ಬಾಲ್ಯವಿವಾಹ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಗೆ ಎಲ್ಲರೂ ಶ್ರಮಿಸಿ - ಶೇಖರಗೌಡ ರಾಮತ್ನಾಳ

ಬಾಲ್ಯವಿವಾಹ, ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಗೆ ಎಲ್ಲರೂ ಶ್ರಮಿಸಿ - ಶೇಖರಗೌಡ ರಾಮತ್ನಾಳ Everyone should work to prevent child marriage and sexual abuse of children - Shekhar Gowda Ramatna


ಕೊಪ್ಪಳ  11:  ಗ್ರಾಮ ಮಟ್ಟದಲ್ಲಿ ಮಕ್ಕಳ ರಕ್ಷಣಾ ಸಮಿತಿಗಳ ಮೂಲಕ ಜಾಗೃತಿ ಮೂಡಿಸಿ ಬಾಲ್ಯವಿವಾಹ ಹಾಗೂ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಗಳನ್ನು ತಡೆಯಲು ಎಲ್ಲರೂ ಶ್ರಮಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ಜಿ. ರಾಮತ್ನಾಳ ಹೇಳಿದರು.  ಅವರು ಮಂಗಳವಾರ ಯಲಬುರ್ಗಾದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಕೊಪ್ಪಳ ಹಾಗೂ ತಾಲೂಕು ಆಡಳಿತ, ತಾಲೂಕು ಪಂಚಾಯತ್ ಮತ್ತು ಪಟ್ಟಣ ಪಂಚಾಯತ್, ಯಲಬುರ್ಗಾ ಇವರ ಸಂಯುಕ್ತ ಆಶ್ರಯದಲ್ಲಿ ಮಕ್ಕಳ ಹಕ್ಕುಗಳು, ಮಕ್ಕಳ ಸುರಕ್ಷತೆ ಮತ್ತು ಸಂಬಂಧಿತ ಕಾನೂನುಗಳ ಕುರಿತು ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ಹಮ್ಮಿಕೊಳ್ಳಲಾಗಿದ್ದ ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. 

ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳನ್ನು ತಡೆಗಟ್ಟಲು ಸರ್ಕಾರ ಹಲವು ಕಾನೂನುಗಳನ್ನು ಜಾರಿಗೆ ತಂದಿದ್ದು, ಅದರಲ್ಲಿ ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆ (ಪೋಕ್ಸೊ)-2012 ಪ್ರಮುಖವಾಗಿದೆ. ಈ ಕಾಯ್ದೆಯ ಪ್ರಕಾರ 18 ವರ್ಷದೊಳಗಿನ ಮಕ್ಕಳ ಮೇಲಿನ ಗಂಭೀರ ಲೈಂಗಿಕ ಹಲ್ಲೆಗೆ ಕನಿಷ್ಠ 20 ವರ್ಷಗಳಿಂದ ಜೀವಾವಧಿ ಶಿಕ್ಷೆಯವರೆಗೆ ಹಾಗೂ ದಂಡ ವಿಧಿಸುವ ವ್ಯವಸ್ಥೆ ಇದೆ. ಲೈಂಗಿಕ ಕಿರುಕುಳವೆಂದರೆ ಮಕ್ಕಳಿಗೆ ಶಾರೀರಿಕ, ಮಾನಸಿಕ ಅಥವಾ ಭಾಷಿಕವಾಗಿ ಅವರ ಗೌರವಕ್ಕೆ ಧಕ್ಕೆ ಉಂಟುಮಾಡುವ ಯಾವುದೇ ಕೃತ್ಯವಾಗಿದ್ದು, ಅಂತಹ ಪ್ರಕರಣಗಳಿಗೆ 7 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸಬಹುದಾಗಿದೆ ಎಂದರು.

ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಜಾಲತಾಣ, ಇತರೆ ಮಾಧ್ಯಮಗಳ ಪ್ರಭಾವದಿಂದ ಪ್ರೀತಿ-ಪ್ರೇಮದ ಹೆಸರಿನಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳು ಕಾನೂನು ಸಮಸ್ಯೆಗಳಲ್ಲಿ ಸಿಲುಕುತ್ತಿರುವ ಪ್ರಕರಣಗಳು ಹೆಚ್ಚುತ್ತಿವೆ. ಅಪ್ರಾಪ್ತ ವಯಸ್ಸಿನ ಮಕ್ಕಳಿಗೆ ಮದುವೆ ಮಾಡಿದವರು, ಅದರಲ್ಲಿ ಭಾಗಿಯಾದವರು ಹಾಗೂ ಪ್ರೋತ್ಸಾಹಿಸಿದವರು ಬಾಲ್ಯವಿವಾಹ ನಿಷೇಧ ಕಾಯ್ದೆ ಅಡಿಯಲ್ಲಿ ಶಿಕ್ಷೆಗೆ ಒಳಗಾಗುತ್ತಾರೆ ಎಂದು ಹೇಳಿದರು. ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ-5ರ ಪ್ರಕಾರ ಜಿಲ್ಲೆಯಲ್ಲಿ ಅಪ್ರಾಪ್ತ ವಯಸ್ಸಿನ ಮದುವೆಗಳ ಪ್ರಮಾಣ ಸುಮಾರು 27 ಶೇಕಡಾ ಇದೆ. ಹಿಂದಿನ ಸಮೀಕ್ಷೆಯಲ್ಲಿ ಇದು 35.9 ಶೇಕಡಾ ಇದ್ದು, ಇಳಿಕೆಯಾಗಿದ್ದರೂ ಜಿಲ್ಲೆಯಲ್ಲಿ ಇನ್ನೂ ಬಾಲ್ಯವಿವಾಹಗಳು ನಡೆಯುತ್ತಿರುವುದು ಆತಂಕಕಾರಿ ಎಂದು ಹೇಳಿದರು.  

