ಭಾರತ ಇಂದು ಪ್ರಬಲ ರಾಷ್ಟ್ರವಾಗಿ ಹೊರಹೊಮ್ಮಿದೆ: ತಹಶೀಲ್ದಾರ್ ರಾಘವೇಂದ್ರ ರಾವ್

ಭಾರತ ಇಂದು ಪ್ರಬಲ ರಾಷ್ಟ್ರವಾಗಿ ಹೊರಹೊಮ್ಮಿದೆ: ತಹಶೀಲ್ದಾರ್ ರಾಘವೇಂದ್ರ ರಾವ್  India has emerged as a powerful nation today: Tahsildar Raghavendra Rao


ಶಿರಹಟ್ಟಿ, ಆ.16: ಎಂಟು ದಶಕಗಳ ಹಿಂದೆ ಸ್ವಾತಂತ್ರ್ಯ ಪಡೆದ ಸಂದರ್ಭದಲ್ಲಿ ದೇಶದ ಸ್ಥಿತಿಗತಿಗೂ ಇಂದಿನ ಭಾರತದ ಸ್ಥಿತಿಗೂ ಅಜಗಜಾಂತರ ವ್ಯತ್ಯಾಸವಿದೆ. ಹಲವು ಆಂತರಿಕ ಹಾಗೂ ಬಾಹ್ಯ ಸವಾಲುಗಳ ನಡುವೆಯೂ ಭಾರತ ಇಂದು ವಿಶ್ವದ ಪ್ರಬಲ ರಾಷ್ಟ್ರವಾಗಿ ಹೊರಹೊಮ್ಮುವಲ್ಲಿ ಯಶಸ್ವಿಯಾಗಿದೆ ಎಂದು ತಹಶೀಲ್ದಾರ್ ಕೆ. ರಾಘವೇಂದ್ರ ರಾವ್ ಹೇಳಿದರು.  

ಪಟ್ಟಣದ ಎಸ್‌.ಎಂ. ಡಬಾಲಿ ತಾಲೂಕು ಕ್ರೀಡಾಂಗಣದಲ್ಲಿ ಶನಿವಾರ ನಡೆದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಸಾರ್ವಜನಿಕ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.  

ಸ್ವಾತಂತ್ರ್ಯ ದೊರೆತ ಸಂದರ್ಭದಲ್ಲಿ ಬಡತನ, ಅನಕ್ಷರತೆ, ಆಹಾರದ ಕೊರತೆ ಹಾಗೂ ನಿರುದ್ಯೋಗದಂತಹ ಹಲವು ಸಮಸ್ಯೆಗಳು ದೇಶದ ಮುಂದಿದ್ದವು. ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸುವುದರ ಜೊತೆಗೆ ಸಾರ್ವಜನಿಕ ವಲಯದ ಕೈಗಾರಿಕೆಗಳು, ಅಣೆಕಟ್ಟುಗಳು, ವಿದ್ಯುತ್ ಯೋಜನೆಗಳು ಹಾಗೂ ಶಿಕ್ಷಣ ಸಂಸ್ಥೆಗಳ ಸ್ಥಾಪನೆಗೆ ಆದ್ಯತೆ ನೀಡಿದ್ದರಿಂದ ಆಧುನಿಕ ಭಾರತದ ಆರ್ಥಿಕತೆ ಬಲಿಷ್ಠವಾಗಿದೆ ಎಂದು ಹೇಳಿದರು.  

ವಿಶ್ವವೇ ಚಲನಶೀಲವಾಗಿರುವ ಸಂದರ್ಭದಲ್ಲಿ ಭಾರತವೂ ಅಭಿವೃದ್ಧಿಯ ಹಾದಿಯಲ್ಲಿ ಹೆಜ್ಜೆ ಹಾಕುತ್ತಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಪ್ರಬಲ ರಾಷ್ಟ್ರವಾಗಿ ರೂಪುಗೊಳ್ಳಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.  

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕ ಡಾ. ಚಂದ್ರು ಕೆ. ಲಮಾಣಿ ವಹಿಸಿದ್ದರು. ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ವೀರಯ್ಯ ಪ್ರಭಯ್ಯ ಮಠಪತಿ, ಆರಕ್ಷಕ ವೃತ್ತ ನೀರೀಕ್ಷಕ ಬಿ.ವಿ. ನ್ಯಾಮಗೌಡ, ಪ.ಪಂ. ಮುಖ್ಯಾಧಿಕಾರಿ ಎನ್‌.ಎಂ. ಹಾದಿಮನಿ, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ರಾಮಣ್ಣ ಡಿ. ದೊಡ್ಡಮನಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.