ಅಂಬೇಡ್ಕರ್ ಓದು ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ ಎನ್.ಡಿ.ವೆಂಕಮ್ಮ ಅಭಿಮತ ಸಂವಿಧಾನವು ಪವಿತ್ರ ಗ್ರಂಥ
ಬಳ್ಳಾರಿ 11: ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದ ಕಾನೂನು ವ್ಯಾಪ್ತಿಯಲ್ಲಿ ನಾವೆಲ್ಲರೂ ಒಳಗೊಂಡಿದ್ದೇವೆ. ಅವರು ಬರೆದಿರುವ ಸಂವಿಧಾನವು ಪ್ರತಿಯೊಬ್ಬ ನಾಗರಿಕರಿಗೆ ಪವಿತ್ರ ಗ್ರಂಥವಾಗಿದೆ ಎಂದು ಸಾಹಿತಿ ಹಾಗೂ ಬಾಬು ಜಗಜೀವನ್ ರಾಂ ಪ್ರಶಸ್ತಿ ಪುರಸ್ಕೃತರಾದ ಎನ್.ಡಿ.ವೆಂಕಮ್ಮ ಅವರು ಹೇಳಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಶ್ರೀಮತಿ ಅಲ್ಲಂ ಸುಮಂಗಳಮ್ಮ ಸ್ಮಾರಕ ಮಹಿಳಾ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಭಾರತರತ್ನ ಡಾ.ಬಿ.ಆರ್.ಅಂಬೇಡ್ಕರ್ ರವರ ಬದುಕು ಮತ್ತು ಸಾಧನೆಗಳ ಪರಿಚಯ ಕುರಿತು ಮಂಗಳವಾರ ಏರಿ್ಡಸಿದ್ದ “ಅಂಬೇಡ್ಕರ್ ಓದು” ಕಾರ್ಯಕ್ರಮವನ್ನು ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಹ ಸಾಮಾಜಿಕ ನ್ಯಾಯ ಒದಗಿಸಿಕೊಡುವ ರೀತಿಯಲ್ಲಿ ಸಂವಿಧಾನ ರಚಿಸಿದ್ದಾರೆ. ಅರ್ಥಪೂರ್ಣ ಮೂಲಭೂತ ಹಕ್ಕುಗಳು ಹಾಗೂ ಕರ್ತವ್ಯಗಳನ್ನು ನೀಡಿದ್ದಾರೆ ಎಂದರು.
ಮಹಿಳೆಯರಿಗೆ ಸಮಾನತೆ ಹಕ್ಕು, ಕಡ್ಡಾಯ ಶಿಕ್ಷಣ ಹಾಗೂ ಕಠಿಣ ಶ್ರಮದಿಂದಾಗಿ ಶೋಷಿತ ಸಮುದಾಯಗಳು, ರೈತರು, ಕಾರ್ಮಿಕರು ಇತರೆ ವರ್ಗದವರು ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಸಬಲರಾಗಲು ಶಕ್ತಿ ತುಂಬಿದ್ದಾರೆ ಎಂದರು.
ಇಂದಿನ ಯುವಜನತೆಗೆ ಅಂಬೇಡ್ಕರ್ ಅವರು ಮಾದರಿಯಾಗಿದ್ದು, ಅವರು ನಡೆದ ದಾರಿಯಲ್ಲಿ ನಾವೆಲ್ಲರೂ ಸಾಗಬೇಕು ಎಂದು ಕರೆ ನೀಡಿದರು.
ಶ್ರೀಮತಿ ಅಲ್ಲಂ ಸುಮಂಗಳಮ್ಮ ಸ್ಮಾರಕ ಮಹಿಳಾ ಪದವಿ ಪೂರ್ವ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಎಂ.ಕಾತ್ಯಾಯಿನಿ ಮರಿದೇವಯ್ಯ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಅಂಬೇಡ್ಕರ್ ರವರ ವಿಚಾರ-ಧಾರೆಗಳನ್ನು ಅರಿತುಕೊಳ್ಳಬೇಕು. ವಿದ್ಯಾರ್ಥಿಗಳು ಅವರ ಪುಸ್ತಕಗಳನ್ನು ಓದುವ ಮೂಲಕ ಪ್ರಜ್ಞಾವಂತರಾಗಬೇಕು. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ತೆಗೆದುಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ವಿಶೇಷ ಉಪನ್ಯಾಸಕರಾಗಿ ಆಗಮಿಸಿದ್ದ ಶ್ರೀ ಸತ್ಯಂ ಶಿಕ್ಷಣ ಮಹಾವಿದ್ಯಾಲಯ ಸಹಾಯಕ ಪ್ರಾಧ್ಯಾಪಕರಾದ ಅಲಂಭಾಷ ಅವರು ಮಾತನಾಡಿ, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನವು ವಿವಿಧ ದೇಶಗಳಿಗೆ ಮಾದರಿಯಾಗಿದ್ದು, ಸಂವಿಧಾನದ ಮೂಲಕ ಸಮಾಜಕ್ಕೆ ಬಹಳಷ್ಟು ಕೊಡುಗೆ ನೀಡಿದ್ದಾರೆ ಎಂದು ಹೇಳಿದರು.