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸಿಂಧು ಅಂಗಡಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಕೆಲವು ಪ್ರಕರಣಗಳಲ್ಲಿ ಮಕ್ಕಳನ್ನು ಜನಿಸಿದ ನಂತರ ತೊರೆದು ಹೋಗುವ ಘಟನೆಗಳು ವರದಿಯಾಗಿರುವುದನ್ನು ನೋಡಬಹುದು. ಮಗು ಬೇಡವಾದಲ್ಲಿ ಅದನ್ನು ಎಲ್ಲೆಂದರಲ್ಲಿ ಬಿಟ್ಟು ಹೋಗದೆ ಮಕ್ಕಳ ಸಹಾಯವಾಣಿ 1098 ಗೆ ಮಾಹಿತಿ ನೀಡಬಹುದು ಅಥವಾ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಯ ವಶಕ್ಕೆ ಒಪ್ಪಿಸಬಹುದು. ಮಕ್ಕಳ ನ್ಯಾಯ (ಪೋಷಣೆ ಮತ್ತು ರಕ್ಷಣೆ) ಕಾಯ್ದೆ-2015ರ ಪ್ರಕಾರ ಅಂತಹ ಮಕ್ಕಳಿಗೆ ಈ ಸಮಿತಿಯು ಸೂಕ್ತ ಪುನರ್ವಸತಿ ಕ್ರಮಗಳನ್ನು ಕೈಗೊಳ್ಳುತ್ತದೆ. ಅಕ್ರಮ ದತ್ತು ಪಡೆಯುವುದು ಸಹ ಶಿಕ್ಷಾರ್ಹ ಅಪರಾಧವಾಗಿದ್ದು,

ನಿಯಮಬಾಹಿರವಾಗಿ ದತ್ತು ಪಡೆದವರಿಗೂ ಮತ್ತು ನೀಡಿದವರಿಗೂ ಶಿಕ್ಷೆ ವಿಧಿಸಲಾಗುತ್ತದೆ. ಆದ್ದರಿಂದ ಕಾನೂನುಬದ್ಧ ದತ್ತು ಪ್ರಕ್ರಿಯೆಗಳ ಕುರಿತು ಸಮುದಾಯಗಳಲ್ಲಿ ಜಾಗೃತಿ ಮೂಡಿಸಲು ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಮುಂದಾಗಬೇಕು ಎಂದು ತಿಳಿಸಿದರು.ಈ ಸಂದರ್ಭದಲ್ಲಿ ಉಪತಹಶೀಲ್ದಾರ ಮುರಳೀಧರ, ತಾಲೂಕು ಪಂಚಾಯತ್ ಪ್ರತಿನಿಧಿ ಮಾಬುಸಾಬ್ ಬಬಲಾದಿ, ತಾಲೂಕು ವೈದ್ಯಾಧಿಕಾರಿ ಡಾ.ನೇತ್ರಾವತಿ ಹಿರೇಮಠ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಬೆಟ್ಟದೇಶ ಮಾಳೇಕೊಪ್ಪ, ಪಟ್ಟಣ ಪಂಚಾಯತ್ ಪ್ರತಿನಿಧಿ ವನರಾಜ, ಕಾರ್ಮಿಕ ಇಲಾಖೆಯ ಮಹೇಶ ಬಡಿಗೇರ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು. 

ಶಿವಲೀಲಾ ವನ್ನೂರು ಅವರು, ಲೈಂಗಿಕ ಅಪರಾಧಗಳಿಂದ ಮಕ್ಕಳ ಸಂರಕ್ಷಣಾ ಕಾಯ್ದೆಹಿ2012ರ ಕುರಿತು, ರವಿಕುಮಾರ ಪವಾರ ಅವರು ಬಾಲ್ಯವಿವಾಹ ನಿಷೇಧ ಕಾಯ್ದೆಹಿ2006 ಹಾಗೂ ಕರ್ನಾಟಕ ತಿದ್ದುಪಡಿಹಿ2016ರ ಬಗ್ಗೆ ಮತ್ತು ಪ್ರತಿಭಾ ಕಾಶಿಮಠ ಅವರು ಗ್ರಾಮ ಮಟ್ಟದ ಮಕ್ಕಳ ರಕ್ಷಣಾ ಸಮಿತಿಗಳ ಜವಾಬ್ದಾರಿಗಳ ಕುರಿತು ಮಾಹಿತಿ ನೀಡಿದರು.ಕಾರ್ಯಕ್ರಮದಲ್ಲಿ ಕುಕನೂರು ಮತ್ತು ಯಲಬುರ್ಗಾ ತಾಲೂಕಿನ ಎಲ್ಲಾ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ಭಾಗವಹಿಸಿದ್ದರು.