ಸಾರ್ವಜನಿಕ ಕ್ಷೇತ್ರದಲ್ಲಿ ಪರಿಣಾಮಕಾರಿ ಸಂವಹನ ಅಗತ್ಯ: ಡಾ. ದೀಲೀಪ್ ಶಶಿ

ಸಾರ್ವಜನಿಕ ಕ್ಷೇತ್ರದಲ್ಲಿ ಪರಿಣಾಮಕಾರಿ ಸಂವಹನ ಅಗತ್ಯ: ಡಾ. ದೀಲೀಪ್ ಶಶಿ  Effective communication is essential in the public sector: Dr. Dileep Shashi

ಲೋಕದರ್ಶನ ವರದಿ 

ಕಾರವಾರ 01: ಸಾರ್ವಜನಿಕ ಕ್ಷೇತ್ರದಲ್ಲಿ ಕರ್ತವ್ಯ ನಿರ್ವಹಿಸುವವರಿಗೆ ಉತ್ತಮ ಸಂವಹನ ಕೌಶಲ್ಯ ಅತ್ಯಗತ್ಯವಾಗಿದೆ. ಜನರು ಪ್ರತಿನಿತ್ಯ ಎದುರಿಸುವ ಹಲವು ಸಮಸ್ಯೆಗಳನ್ನು ಜಾಣ್ಮೆಯ ಸಂವಹನದ ಮೂಲಕ ಮಾತ್ರ ಪರಿಹರಿಸಲು ಸಾಧ್ಯ. ಮಾತುಕತೆ ನಡೆಸದೆ ಉಳಿದರೆ ಅದೇ ದೊಡ್ಡ ಸಮಸ್ಯೆಯಾಗಿ ಪರಿಣಮಿಸಬಹುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದೀಲೀಪ್ ಶಶಿ ಹೇಳಿದರು.

ಅವರು ಶನಿವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಅಂಗವಾಗಿ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಾಗಿ ಆಯೋಜಿಸಿದ್ದ ಭಾಷಣ ಸ್ಪರ್ಧೆಯನ್ನು ಉದ್ಘಾಟಿಸಿ ಮಾತನಾಡಿದರು. ಸರ್ಕಾರದ ಎಲ್ಲ ಯೋಜನೆಗಳ ಕುರಿತು ಜನರಿಗೆ ಮಾಹಿತಿ ನೀಡಿ, ಜಾಗೃತಿ ಮೂಡಿಸಲು ಪರಿಣಾಮಕಾರಿ ಸಂವಹನ ಅತ್ಯಗತ್ಯ. ಈ ನಿಟ್ಟಿನಲ್ಲಿ ಎಸ್ವೀಪ್ ಸಮಿತಿಯ ವತಿಯಿಂದ ಜಿಲ್ಲೆಯಾದ್ಯಂತ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸಾಕಷ್ಟು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಜಿಲ್ಲೆಯ ಎಲ್ಲ ಮತದಾರರನ್ನು ತಲುಪುವ ಪ್ರಯತ್ನ ಮಾಡಲಾಗುತ್ತಿದೆ ಎಂದರು.

ಈಗಾಗಲೇ ಜಿಲ್ಲೆಯ ಮತದಾರರ ನೋಂದಣಿ ಹಾಗೂ ಜಾಗೃತಿ ಕಾರ್ಯಗಳಲ್ಲಿ ಉತ್ತಮ ಪ್ರಗತಿ ಸಾಧಿಸಲಾಗಿದ್ದು, ಶೇ.91ರಷ್ಟು ಸಾಧನೆ ಸಾಧ್ಯವಾಗಲು ಎಸ್ವೀಪ್ ಸಮಿತಿಯ ಪರಿಣಾಮಕಾರಿ ಸಂವಹನ ಕಾರ್ಯವೇ ಪ್ರಮುಖ ಕಾರಣವಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಸೋಮಶೇಖರ್ ಮೆಸ್ತಾ ಸೇರಿದಂತೆ ವಿವಿಧ ಅಧಿಕಾರಿಗಳು ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.