ಗೆಜೆಟೆಡ್ ಪ್ರೊಬ್ರೇಷನರ್ ಗ್ರೂಪ್ ಎ ಹಾಗೂ ಗ್ರೂಪ್ ಬಿ ವೃಂದದ ಪರೀಕ್ಷೆ ಪೂರ್ವಭಾವಿ ಸಭೆ
ವಿಜಯಪುರ, ಡಿ.26: ಮುಂದಿನ ಆಡಳಿದ ಅಧಿಕಾರಿಗಳು ರೂಪುಗೊಳ್ಳುವ ಪರೀಕ್ಷೆ ಇದಾಗಿದ್ದು, ಅತ್ಯಂತ ಎಚ್ಚರಿಕೆ, ಸೂಕ್ಷ್ಮವಾಗಿ ಪಾರದರ್ಶಕತೆಯಿಂದ ಪರೀಕ್ಷೆ ನಡೆಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಪರೀಕ್ಷೆಗೆ ನಿಯೋಜಿತ ಅಧಿಕಾರಿಗಳಿಗೆ ಸೂಚಿಸಿದರು.
ಗುರುವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ 2023-24ನೇ ಸಾಲಿನ ಗೆಜೆಟೆಡ್ ಪ್ರೊಬ್ರೇಷನರ್ ಗ್ರೂಪ್ ಎ ಹಾಗೂ ಗ್ರೂಪ್ ಬಿ ವೃಂದದ ಪರಿಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಡಿಸೆಂಬರ್ 29ರ ರವಿವಾರ ನಡೆಯುವ 32 ಕೇಂದ್ರಗಳಲ್ಲಿ ಒಟ್ಟು 12741 ಅಭ್ಯರ್ಥಿಗಳು ಪರೀಕ್ಷೆಯನ್ನು ಬರೆಯಲಿದ್ದಾರೆ. ಬೆಳಿಗ್ಗೆ 10ಗಂಟೆಯಿಂದ 12ಗಂಟೆಯ ವರೆಗೆ ಒಂದನೇ ಅಧಿವೇಶನ ಮದ್ಯಾಹ್ನ 2ಗಂಟೆಯಿಂದ 4 ಗಂಟೆಯ ವರೆಗೆ ಎರಡನೇ ಅವಧಿವೇಶನ ಪರೀಕ್ಷೆಗಳು ಜರುಗಲಿವೆ. ಅಭ್ಯರ್ಥಿಗಳು ಪರೀಕ್ಷಾ ದಿನಗಳಂದು ಬೆಳಗಿನ ಹಾಗೂ ಮಧ್ಯಾಹ್ನದ ಅಧಿವೇಶನಗಳ ಪರೀಕ್ಷೆ ಪ್ರಾರಂಭವಾಗುವ 02 ಗಂಟೆ ಮೊದಲು ಕಡ್ಡಾಯವಾಗಿ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು. ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸುವುದು.
ಪರೀಕ್ಷಾ ಕೇಂದ್ರಗಳಿಗೆ ಉಪಕೇಂದ್ರಗಳ ಮೇಲ್ವಿಚಾರಣೆಗೆ ಓರ್ವ ಎ ಹಾಗೂ ಬಿ ದರ್ಜೆಯ ಅಧಿಕಾರಿಯನ್ನು ನೇಮಿಸಿವುದು ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆ ಕೊಂಡೊಯ್ಯಲು ಮಾರ್ಗಾಧಿಕಾರಿಯನ್ನು ನೇಮಿಸಿ ಅವರಿಗೆ ಬೆಂಗಾವಲು ಕಾರ್ಯಕ್ಕಾಗಿ ಓರ್ವ ಸಶಸ್ತ್ರ ಪೊಲೀಸ್ ಸಿಬ್ಬಂದಿ, ಗ್ರೂಪ್-ಡಿ ಸಿಬ್ಬಂದಿ, ವಾಹನದ ವ್ಯವಸ್ಥೆಗೆ ಅವರು ಸೂಚನೆ ನೀಡಿದರು.
