ಫೆ. 14 ರಂದು ಸ್ಟೀಮ್ ಎಚ್ ತರಬೇತಿ ಮತ್ತು ಸಂಶೋಧನಾ ಕೇಂದ್ರಕ್ಕೆ ಅಡಿಗಲ್ಲು
ಬೆಳಗಾವಿ 12: ಉತ್ತರ ಕರ್ನಾಟಕ ಭಾಗದ ವಿದ್ಯಾರ್ಥಿಗಳು ರೋಬೋಟಿಕ್ಸ, ಕೃತಕ ಬುದ್ಧಿಮತ್ತೆ, ಬಾಹ್ಯಾಕಾಶ ತಂತ್ರಜ್ಞಾನ ಸೇರಿದಂತೆ ವಿಜ್ಞಾನ ಹಾಗೂ ತಂತ್ರಜ್ಞಾನಕ್ಕೆ ಪೂರಕವಾದ ವಿಷಯಗಳ ಕುರಿತು ಸಂಶೋಧನೆ ಕೈಗೊಳ್ಳುವುದರ ಜೊತೆಗೆ ಉತ್ಕೃಷ್ಟ ಗುಣಮಟ್ಟದ ತರಬೇತಿ ಪಡೆ ಎಂಬ ಉದ್ದೇಶದಿಂದ ದೇಶದಲ್ಲಿಯೇ ಪ್ರಥಮ ಬಾರಿಗೆ ನಾಗನೂರು ರುದ್ರಾಕ್ಷಿ ಮಠದ ಸಿದ್ಧರಾಮೇಶ್ವರ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಟ್ರಾನ್ಸ್ ಡಿಸಿಪ್ಲೇನರಿ ಲನಿಂರ್ಗ್ ಸೊಲ್ಯೂಷನ್ ಪ್ರೈವೇಟ್ ಲಿಮಿಟೆಡ್ ಇವರ ಮಾರ್ಗದರ್ಶನದಲ್ಲಿ ಪ್ರಾರಂಭಿಸಲಾಗುತ್ತಿರುವ ಸ್ಟೀಮ್ ಹೆಚ್ ತರಬೇತಿ ಮತ್ತು ಸಂಶೋಧನಾ ಕೇಂದ್ರದ ಅಡಿಗಲ್ಲು ಸಮಾರಂಭವನ್ನು ಫೆ. 14 ರಂದು ಎಸ್. ಜಿ. ಬಾಳೆಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಹಮ್ಮಿಕೊಳ್ಳಲಾಗುತ್ತಿದೆ ಎಂದು ನಾಗನೂರು ರುದ್ರಾಕ್ಷಿ ಮಠದ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು ತಿಳಿಸಿದ್ದಾರೆ.
ಸಮಾರಂಭದ ಸಾನಿಧ್ಯವನ್ನು ಯಡಿಯೂರು ಜಗದ್ಗುರು ತೋಂಟದಾರ್ಯ ಸಂಸ್ಥಾನ ಮಠದ ಡಾ. ತೋಂಟದ ಸಿದ್ಧರಾಮ ಮಹಾಸ್ವಾಮಿಗಳು ವಹಿಸಲಿದ್ದು, ನೇತೃತ್ವವನ್ನು ನಾಗನೂರು ರುದ್ರಾಕ್ಷಿ ಮಠದ ಡಾ. ಅಲ್ಲಮಪ್ರಭು ಮಹಾಸ್ವಾಮಿಗಳು ವಹಿಸಲಿದ್ದಾರೆ. ಕಾರ್ಯಕ್ರಮವನ್ನು ಭಾರತೀಯ ತಂತ್ರಜ್ಞಾನ ಸಂಸ್ಥೆ ಐಐಟಿ ಯ ನಿರ್ದೇಶಕ ಪ್ರೊ. ವೆಂಕಪ್ಪಯ್ಯ ದೇಸಾಯಿ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಶಾಸಕರಾದ ಮಹಾಂತೇಶ ಕೌಜಲಗಿ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ ಶಿಂದೆ ಭಾಗವಹಿಸಲಿದ್ದು, ಇದೇ ಸಂದರ್ಭದಲ್ಲಿ ವಿಟಿಯು ಕುಲಸಚಿವ ಡಾ. ಬಿ. ಈ. ರಂಗಸ್ವಾಮಿ ಹಾಗೂ ಇನ್ಫೋಸಿಸ್ ಟೆಕ್ನಾಲಜಿಸ್ ಲಿಮಿಟೆಡ್ ನ ಕೆ. ಎಚ್. ರವೀಂದ್ರ ಅವರನ್ನು ಸನ್ಮಾನಿಸಲಾಗುವುದು.