ಫೆ. 10ರಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಆಡಳಿತ ಅಧಿಕಾರಿಗಳ 2ನೇ ಹಂತದ ಅನಿರ್ಧಿಷ್ಟಾವಧಿ ಮುಷ್ಕರ

Feb. 2nd phase indefinite strike of village administrative officers demanding fulfillment of variou

ಫೆ. 10ರಿಂದ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗ್ರಾಮ ಆಡಳಿತ ಅಧಿಕಾರಿಗಳ 2ನೇ ಹಂತದ ಅನಿರ್ಧಿಷ್ಟಾವಧಿ ಮುಷ್ಕರ 

  ಗದಗ 06: ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಸಮಸ್ಯೆಗಳು ಮತ್ತು ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ಆದೇಶದ ಮೇರೆಗೆ ಜಿಲ್ಲೆಯಲ್ಲೂ ಫೆ. 10ರಿಂದ 2ನೇ ಹಂತದ ಅನಿರ್ಧಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಘಟಕದ ಉಪಾಧ್ಯಕ್ಷ ಚಂದ್ರಶೇಖರ ನಾಯಕ ತಿಳಿಸಿದ್ದಾರೆ.   

ಈ ಕುರಿತು ಪ್ರಕಟಣೆ ನೀಡಿರುವ ಅವರು, 2024ರ ಸೆ. 26ರಿಂದ ಅ. 3ರ ವರೆಗೆ ರಾಜ್ಯಾದ್ಯಂತ ಹಮ್ಮಿಕೊಂಡಿದ್ದ ಗ್ರಾಮ ಆಡಳಿತ ಅಧಿಕಾರಿಗಳ ಅನಿರ್ಧಿಷ್ಟಾವಧಿ ಮುಷ್ಕರದ ಸಂದರ್ಭದಲ್ಲಿ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಗ್ರಾಮ ಆಡಳಿತ ಅಧಿಕಾರಿಗಳ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದರಿಂದ ಮುಷ್ಕರ ಹಿಂಪಡೆಯಲಾಗಿತ್ತು. ಆದರೆ, ಈವರೆಗೂ ಭರವಸೆ ಈಡೇರಿಸದ ಕಾರಣ 2ನೇ ಹಂತದ ಅನಿರ್ಧಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲಾಗಿದೆ.  

ಗ್ರಾಮ ಆಡಳಿತ ಅಧಿಕಾರಿಗಳ ಪ್ರಮುಖ ಬೇಡಿಕೆಗಳಾದ ರಾಜ್ಯಾದ್ಯಂತ ಆಧಾರ ಸೀಡಿಂಗ್ ಪ್ರಕ್ರಿಯೆಯಲ್ಲಿ ಪತ್ತೆಯಾಗಿರುವ 51.5 ಲಕ್ಷ ಮೃತ ಖಾತೆದಾರರ ಪಹಣಿ ದಾಖಲೆ ಅಭಿಯಾನ ಮಾದರಿಯಲ್ಲಿ ವಾರಸುದಾರರ ಹೆಸರುಗಳಿಗೆ ಪೌತಿ ಖಾತೆ ದಾಖಲಿಸುವಂತೆ ಇ-ಪೌತಿ ಖಾತಾ ಆಂದೋಲನ ಕೈಬಿಡಬೇಕು. ಚಿಕ್ಕಮಗಳೂರು ಜಿಲ್ಲೆಯಲ್ಲಿ 30 ಗ್ರಾಮ ಆಡಳಿತ ಅಧಿಕಾರಿಗಳ ವಾರ್ಷಿಕ ವೇತನ ಬಡ್ತಿಯನ್ನು ತಡೆದು ನೈಸರ್ಗಿಕ ನ್ಯಾಯ ತತ್ವಗಳನ್ನು ಹಾಗೂ ಎಲ್ಲ ನಿಯಮಗಳನ್ನು ಉಲ್ಲಂಘಿಸಿ ಹೊರಡಿಸಿರುವ ದಂಡನಾ ಆದೇಶವನ್ನು ಕೂಡಲೇ ಹಿಂಪಡೆಯಬೇಕು.  

