ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯಲ್ಲಿ ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಸೂಚನೆ ರಸ್ತೆ ಸುರಕ್ಷತೆ ಕಾಳಜಿ ವಹಿಸಿ
ಬಳ್ಳಾರಿ 01 :ಸಾರಿಗೆ, ಲೋಕೋಪಯೋಗಿ, ಗಣಿ ಮತ್ತು ಭೂ ಇಲಾಖೆಯ ಅಧಿಕಾರಿಗಳು ರಸ್ತೆ ಸುರಕ್ಷತೆ ಕಾಳಜಿ ವಹಿಸಬೇಕು. ಇದರಿಂದ ಮುಂದಾಗುವ ಅಪಘಾತ ಪ್ರಕರಣಗಳನ್ನು ತಡೆಗಟ್ಟಬಹುದು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಸೂಚಿಸಿದರು.ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಏರಿ್ಡಸಿದ್ದ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಸಾರ್ವಜನಿಕರ ಸಂಚಾರಕ್ಕೆ ರಸ್ತೆಗಳನ್ನು ದುರಸ್ತಿಪಡಿಸಿ, ಅಪಘಾತಗಳಾಗದಂತೆ ಎಚ್ಚರಿಕೆ ಫಲಕಗಳನ್ನು ಅಳವಡಿಸಬೇಕು. ಜಿಲ್ಲೆಯಲ್ಲಿ ರಸ್ತೆ ಅಪಘಾತ ಪ್ರಕರಣಗಳಿಂದ ಅನೇಕ ಸಾವು ನೋವು ಉಂಟಾಗುತ್ತಿವೆ. ಅವುಗಳ ನಿಯಂತ್ರಣಕ್ಕೆ ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಜಾಗೃತಿ ಅಭಿಯಾನಗಳನ್ನು ನಡೆಸಿ ಅಪಘಾತ ಪ್ರಕರಣ ನಿಯಂತ್ರಣಕ್ಕೆ ಕ್ರಮವಹಿಸಬೇಕು ಎಂದರು.ಜಿಲ್ಲೆಯಲ್ಲಿ ಅಧಿಕ ಅದಿರು ಲಾರಿಗಳು ಸಂಚರಿಸುವ ಸಂಡೂರು ಭಾಗದಲ್ಲಿ ಸಾಕಷ್ಟು ಅಪಘಾತ ಪ್ರಕರಣ ಸಂಭವಿಸುತ್ತಿವೆ. ಅಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಯಾವೊಬ್ಬ ಸಾರಿಗೆ ಅಧಿಕಾರಿಯನ್ನು ನಿಯೋಜಿಸಿಲ್ಲ ಏಕೆ? ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಪ್ರಶ್ನಿಸಿದರು. ಈ ಭಾಗದಲ್ಲಿ ಹೆಚ್ಚು ಭಾರೀ ಗಾತ್ರದ ವಾಹನಗಳ ಸಂಚಾರವಿದ್ದು, ಸಿಬ್ಬಂದಿ ಕೊರತೆ ಬಗ್ಗೆ ಕೇಂದ್ರ ಕಚೇರಿಗೆ ಪತ್ರ ಬರೆಯಿರಿ; ಅಪಘಾತ ಪ್ರಕರಣ ತಡೆಗಟ್ಟಲು ಸೂಕ್ತ ಕಾರ್ಯಯೋಜನೆ ರೂಪಿಸಬೇಕು. ರಸ್ತೆಗಿಳಿದು ವಾಸ್ತವತೆ ಕಂಡುಕೊಳ್ಳಬೇಕು ಎಂದು ತಿಳಿಸಿದರು.*ಸಾರ್ವಜನಿಕರಿಗೆ ಸಂಚಾರಿ ನಿಯಮ ಪಾಲಿಸಲು ಜಾಗೃತಿ ಮೂಡಿಸಿ:*
