ಮಕ್ಕಳಿಗಾಗಿ ಸಮಸ್ಯೆ ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಿ - ಶಶಿಧರ ಕೋಸಂಬೆ
ವಿಜಯಪುರ 18: ಮಕ್ಕಳ ಸಮಸ್ಯೆಗಳನ್ನು ಅರಿತುಕೊಂಡು ಅಧಿಕಾರಿಗಳು ಸಕಾಲದಲ್ಲಿ ಪರಿಹಾರ ಕ್ರಮಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶಶಿಧರ ಕೋಸಂಬೆ ಅವರು ತಿಳಿಸಿದರು. ವಿಜಯಪುರ ನಗರದ ಗಾಂಧಿ ವೃತ್ತದಲ್ಲಿನ ಸರ್ಕಾರಿ ಪ್ರೌಢಶಾಲೆ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕಾರ್ಮಿಕ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಹಯೋಗದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಕ್ಕಳ ಹಕ್ಕುಗಳ ಕುರಿತು ಮಕ್ಕಳೊಂದಿಗೆ ಸಂವಾದ ಮತ್ತು ಅಹವಾಲು ಸ್ವೀಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಕ್ಕಳಿಗೆ ಉತ್ತಮ ವಾತಾವರಣ ಕಲ್ಪಿಸಿಕೊಟ್ಟು ಸದೃಢ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕು. ಮಕ್ಕಳಿಗೆ ಸಾಮಾಜಿಕ ನ್ಯಾಯ, ಸಹೋದರತ್ವ, ಭ್ರಾತೃತ್ವ ಭಾವನೆಗಳಿಂದ ಕೂಡಿದ ಮೌಲ್ಯಯುತ ಶಿಕ್ಷಣ ನೀಡಬೇಕು ಎಂದರು. ಸಂವಿಧಾನದದಲ್ಲಿ ಪ್ರತಿಯೊಬ್ಬರಿಗೂ ಬದುಕುವ ಹಕ್ಕನ್ನು ನೀಡಿದೆ. ವಿಶ್ವಸಂಸ್ಥೆಯಲ್ಲಿ ಮಕ್ಕಳ ಹಕ್ಕುಗಳ ಒಡಂಬಡಿಕೆ ಅಂಗೀಕಾರವಾದ ನಂತರ ದೇಶದಲ್ಲಿ ಮಕ್ಕಳ ಹಕ್ಕು ಕಾಯ್ದೆಗಳಿಗೆ ತಿದ್ದುಪಡಿ ತರಲಾಗಿದೆ. ಅದರಲ್ಲಿ ಬಹಳ ಮುಖ್ಯವಾದದ್ದು ಬಾಲನ್ಯಾಯ ಕಾಯ್ದೆ, ಬಾಲ ಮತ್ತು ಕಿಶೋರ್ ಕಾರ್ಮಿಕ ನಿಷೇಧ ಮತ್ತು ನಿಯಂತ್ರಣ ಕಾಯ್ದೆ ಹಾಗೂ ಬಾಲ್ಯವಿವಾಹ ನಿಷೇಧ ಕಾಯ್ದೆ ಎಂದು ತಿಳಿಸಿದರು. ಸಮಾಜದಲ್ಲಿರುವ ಮೌಡ್ಯ, ಅನಿಷ್ಟ ಪದ್ಧತಿಗಳು ತೊಡೆದು ಹಾಕಿ, ಬಾಲ್ಯವಿವಾಹ,ಬಾಲ ಕಾರ್ಮಿಕ ಪದ್ಧತಿಯಂತಹ ಅನಿಷ್ಟ ಪದ್ಧತಿಗಳನ್ನು ತೊಡೆದು ಹಾಕಲು ಜಾಗೃತಿ ಅಗತ್ಯವಾಗಿದೆ. ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಅರವಿಂದ ಹಾಗರಗಿ ಮಾತನಾಡಿ, ಮಕ್ಕಳ ಹಕ್ಕಗಳ ಕಾನೂನು ಕುರಿತು ಸಾರ್ವಜನಿಕರಿಗೆ ಅರಿವು ಮೂಡಿಸುವಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಬೇಕು. ಮಕ್ಕಳ ಹಕ್ಕುಗಳ ರಕ್ಷಣೆಯಲ್ಲಿ ಎಲ್ಲರೂ ಕಾರ್ಯ ನಿರ್ವಹಿಸಬೇಕು. ಸಮಾಜದ ಸಹಕಾರ ಅಗತ್ಯ ಎಂದು ಹೇಳಿದರು. ಮಕ್ಕಳ ಹಕ್ಕುಗಳ ರಕ್ಷಣೆಗೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸಿದ್ಧವಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ವಿವಿಧ ತಾಲ್ಲೂಕುಗಳ ಮಕ್ಕಳೊಂದಿಗೆ ಸಂವಾದ ನಡೆಯಿತು. ಮಕ್ಕಳು ಕೇಳಿದ ಪ್ರಶ್ನೆಗಳಿಗೆ ಜಿಲ್ಲಾಮಟ್ಟದ ಅಧಿಕಾರಿಗಳು ಉತ್ತರಿಸಿದರು. ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಜಿಲ್ಲಾ ನಿರುಪಣಾಧಿಕಾರಿ ಸಾವಿತ್ರಿ ಗುಗ್ಗರಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದೀಪಾಕ್ಷಿ ಜಾನಕಿ, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ಬಸಮ್ಮ ಹತ್ತರಕಿ, ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ವಿಭಾಗೀಯ ಸಾರಿಗೆ ನಿಯತ್ರಕರಾದ ಕುರುಬರ, ಡಿವೈಎಸ್‌ಪಿ ಬಸವರಾಜ ಯಲಿಗಾರ, ಆರೋಗ್ಯ ಇಲಾಖೆಯ ರೇಖಾ ದಶವಂತ, ಜಿ.ಎಮ್. ಕೊಲೂರ ಗುರುರಾಜ ಇಟಗಿ, ಶೀತಲ್ ಹೂಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.