ಫೆ. 08 ರಂದು ಶಂಕು ಸ್ಥಾಪನೆ ಸಂತೋಷ್ ಲಾಡ್ ನೇತೃತ್ವದಲ್ಲಿ ಪೂರ್ವಭಾವಿ ಸಭೆ

 ಫೆ. 08 ರಂದು ಶಂಕು ಸ್ಥಾಪನೆ ಸಂತೋಷ್ ಲಾಡ್ ನೇತೃತ್ವದಲ್ಲಿ ಪೂರ್ವಭಾವಿ ಸಭೆ Foundation stone laying on Feb. 08 Preparatory meeting led by Santosh Lad


ಧಾರವಾಡ  27: ಬೆಣ್ಣೆ ಹಳ್ಳಕ್ಕೆ ತಡೆಗೋಡೆ ನಿರ್ಮಿಸುವ ಮಹತ್ವದ ಯೋಜನೆಗೆ ಫೆ.08 ರಂದು ಚಾಲನೆ ನೀಡುವ ನಿಟ್ಟಿನಲ್ಲಿ, ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್‌. ಲಾಡ್ ಅವರು ಅಧಿಕಾರಿಗಳು ಹಾಗೂ ಮುಖಂಡರೊಂದಿಗೆ ಪೂರ್ವಭಾವಿ ಸಭೆ,  ಮಾತನಾಡಿದರು. 

ಅವರು ನಿನ್ನೆ ಮಧ್ಯಾಹ್ನ (ಜ.26) ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಶಿರಗುಪ್ಪಿಯಲ್ಲಿ ಫೆ. 08 ರಂದು ಆಯೋಜಿಸಿರುವ ಶಂಕುಸ್ಥಾಪನೆಯ ಕಾರ್ಯಕ್ರಮದ ರೂಪುರೇಷೆಗಳ ಕುರಿತು ಚರ್ಚಿಸಲು ಕರೆದಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 

 ಬೆಣ್ಣೆ ಹಳ್ಳದ ತಡೆಗೋಡೆ ನಿರ್ಮಾಣದ ಶಂಕುಸ್ಥಾಪನಾ ಕಾರ್ಯಕ್ರಮವನ್ನು ಶಿರಗುಪ್ಪಿ ಗ್ರಾಮದಲ್ಲಿ ಆಯೋಜಿಸಲಾಗುತ್ತಿದೆ. 

 ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಹಾಗೂ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ ಅವರು, ಅನೇಕ ಸಚಿವರು ಬರುವ ಹಿನ್ನೆಲೆಯಲ್ಲಿ ಈ ಪೂರ್ವಭಾವಿಸಭೆಯನ್ನು ಆಯೋಜಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿ ಪರೀಶೀಲನೆ ನಡೆಸಿ, ಯಾವುದೇ ಕೊರತೆಗಳು ಆಗದ ಹಾಗೆ ನಿಗಾ ವಹಿಸಬೇಕು ಎಂದು ಅಧಿಕಾರಿಗಳಿಗೆ ಅವರು ಹೇಳಿದರು. 

 ಬೆಣ್ಣೆ ಹಳ್ಳದ ಪ್ರವಾಹದಿಂದ ಈ ಭಾಗದ ರೈತರು ಹಾಗೂ ಗ್ರಾಮಸ್ಥರು ಪ್ರತಿವರ್ಷ ಸಂಕಷ್ಟ ಅನುಭವಿಸುತ್ತಿದ್ದಾರೆ. ಇದಕ್ಕೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ತಡೆಗೋಡೆ ನಿರ್ಮಾಣ ಮಾಡಲಾಗುತ್ತಿದೆ ಎಂದು ತಿಳಿಸಿದರು. 

ನವಲಗುಂದ ಶಾಸಕ ಎನ್‌. ಹೆಚ್‌. ಕೋನರೆಡ್ಡಿ ಅವರು ಮಾತನಾಡಿ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಮತ್ತು ಸಾರ್ವಜನಿಕರು ಭಾಗವಹಿಸುವ ನೀರೀಕ್ಷೆಯಿದ್ದು, ಅದಕ್ಕೆ ತಕ್ಕಂತೆ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ  ತಿಳಿಸಿದರು.  

ವೇದಿಕೆ ನಿರ್ಮಾಣ, ಆಸನ ವ್ಯವಸ್ಥೆ ಮತ್ತು ಆಗಮಿಸುವ ಗಣ್ಯರಿಗೆ ಹಾಗೂ ಸಾರ್ವಜನಿಕರಿಗೆ ಅಡೆತಡೆ ಆಗದಂತೆ ನೋಡಿಕೊಳ್ಳಲು ಸಂಬಂಧಪಟ್ಟ ಇಲಾಖೆಗಳಿಗೆ ಸೂಚನೆ ನೀಡಿ ಹೇಳಿದರು.  ಸಭೆಯಲ್ಲಿ ಪ್ರಭಾರ ಜಿಲ್ಲಾಧಿಕಾರಿ ಹಾಗೂ ಜಿ.ಪಂ. ಸಿಇಓ ಭುವನೇಶ ಪಾಟೀಲ ಅವರು ಸ್ವಾಗತಿಸಿದರು. ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ ಅವರು ಸಭೆ ನಿರ್ವಹಿಸಿದರು. 

ವೇದಿಕೆಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಾಧಿಕಾರ ಅಧ್ಯಕ್ಷ ಎಸ್‌. ಆರ್‌. ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ, ಹುಬ್ಬಳ್ಳಿ-ಧಾರವಾಡ  ಮಹಾನಗರ ಪಾಲಿಕೆ ಆಯುಕ್ತ ಡಾ.ರುದ್ರೇಶ.ಎಸ್‌.ಘಾಳಿ ಅವರು ಉಪಸ್ಥಿತರಿದ್ದರು.