ಸಂವಿಧಾನದಿಂದ ಭಾರತವು ಸದೃಢ ರಾಷ್ಟ್ರವಾಗಿ ಹೊರಹೊಮ್ಮಿದೆ. ಭಾರತದ ಒಕ್ಕೂಟ ವ್ಯವಸ್ಥೆಯಲ್ಲಿ ಕಾನೂನನ್ನು ಹೇಗೆ ತರಬೇಕೆಂದು ಅಂಬೇಡ್ಕರ್ ಅವರು ಸಂವಿಧಾನದಲ್ಲಿ ತಿಳಿಸಿಕೊಟ್ಟಿದ್ದಾರೆ ಎಂದರು.
ಇಂದಿನ ಯುವ ಜನಾಂಗ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ.ಬಾಬಾ ಸಾಹೇಬ ಅಂಬೇಡ್ಕರರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಸಮಾಜದಲ್ಲಿ ಉತ್ತಮ ಬದುಕು ಕಟ್ಟಿಕೊಳ್ಳಲು ಸಾಧ್ಯ ಎಂದು ಅಭಿಪ್ರಾಯ ಪಟ್ಟರು.
ಇದೇ ವೇಳೆ ಸಂವಿಧಾನದ ಪೀಠಿಕೆಯ ಪ್ರತಿಜ್ಞೆಯನ್ನು ಭೋದಿಸಲಾಯಿತು.
ಕಾರ್ಯಕ್ರಮದಲ್ಲಿ ಚಿಗುರು ಕಲಾ ತಂಡದ ಹುಲುಗಪ್ಪ ಎಸ್.ಎಂ ಅವರ ಸಂಗಡಿಗರಿಂದ ಜಾನಪದ ಸಂಗೀತ ಗಾಯನಗಳನ್ನು ಪ್ರಸ್ತುತ ಪಡಿಸಿದರು.
ಡಾ. ಬಿ.ಆರ್.ಅಂಬೇಡ್ಕರ್‌ರವರ ಬದುಕು ಮತ್ತು ಸಾಧನೆಗಳ ಪರಿಚಯ ಕುರಿತು ವಿದ್ಯಾರ್ಥಿಗಳಿಗೆ ಏರಿ್ಡಸಿದ್ದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಪುಸ್ತಕ ರೂಪದಲ್ಲಿ ಬಹುಮಾನ ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಬಿ.ನಾಗರಾಜ್, ಶ್ರೀಮತಿ ಅಲ್ಲಂ ಸುಮಂಗಳಮ್ಮ ಸ್ಮಾರಕ ಮಹಿಳಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಡಾ.ಬಿ.ಗೋವಿಂದರಾಜ, ಸೇಂಟ್ ಜಾನ್ಸ್ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಹೆಚ್.ಎಸ್.ಶಿವರಾಂ, ಸರ್ಕಾರಿ (ಮಾಜಿ ಪುರಸಭೆ) ಸಂಯುಕ್ತ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ಪಿ.ನಾಗೇಶ್ವರ ರಾವ್, ವಾರ್ಡ್ಲಾ ಸಂಯುಕ್ತ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾದ ವಿಕ್ಟರ್ ಇಮ್ಯಾನುವೇಲ್ ಸೇರಿದಂತೆ ಭೋದಕ-ಭೋದಕೇತರ ವರ್ಗ, ವಿದ್ಯಾರ್ಥಿ-ವಿದ್ಯಾರ್ಥಿನಿಯರು ಹಾಗೂ ಇತರರು ಉಪಸ್ಥಿತರಿದ್ದರು.