ಅಭ್ಯರ್ಥಿಗಳನ್ನು ಕಟ್ಟುನಿಟ್ಟಾಗಿ ತಪಾಸಣೆಗೊಳಪಡಿಸಬೇಕು. ಅಭ್ಯರ್ಥಿಗಳ ಯಾವುದೇ ಎಲೆಕ್ಟ್ರಾನಿಕ್ ಡಿವೈಸ್, ಮೈಕ್ರೋಪೂನ್ ಇನ್ನಿತರ ಉಪಕರಣ ಬಳಸದಿರುವ ಬಗ್ಗೆ ತಪಾಸಣೆ ನಡೆಸಬೇಕು. ಪರೀಕ್ಷಾ ಹಿಂದಿನ ದಿನ ಸಿಸಿಟಿವಿ ಕ್ಯಾಮರಾ ಬಾಡಿ ಕ್ಯಾಮರಾ, ಪ್ರಿಸ್ಕಿಂಗ್, ಮುಖ ಚಹರೆ ಮತ್ತು ಜಾಮರ್ ಗಳನ್ನು ಉಪ ಪರೀಕ್ಷಾ ಕೇಂದ್ರದ ಪರೀಕ್ಷಾ ಕೊಠಡಿಗಳಲ್ಲಿ ಅಳವಡಿಸುವುದು, ಪರೀಕ್ಷಾ ದಿನದಂದು ಅವುಗಳು ಕಾರ್ಯನಿರ್ವಹಿಸುತ್ತಿರುವ ಕುರಿತು ಪರೀಶೀಲಿಸಿಕೊಳ್ಳಬೇಕು. ಪರೀಕ್ಷಾ ಶುರುವಾಗುವ ಅರ್ಧಗಂಟೆಯ ಮುಂಚೆ ಜಾಮರ್ ಆನ್ ಮಾಡುವುದು, ಪರೀಕ್ಷಾ ಮುಗಿದ ಅರ್ಧ ಗಂಟೆಯ ನಂತರ ಬಂದ್ ಮಾಡುವುದು. ಎಲ್ಲಾ ಸಿಸಿಟಿವಿ ಕ್ಯಾಮಾರಗಳ ವಿಕ್ಷಣೆಗೆ ಅನುಕೂಲವಾಗುವಂತೆ ದೃಶ್ಯಾವಳಿ ವೀಕ್ಷಿಸಲು ಮಾನಿಟರ್ ಅಳವಡಿಸಿ ವೆಬ್ ಕಾಸ್ಟಿಂಗ್ ಮಾಡಬೇಕು. ಪರೀಕ್ಷಾ ಕೊಠಡಿಗಳಲ್ಲಿ ಸಾಕಷ್ಟು ಗಾಳಿ ಬೆಳಕಿನ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು. ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ಸೇರಿದಂತೆ ಅಗತ್ಯ ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಯಿತು.
ಪ್ರತಿ ಅಭ್ಯರ್ಥಿಯ ಮಧ್ಯೆ 2 ಮೀಟರ್ ಅಂತರವಿರಬೇಕು.ವಿಕಲಚೇತನ ಅಭ್ಯರ್ಥಿಗಳಿಗೆ ಪರಿಕ್ಷಾ ಕೊಠಡಿಗಳಿಗೆ ತೆರಳಲು ಅನುಕೂಲವಾಗುವಂತೆ ವೀಲ್‌ಚೇರ-ಇಳಿಜಾರು ಸೌಲಭ್ಯ ಒದಗಿಸಬೇಕು. ಹಿಯರಿಂಗ್ ಏಯ್ಡ್ ಧರಿಸಿರುವ ಅಭ್ಯರ್ಥಿಗಳು ವೈದ್ಯಕೀಯ ದಾಖಲೆಗಳನ್ನು ಕಡ್ಡಾಯವಾಗಿ ಹಾಜರುಪಡಿಸಬೇಕು. ಅಭ್ಯರ್ಥಿಗಳ ಗುರುತೀನ ಚೀಟಿ ತಪಾಸಣೆ ನಡೆಸಿ ಖಚಿತಪಡಿಸಿಕೊಳ್ಳಬೇಕು. ಮಹಿಳಾ ಅಭ್ಯರ್ಥಿಗಳಿಗೆ ಕಡ್ಡಾಯವಾಗಿ ಮಹಿಳಾ ಸಿಬ್ಬಂದಿ ತಪಾಸಣೆ ನಡೆಸಬೇಕು. ಮೊಬೈಲ್, ಕ್ಯಾಲಕುಲೇಟರ್, ಸೇರಿದಂತೆ ಯಾವುದೇ ಇಲೆಕ್ಟ್ರಾನಿಕ್ ಉಪಕರಣಗಳನ್ನು ಬಳಸದೇ ಇರುವುದು ಖಚಿತ ಪಡಿಸಿಕೊಳ್ಳಬೇಕು ಎಂದು ಸೂಚಿಸಿ, ಪಾರದರ್ಶಕ ಹಾಗೂ ವ್ಯವಸ್ಥಿತವಾಗಿ ಪರೀಕ್ಷೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಯಿತು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ ಮಾತನಾಡಿ ಪರೀಕ್ಷಾ ದಿನದಂದು ಪರೀಕ್ಷೆಗಳು ಸುಗಮವಾಗಿ ನಡೆಯಲು ಪೋಲಿಸ್ ಇಲಾಖೆಯಿಂದ ಎಲ್ಲ ರೀತಿಯ ಸಹಾಯ ಸಹಕಾರಿ ನೀಡಲಾಗುವುದು ಎಂದು ಅವರು ಸಭೆಗೆ ತಿಳಿಸಿದರು.
ಸಭೆಯಲ್ಲಿ ನಗರಾಭಿವೃದ್ದಿ ಪ್ರಾಧಿಕಾರದ ಆಯುಕ್ತ ರಾಜಶೇಖರ ಡಂಬಳ, ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಡಾ.ಸಿ.ಕೆ.ಹೊಸಮನಿ, ಮಾರ್ಗಾಧಿಕಾರಿಗಳು, ಅಧೀಕ್ಷಕರು, ಸ್ಥಾನಿಕ ನೀರೀಕ್ಷಣಾಧಿಕಾರಿಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ವಿವಿಧ ಪ್ರಾಂಶುಪಾಲರು, ಉಪನ್ಯಾಸಕರು ಉಪಸ್ಥಿತರಿದ್ದರು.