ರಾಷ್ಟ್ರೀಯ ಮತದಾರರ ದಿನಾಚರಣೆಯಲ್ಲಿ ಎಲ್ಲರೂ ಭಾಗವಹಿಸಿ - ವರ್ಣಿತ್ ನೇಗಿ

ರಾಷ್ಟ್ರೀಯ ಮತದಾರರ ದಿನಾಚರಣೆಯಲ್ಲಿ ಎಲ್ಲರೂ ಭಾಗವಹಿಸಿ - ವರ್ಣಿತ್ ನೇಗಿ Everyone should participate in National Voters' Day - Varnit Negi


ಕೊಪ್ಪಳ   23  :  16ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಎಲ್ಲಾ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು, ಶಿಕ್ಷಕರು, ಕಾಲೇಜುಗಳ ವಿದ್ಯಾರ್ಥಿಗಳು ಸೇರಿದಂತೆ ಎಲ್ಲರೂ ಭಾಗವಹಿಸಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ವರ್ಣಿತ್ ನೇಗಿ ಹೇಳಿದರು.   

ಅವರು ಶುಕ್ರವಾರ ಕೊಪ್ಪಳ ಜಿಲ್ಲಾ ಪಂಚಾಯತ್ ಸಮಿತಿ ಕೊಠಡಿ ಸಭಾಂಗಣದಲ್ಲಿ 16ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕುರಿತು ಕರೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.ಈ ವರ್ಷ ‘ನನ್ನ ಭಾರತ, ನನ್ನ ಮತ' ಎಂಬ ವಿಶೇಷ ಧ್ಯೇಯವಾಕ್ಯದೊಂದಿಗೆ 16ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಜನವರಿ 25 ರಂದು ಆಚರಿಸುವ ಸಂಬಂದ ಭಾರತ ಚುನಾವಣಾ ಆಯೋಗ ನಿರ್ದೆಶನ ನೀಡಿದ್ದು, ಅಂದು ಬೆಳಿಗ್ಗೆ 10 ಗಂಟೆಗೆ ಕೊಪ್ಪಳ ನಗರದ ಸಾಹಿತ್ಯ ಭವನದಲ್ಲಿ 16ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಅಚ್ಚುಕಟ್ಟಾಗಿ ಆಯೋಜನೆ ಮಾಡಬೇಕು ಎಂದು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ಸೂಚನೆ ನೀಡಿದರು.  

ಕಾರ್ಯಕ್ರಮದಲ್ಲಿ ಮತದಾರರ ಜಾಗೃತಿ ಕುರಿತ ಪ್ರತಿಜ್ಞಾ ವಿಧಿಯನ್ನು ಭೋದನೆ ಮಾಡಲಾಗುವುದು. ಮತದಾರರ ಜಾಗೃತಿ ಕಾರ್ಯದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಬಿಎಲ್‌ಓ ಹಾಗೂ ಸುಪರವೈಜರ್ ಮತ್ತು ಇ.ಎಲ್‌.ಸಿ ಸಂಯೋಜಕರು, ಮಕ್ಕಳ ಸಂಸತ್ ಸ್ಪರ್ಧೆಯಲ್ಲಿ ರಾಜ್ಯ ಮಟ್ಟದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಮತ್ತು ಇತರೆ ಸಾಧಕರಿಗೆ ಈ ಕಾರ್ಯಕ್ರಮದಲ್ಲಿ ಸನ್ಮಾನಿಸಲು ಅಗತ್ಯ ಕ್ರಮವಹಿಸಿ. ಯುವ ಮತದಾರರು ಈ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತಾಗಬೇಕು. ಹೊಸದಾಗಿ ನೋಂದಣಿಯಾದ ಯುವ ಮತದಾರರಿಗೆ ಕಾರ್ಯಕ್ರಮದಲ್ಲಿ ಮತದಾರರ ಗುರುತಿನ ಚೀಟಿಗಳನ್ನು ವಿತರಿಸಬೇಕು ಎಂದು ಹೇಳಿದರು. 

ಸಭೆಯಲ್ಲಿ ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಟಿ.ಕೃಷ್ಣಮೂರ್ತಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೆಶಕ ಜಗದೀಶ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೆಶಕ ಸೋಮಶೇಖರಗೌಡ ಪಾಟೀಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಪರಶುರಾಮ್ ಶೆಟ್ಟಪ್ಪನವರ್, ಕೊಪ್ಪಳ ತಾ.ಪಂ ಇಓ ದುಂಡಪ್ಪ ತುರಾದಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಜಿಲ್ಲಾ ಸ್ವೀಪ್ ಸಮಿತಿಯ ಇತರೆ ಅಧಿಕಾರಿಗಳು, ಸಿಬ್ಬಂದಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.