ಸಂಡೂರು ವ್ಯಾಪ್ತಿಯಲ್ಲಿ ಅಪಘಾತ ಪ್ರಕರಣ ಕಡಿಮೆಗೊಳಿಸಲು ಸೂಕ್ಷ್ಮ ವಲಯ 20 ಗ್ರಾಮಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಇಲಾಖೆಗಳ ಜೊತೆಗೂಡಿ ಜನರಲ್ಲಿ ರಸ್ತೆ ಅಪಘಾತಗಳ ಬಗ್ಗೆ ಮಾಹಿತಿ ನೀಡಿ ಜಾಗೃತಿ ಮೂಡಿಸುವ ಅಭಿಯಾನ ಹಮ್ಮಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಸಾರಿಗೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ನಗರದಲ್ಲಿ ಅತಿಕ್ರಮಣ ಮಾಡಿರುವ ಫುಟ್ ಪಾತ್‌ಗಳನ್ನು ತೆರವುಗೊಳಿಸಿ, ಪಾದಚಾರಿಗಳ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ನಗರದಿಂದ ಹೊರ ಹೋಗುವ ಹಾಗೂ ಒಳ ಬರುವ ವಾಹನಗಳ ಮೇಲೆ ನಿಗಾವಹಿಸಬೇಕು. ನಗರದಲ್ಲಿ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿಬಂರ್ಧವಿದ್ದು, ಅಂತಹ ವಾಹನಗಳು ಕಂಡುಬಂದಲ್ಲಿ ತಪಾಸಣೆ ಕೈಗೊಂಡು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಸೂಚಿಸಿದರು.ಆಟೋ ಚಾಲಕರು, ತಮಗೆ ಅನುಕೂಲವಾಗುವ ಕಡೆಗಳಲ್ಲಿ ತಾವೇ ಜಾಗ ಗುರುತಿಸಿಕೊಂಡು, ನಿಲ್ಲಿಸುತ್ತಿದ್ದಾರೆ. ಇದರಿಂದ ಸಾರ್ವಜನಿಕರ ಸಂಚಾರಕ್ಕೆ ಅಡಚಣೆ ಉಂಟಾಗುತ್ತಿದ್ದು, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲು ನಗರದಲ್ಲಿ ಹೊಸ ಬಸ್‌ನಿಲ್ದಾಣ ಹತ್ತಿರ ಹಾಗೂ ರೈಲ್ವೇ ನಿಲ್ದಾಣದ ಬಳಿ ಆಟೋ ಸ್ಟ್ಯಾಂಡ್ ನಿರ್ಮಾಣಕ್ಕೆ ಸ್ಥಳ ಗುರುತಿಸಬೇಕು ಎಂದು ಹೇಳಿದರು.*ಬಸ್ ಖರೀದಿಸಿ:*
ಜಿಲ್ಲೆಯಲ್ಲಿ ವಿವಿಧ ಗ್ರಾಮಗಳಿಗೆ ತೆರಳಲು ಬಸ್ ಕೊರತೆ ಇದೆ. ಈ ಕುರಿತು ಮಾಧ್ಯಮಗಳಲ್ಲಿ ವರದಿಯಾಗುತ್ತಿವೆ ಮತ್ತು ಜನಪ್ರತಿನಿಧಿಗಳೂ ಕೂಡ ಈ ಬಗ್ಗೆ ಪ್ರಸ್ತಾಪಿಸಿದ್ದಾರೆ. ಸಾವು-ನೋವು ಉಂಟಾದಲ್ಲಿ ಯಾರು ಜವಾಬ್ದಾರಿ?; ಕೆಕೆಆರ್‌ಟಿಸಿ ಬಳ್ಳಾರಿ ವಿಭಾಗಕ್ಕೆ ಆದಾಯವೂ ಬರುತ್ತಿದೆ. ಕೂಡಲೇ ಹೊಸ ಬಸ್ ಖರೀದಿಗೆ ಪ್ರಕ್ರಿಯೆ ಆರಂಭಿಸಬೇಕು ಎಂದು ಕೆಕೆಆರ್‌ಟಿಸಿ ಬಳ್ಳಾರಿ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ತಾಕೀತು ಮಾಡಿದರು.
ಈ ಸಂದರ್ಭದಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರವಿಕುಮಾರ್, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಅಭಿಯಂತರ ಹೇಮಂತ್‌ರಾಜ್ ಸೇರಿದಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಉಪಸ್ಥಿತರಿದ್ದರು.