗತ್ಯವಾದ ಕಬ್ಬಿಣಾಂಶ ನಾವು ದಿನನಿತ್ಯ ಸೇವಿಸುವ ಆಹಾರದಿಂದ ದೊರೆಯುತ್ತಿದ್ದು, ತಪ್ಪದೇ ಎಲ್ಲರೂ ಪೌಷ್ಟಿಕ ಆಹಾರ ಸೇವನೆ ಮಾಡಬೇಕು ಎಂದು ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ಹೇಳಿದರು. 

ಜಿಲ್ಲಾಡಳಿತ, ಭಾರತೀಯ ಮಕ್ಕಳ ತಜ್ಞ ವೈದ್ಯರ ಸಂಘ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಮಕ್ಕಳಲ್ಲಿನ ಅಪೌಷ್ಠಿಕತೆಯನ್ನು ಗುರುತಿಸಲು 5ನೇ ತರಗತಿಯಿಂದ 10ನೇ ತರಗತಿ ಒಳಗಿನ ಮಕ್ಕಳ ಆರೋಗ್ಯದ ತಪಾಸಣೆ ಮತ್ತು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಪಿಂಕ್ ವ್ಯಾನ್ ಜಾಥಾ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. 

ಮಕ್ಕಳಲ್ಲಿ ರಕ್ತಹೀನತೆ ಕಡಿಮೆ ಕಂಡುಬರುವುದರಿಂದ ಮಕ್ಕಳ ಬೆಳವಣಿಗೆ ಮತ್ತು ಅವರ ಭೌತಿಕ, ಶೈಕ್ಷಣಿಕ ಮತ್ತು ದೈಹಿಕ ಶಕ್ತಿ ಕಡಿಮೆಗೊಳ್ಳುತ್ತದೆ. ಹಾಗಾಗಿ ಮಕ್ಕಳು ಪೌಷ್ಟಿಕ ಆಹಾರ ಸೇವನೆಗೆ ಆದ್ಯತೆ ನೀಡಬೇಕು. ಅನೀಮಿಯ ಮುಕ್ತ ಬಳ್ಳಾರಿಯನ್ನಾಗಿಸಲು ಕೈಜೋಡಿಸಬೇಕು ಎಂದರು. 

ಕರ್ನಾಟಕ ವೈದ್ಯಕೀಯ ಪರಿಷತ್ತಿನ ಅಧ್ಯಕ್ಷ ಡಾ.ಯೋಗಾನಂದ ರೆಡ್ಡಿ ಅವರು ಮಾತನಾಡಿ, ಅನೀಮಿಯ ಮುಕ್ತ ಭಾರತವನ್ನಾಗಿಸಲು ಹದಿಹರೆಯದವರಲ್ಲಿ ಆರೋಗ್ಯ ತಪಾಸಣೆ ಕೈಗೊಂಡು ಸೂಕ್ತ ಆರೋಗ್ಯ ಪರಿಕ್ರಮ ಒದಗಿಸುವುದು ಪಿಂಕ್ ವ್ಯಾನ್‌ನ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು. 

ಜಿಲ್ಲೆಯ ಗ್ರಾಮೀಣ ಭಾಗದ ಮಕ್ಕಳಲ್ಲಿ ಶೇ.50 ರಿಂದ 60ರಷ್ಟು ಹೀಮೋಗ್ಲೋಬಿನ್ ನ ಪ್ರಮಾಣವು 7 ರಿಂದ 8 ಮಿ.ಗ್ರಾಂ ಇರುವುದು ಕಂಡುಬರುತ್ತಿದ್ದು, ಇದು ಅಪಾಯಕಾರಿ ಸಂಗತಿಯಾಗಿದೆ. ಇದರಿಂದ ಮಕ್ಕಳ ಶಿಕ್ಷಣದ ಭೌತಿಕ ಮಟ್ಟ ಮತ್ತು ದೇಹದ ಶಕ್ತಿ ಕುಗ್ಗುವಿಕೆ ಕಾರಣವಾಗಲಿದೆ. ಹಾಗಾಗಿ ಮಕ್ಕಳಲ್ಲಿ ಹೀಮೋಗ್ಲೋಬಿನ್ ಪ್ರಮಾಣವು 11 ರಿಂದ 12 ಮಿ.ಗ್ರಾಂ ಹೆಚ್ಚಿರಬೇಕು. ಇದರಿಂದ ಮಕ್ಕಳ ಆರೋಗ್ಯವು ವೃದ್ಧಿಯಾಗಲಿದೆ ಎಂದು ವಿವರಿಸಿದರು. 

