ಭಾರತೀಯ ನೌಕಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಿದ ರಾಜ್ಯಪಾಲ

ಭಾರತೀಯ ನೌಕಾ ದಿನಾಚರಣೆಯ ಕಾರ್ಯಕ್ರಮದಲ್ಲಿ ಭಾಗವಹಿಸಿದ ರಾಜ್ಯಪಾಲ Governor participates in Indian Navy Day celebrations

  ಕಾರವಾರ 04: ಭಾರತೀಯ ನೌಕಾ ದಿನಾಚರಣೆಯ ಪ್ರಯುಕ್ತ ಕಾರವಾರದ ಐ.ಎನ್‌.ಎಸ್ ಕದಂಬ ನೌಕಾನೆಲೆಯ , ನೌಕಾದಳ ಭವನದ ಆವರಣದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಗವಹಿಸಿದ್ದರು.  

1971ರಲ್ಲಿ ಪಾಕಿಸ್ತಾನ ವಿರುದ್ಧ ನಡೆದ ಯುದ್ಧದಲ್ಲಿ ಡಿ.4ರಂದು ಕರಾಚಿಯ ಬಂದರಿನ ಮೇಲೆ ದಾಳಿ ನಡೆಸಿ ಭಾರತವು ವಿಜಯ ಸಾಧಿಸಿದ ನೆನಪಿಗೆ ಭಾರತೀಯ ನೌಕಾದಿನ ಆಚರಿಸಲಾಗುತ್ತಿದೆ.  

ಕಾರ್ಯಕ್ರಮದಲ್ಲಿ ನೌಕಾ ಸಿಬ್ಬಂದಿ ವಾದ್ಯ ಪರಿಕರಗಳಲ್ಲಿ ದೇಶಭಕ್ತಿ ಗೀತೆಗಳನ್ನು ನುಡಿಸಿದರು. ಬ್ಯಾಂಡ್ ಸಿಬ್ಬಂದಿ ಬೀಟಿಂಗ್ ರಿಟ್ರೀಟ್ ಮೂಲಕ ನೌಕಾಪಡೆಯ ಸಿಬ್ಬಂದಿಯ ತ್ಯಾಗ, ಬಲಿದಾನ ಮತ್ತು ಸಾಮರ್ಥ್ಯವನ್ನು ಸ್ಮರಿಸಿದರು. ನಂತರ ನೌಕಾಪಡೆಯ ಧ್ವಜದ ಅವರೋಹಣ ಮಾಡಲಾಯಿತು. ಸಂಭ್ರಮಾಚರಣೆಯ ಭಾಗವಾಗಿ ನೌಕಾಪಡೆಯ ನೌಕೆಗಳಿಗೆ ಆಕರ್ಷಕ ವಿದ್ಯುತ್ ದೀಪಾಲಂಕಾರ ಮಾಡಲಾಗಿದ್ದು, ನೌಕೆಗಳಿಂದ ಸಿಡಿಮದ್ದುಗಳನ್ನು ಸಿಡಿಸಲಾಯಿತು. ನೌಕಾಪಡೆಯ ಸಿಬ್ಬಂದಿ, ನೌಕಾ ಅಗ್ನಿವೀರರು, ನೌಕಾನೆಲೆ ಶಾಲೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.  

ಕರ್ನಾಟಕ ನೌಕಾ ನೆಲೆಯ ಮುಖ್ಯಸ್ಥ ಫ್ಲ್ಯಾಗ್ ಕಮಾಂಡೆಠ್ ಆಫಿಸರ್ ರಿಯರ್ ಅಡ್ಮಿರಲ್ ವಿಕ್ರಂ ಮೆನನ್, ಜಿಲ್ಲಾಧಿಕಾರಿ ಕೆ. ಲಕ್ಷ್ಮಿ ಪ್ರಿಯಾ, ಜಿ. ಪಂ. ಸಿಇಓ ಡಾ. ದೀಲೀಷ್ ಶಶಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ದೀಪನ್ ಎಂ. ಎನ್‌. , ಉಪ ಅರಣ್ಯ ಸಂರಕ್ಷಣಾಧಿಕಾರಿ ರವಿಶಂಕರ್ ಹಾಗೂ ನೌಕಾಪಡೆಯ ಅಧಿಕಾರಿಗಳು ಮತ್ತಿತರರು ಇದ್ದರು.