ಅಂತರ್ ಜಿಲ್ಲಾ ವರ್ಗಾವಣೆಯ ಕೆಸಿಎಸ್‌ಆರ್ ನಿಯಮ 16ಎ ರ ಉಪಖಂಡ(2)ನ್ನು ಮರುಸ್ಥಾಪಿಸುವ ಬಗ್ಗೆ ಅಥವಾ ಇತರೆ ಎಲ್ಲಾ ಇಲಾಖೆಗಳಲ್ಲಿರುವಂತೆ ಕಂದಾಯ ಇಲಾಖೆಯಲ್ಲಿ ವರ್ಗಾವಣೆಗಾಗಿ ವಿಶೇಷ ಮಾರ್ಗಸೂಚಿ ರಚಿಸಬೇಕು. ಗ್ರಾಮ ಆಡಳಿತ ಅಧಿಕಾರಿಗಳಿಗೆ ಸುಸಜ್ಜಿತ ಕಚೇರಿ, ಗುಣಮಟ್ಟದ ಟೇಬಲ್, ಖುರ್ಚಿ, ಅಲ್ಮೇರಾ, ಮೊಬೈಲ್, ಲ್ಯಾಪ್‌ಟಾಪ್, ಪ್ರಿಂಟರ್ ಹಾಗೂ ಸ್ಕ್ಯಾನರ್‌ಗಳನ್ನು ಒದಗಿಸಬೇಕು. ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಯನ್ನು ತಾಂತ್ರಿಕ ಹುದ್ದೆಗಳಿಗೆ ನೀಡುವ ವೇತನ ಶ್ರೇಣಿ ನಿಗದಿಪಡಿಸಿ ಆದೇಶ ನೀಡಬೇಕು.  

ಕಂದಾಯ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರಕಾರಿ ನೌಕರರ ಎಲ್ಲಾ ವೃಂದಗಳನ್ನು ಒಳಗೊಂಡಂತೆ ನೀಡುತ್ತಿರುವ ಅನುಕಂಪದ ನೇಮಕಾತಿಯ ಹುದ್ದೆಯ ವೃಂದ ಹಾಗೂ ನೇಮಕಾತಿ ತಿದ್ದುಪಡಿ ಮಾಡಬೇಕು. ಕರ್ತವ್ಯ ನಿರ್ವಹಿಸುವ ಸಂದರ್ಭದಲ್ಲಿ ಜೀವಹಾನಿ ಸಂಭವಿಸಿದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ಮಂಜೂರು ಮಾಬೇಕು. ಪ್ರಯಾಣ ಭತ್ಯೆಯನ್ನು 500ರಿಂದ 5000 ರೂ. ಹೆಚ್ಚುವರಿ ಮಾಡಬೇಕು. ಬೆಳೆ ಸಮೀಕ್ಷೆ, ಬೆಳೆ ಹಾನಿ ಪರಿಹಾರದ ಕೆಲಸವನ್ನು ಕೃಷಿ, ತೋಟಗಾರಿಕೆ ಇಲಾಖೆಗೆ ನಿರ್ವಹಿಸುವಂತೆ ಆದೇಶಿಸಬೇಕು. ಮ್ಯೂಟೇಶನ್ ಅವಧಿ ದಿನವನ್ನು ವಿಸ್ತರಿಸಬೇಕು. ಪ್ರೋಟೋಕಾಲ್ ಕೆಲಸದಿಂದ ಗ್ರಾಮ ಆಡಳಿತ ಅಧಿಕಾರಿಗಳಿಗೆ ಕೈಬಿಡಬೇಕು. ಜಾಬ್ ಚಾರ್ಟ್‌ ನಿಗದಿಪಡಿಸಬೇಕು. ದಫ್ತರ್ ಹಾಗೂ ಜಮಾಬಂದಿಯನ್ನು ರದ್ದುಪಡಿಸಬೇಕು. ಹಾಗೂ ರಾಜ್ಯದ ಗ್ರಾಮ ಸಹಾಯಕರಿಗೆ ಸೇವಾಭದ್ರತೆಯನ್ನು ಒದಗಿಸುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ 2ನೇ ಹಂತದ ಅನಿರ್ಧಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.