ಬಳಿಕ ಜಾಥಾವು ಜಿಲ್ಲಾಧಿಕಾರಿಗಳ ಕಚೇರಿ ಆವರಣದಿಂದ ಗಡಿಗಿ ಚೆನ್ನಪ್ಪ ವೃತ್ತದ ಮಾರ್ಗವಾಗಿ ಬಿಡಿಎಎ ಪುಟ್ಬಾಲ್ ಮೈದಾನದ ವೇದಿಕೆ ಸಭಾಂಗಣಕ್ಕೆ ತಲುಪಿತು. 

ವೇದಿಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು, ರಕ್ತಹೀನತೆಯು ಮಕ್ಕಳು, ಹದಿಹರೆಯದವರು ಮತ್ತು ಮಹಿಳೆಯರಲ್ಲಿ ಹೆಚ್ಚಾಗಿ ಕಂಡುಬರುತ್ತದೆ. ಗರ್ಭಿಣಿಯರು ಹಾಗೂ ಬಾಣಂತಿಯರಲ್ಲಿಯೂ ರಕ್ತಹೀನತೆ ಸಾಮಾನ್ಯವಾಗಿ ಕಂಡುಬರುತ್ತದೆ. ಪೌಷ್ಠಿಕ ಆಹಾರದ ಕೊರತೆಯಿಂದ ಹೆಣ್ಣು ಮಕ್ಕಳಲ್ಲಿ ಹೆಚ್ಚಾಗಿ ರಕ್ತಹೀನತೆ ಕಂಡುಬರುತ್ತದೆ ಎಂದರು. 

ರಕ್ತಹೀನತೆಯ ತೀವ್ರತೆಯನ್ನು ಅವಲಂಬಿಸಿ ರೋಗಿಗೆ ಚಿಕಿತ್ಸೆ ನೀಡಲಾಗುತ್ತದೆ. ಕಬ್ಬಿಣಾಂಶದ ಮಾತ್ರೆ ಅಥವಾ ಚುಚ್ಚುಮದ್ದಿನ ರೂಪದಲ್ಲಿ ಅತ್ಯಗತ್ಯ ಓಷಧಗಳನ್ನು ಜಿಲ್ಲಾ ಆಸ್ಪತ್ರೆಯಲ್ಲಿ ಪಡೆದುಕೊಳ್ಳಬೇಕು ಎಂದರು. 

ಅನೀಮಿಯ ಕುರಿತು ಗ್ರಾಮೀಣ ಭಾಗಗಳಲ್ಲಿ ಹೆಚ್ಚು ಹೆಚ್ಚು ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು. 

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಮಾತನಾಡಿ, ಕಬ್ಬಿಣಾಂಶ ಹೆಚ್ಚಾಗಿರುವ ಆಹಾರ ಪದಾರ್ಥಗಳನ್ನು ಹೆಚ್ಚಾಗಿ ಸೇವಿಸುವುದರಿಂದ ರಕ್ತಹೀನತೆ ತಡೆಯಬಹುದು. ತರಕಾರಿ, ಸೊಪ್ಪು, ರಾಗಿ, ಮೊಳಕೆ ಕಟ್ಟಿದ ಕಾಳುಗಳು ಸೇರಿದಂತೆ ಮುಂತಾದವುಗಳ ಸೇವನೆಯಿಂದ ದೇಹಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಕಬ್ಬಿಣಾಂಶ ದೊರೆಯುತ್ತದೆ ಎಂದು ತಿಳಿಸಿದರು. 

ಕಾರ್ಯಕ್ರಮದಲ್ಲಿ ಶಾಲಾ ಮಕ್ಕಳಿಗೆ ಆರೋಗ್ಯ ತಪಾಸಣೆ ಕೈಗೊಳ್ಳಲಾಯಿತು. 

ಈ ಸಂದರ್ಭದಲ್ಲಿ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಬಸರೆಡ್ಡಿ, ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ.ಹನುಮಂತಪ್ಪ, ಬಿಮ್ಸ್‌ನ ಪ್ರಭಾರಿ ನಿರ್ದೇಶಕ ಡಾ.ಕೃಷ್ಣ, ಐಎಪಿ ನಿಕಟ ಪೂರ್ವ ಅಧ್ಯಕ್ಷ ಡಾ.ಬಸವರಾಜ್‌.ಜಿ.ವಿ., ಬಿಮ್ಸ್‌ನ ಮಕ್ಕಳ ವಿಭಾಗದ ಮುಖ್ಯಸ್ಥ ಡಾ.ವಿಶ್ವನಾಥ, ಡಾ.ರವಿಶಂಕರ್, ಮಕ್ಕಳ ತಜ್ಞ ಡಾ.ದುರುಗಪ್ಪ, ಡಿಡಿಪಿಐ ವಿಷಯಾಧಿಕಾರಿ ಕೊಟ್ರೇಶ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ ಸೇರಿದಂತೆ ಶಾಲಾ ಶಿಕ್ಷಕರು, ಶಾಲಾ ಮಕ್ಕಳು ಹಾಗೂ ಇತರರು ಭಾಗವಹಿಸಿದ್ದರು.