ಮಕ್ಕಳಿಗೆ ಶಿಕ್ಷಣ ಹಾಗೂ ರಕ್ಷಣೆ ನೀಡುವುದು ಶಿಕ್ಷಕರ ಕರ್ತವ್ಯ
It is the duty of teachers to educate and protect children
ಮಕ್ಕಳಿಗೆ ಶಿಕ್ಷಣ ಹಾಗೂ ರಕ್ಷಣೆ ನೀಡುವುದು ಶಿಕ್ಷಕರ ಕರ್ತವ್ಯ
ಗದಗ 04 : ಮಕ್ಕಳಿಗೆ ಶಿಕ್ಷಣ ಹಾಗೂ ರಕ್ಷಣೆ ನೀಡುವುದು ಶಿಕ್ಷಕರ ಕರ್ತವ್ಯವಾಗಿದೆ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ರಾಮತ್ನಾಳ ಅವರು ತಿಳಿಸಿದರು.
ನಗರದ ಜಿಲ್ಲಾಡಳಿತ ಭವನದಲ್ಲಿ ಮಂಗಳವಾರ ಗದಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಗದಗ ಇವರ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಶಿಕ್ಷಣ ಅಧಿಕಾರಿಗಳಿಗೆ ಶಾಲೆಯಲ್ಲಿದೆ ಶಿಕ್ಷಣದ ಜೊತೆ ರಕ್ಷಣೆ ಎಂಬ ಶೀರ್ಷಿಕೆಯಡಿ ಆರ್.ಟಿ.ಇ ಕಾಯ್ದೆ, ಪೋಕ್ಸೋ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆಯ ಕುರಿತು ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಮಕ್ಕಳ ರಕ್ಷಣೆ ಹಾಗೂ ಶಿಕ್ಷಣ ನೀಡುವುದು ಶಿಕ್ಷಕರು ಸೇರಿದಂತೆ ಪ್ರತಿಯೊಬ್ಬರ ಕರ್ತವ್ಯವಾಗಿದ್ದು ಈ ಕರ್ತವ್ಯಲೋಪದಿಂದ ಮಕ್ಕಳ ಭವಿಷ್ಯದ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ. ಶಾಲೆಯ ಹಾಜರಾತಿ ಪರೀಶೀಲನೆ ಮಾಡಿ ಶಾಲೆಯಿಂದ ಮಗು ಹೊರಗುಳಿದ ಸಂದರ್ಭದಲ್ಲಿ ಪರೀಶೀಲನೆ ನಡೆಸಿ ಹಾಜರಾತಿ ಪ್ರಾಧಿಕಾರಕ್ಕೆ ತಿಳಿಸಬೇಕು. ಮಗುವಿನ ಕೌಟುಂಬಿಕೆ ಹಿನ್ನೆಲೆ ವಿಚಾರಿಸಬೇಕು. ಆರ್ಥಿಕ ಸಮಸ್ಯೆಯಿಂದ ಬಳಲುತ್ತಿರುವ ಮಗು ಶಾಲೆಯಿಂದ ದೀರ್ಘಕಾಲದವರೆಗೆ ಹೊರಗುಳಿದ ಸಂದರ್ಭದಲ್ಲಿ ಬಾಲಕಾರ್ಮಿಕತೆ, ಅನೈತಿಕ ಚಟುವಟಿಕೆ, ಬಾಲ್ಯ ವಿವಾಹ ಮುಂತಾದ ಘಟನೆಗಳು ಸಂಭವಿಸಬಹುದಾಗಿವೆ. 2016ರ ಮಕ್ಕಳ ರಕ್ಷಣಾ ನೀತಿಯನ್ನು ಪಾಲಿಸುವುದು ಕಡ್ಡಾಯವಾಗಿದೆ. ಶಾಲಾ ಫಲಕದಲ್ಲಿ ಮಕ್ಕಳ ಸಹಾಯವಾಣಿ ಅಳವಡಿಸುವುದು, ಶಾಲೆಯಲ್ಲಿ ಮಕ್ಕಳ ಸಲಹಾಪೆಟ್ಟಿಗೆ ಇಡುವುದರಿಂದ ಮಕ್ಕಳ ರಕ್ಷಣಾ ನೀತಿ ಅನುಸರಿಸಿ ಶಾಲೆಯಲ್ಲಿ ಸಂಭವಿಸಬಹುದಾದ ಅವಘಡಗಳನ್ನು ತಪ್ಪಿಸಬಹುದಾಗಿದೆ ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಪದ್ಮಾವತಿ ಜಿ ಅವರು ಮಾತನಾಡಿ ಶಾಲೆಯಿಂದ ಹೊರಗುಳಿದ ಮಕ್ಕಳ ಬಾಲ್ಯ ವಿವಾಹ ಹಾಗೂ ಬಾಲ ಗರ್ಭಿಣಿ ಪ್ರಕರಣಗಳು ಕಂಡುಬಂದಿರುವುದು ಆತಂಕಕಾರಿ ವಿಷಯವಾಗಿವೆ. ಮಕ್ಕಳು ಶಾಲೆಗೆ ಅನಧಿಕೃತ ಗೈರು ಆಗದಿರುವಂತೆ ಶಿಕ್ಷಕರು ನೋಡಿಕೊಳ್ಳಬೇಕು. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವುದರಿಂದ ಅವರ ಭವಿಷ್ಯ ಉಜ್ವಲಗೊಳಿಸಬಹುದಾಗಿದೆ ಎಂದರು.
ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಆರ್.ಎಸ್. ಬುರುಡಿ ಅವರು ಮಾತನಾಡಿ ಎಲ್ಲ ಶಾಲೆಗಳಲ್ಲಿ ಮಕ್ಕಳ ರಕ್ಷಣಾ ನೀತಿಯ ಪಾಲನೆಯಾಗಬೇಕು. ಶಾಲೆಗೆ ಹಾಜರಾದ ಮಗು ಅರ್ಥಪೂರ್ಣ ಕಲಿಕಾ ಅವಧಿ ಪೂರ್ಣಗೊಳಿಸಬೇಕು. ಶಾಲೆಗೆ ಮಕ್ಕಳನ್ನು ಕಡ್ಡಾಯವಾಗಿ ಕಳುಹಿಸುವುದು ಪಾಲಕರ ಜವಾಬ್ದಾರಿಯೂ ಕೂಡ ಆಗಿದೆ. ಶಾಲೆಯಲ್ಲಿ ಮಗುವಿಗೆ ಕಲಿಕಾ ಅವಧಿಯಲ್ಲಿ ಸಂತಸದಾಯಕ ವಾತಾವರಣ ನಿರ್ಮಾಣವಾಗಬೇಕು ಎಂದು ತಿಳಿಸಿದರು.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಿ.ಎಸ್.ಶಿವನಗೌಡ್ರ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ ಈ ಅರ್ಥಪೂರ್ಣ ಕಾರ್ಯಕ್ರಮದ ಸದುಪಯೋಗ ಎಲ್ಲರೂ ಪಡೆದುಕೊಳ್ಳಬೇಕು. ಮಕ್ಕಳ ರಕ್ಷಣೆ ಕುರಿತು ಅನೇಕ ಕಾನೂನು ಅರಿವು ಕಾರ್ಯಕ್ರಮಗಳನ್ನುಹಮ್ಮಿಕೊಳ್ಳಲಾಗುತ್ತಿದೆ. ಬಾಲ್ಯ ವಿವಾಹದಂತಹ ಅನಿಷ್ಟ ಪದ್ಧತಿಗಳನ್ನು ಮಟ್ಟಹಾಕಲು ವಿವಿಧ ಇಲಾಖೆಗಳು ಜರುಗಿಸಬೇಕಾಗಿದೆ ಎಂದು ತಿಳಿಸಿದರು.
ಇದೇ ಸಂದರ್ಭದಲ್ಲಿ ಮಕ್ಕಳ ಸಹಾಯವಾಣಿ ಕುರಿತು ಪೋಸ್ಟರ್‌ನ್ನು ಬಿಡುಗಡೆ ಮಾಡಲಾಯಿತು.
ಸಂಪನ್ಮೂಲ ವ್ಯಕ್ತಿಗಳಾದ ಬಿ.ಎನ್.ಸಂಶಿ ಅವರು ಶಾಲೆಯಲ್ಲಿದೆ ಶಿಕ್ಷಣದ ಜೊತೆ ರಕ್ಷೆ ಎಂಬ ಶೀರ್ಷಿಕೆಯಡಿ ಆರ್.ಟಿ.ಇ ಕಾಯ್ದೆ, ಫೋಕ್ಸೋ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕುರಿತು ಮಾತನಾಡಿದರು. ಜ್ಯೋತಿ ಅವರು ಭ್ರೂಣಲಿಂಗ ಪತ್ತೆ ನಿಷೇಧ ಕಾಯ್ದೆ ಕುರಿತು ಮಾತನಾಡಿದರು.
ಕಾರ್ಯಕ್ರಮದಲ್ಲಿ ಡಿವೈಎಸ್‌ಪಿ ಇನಾಮದಾರ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ಜಯಶ್ರೀ ಕವಲೂರ, ಮಕ್ಕಳ ಕಲ್ಯಾಣ ಸಮಿತಿ ಸದಸ್ಯರಾದ ಡಿ. ಐ ಈರಗಾರ, ಶಿಕ್ಷಣ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
ಎಂ.ವಿ.ಗೋಡೇಕರ್ ಪ್ರಾರ್ಥಿಸಿದರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಶ್ರೀಮತಿ ರಫೀಕಾ ಹಳ್ಳೂರು ಸ್ವಾಗತಿಸಿದರು. ರಮೇಶ ಕಳ್ಳಿಮನಿ ವಂದಿಸಿದರು. ಮಲ್ಲಪ್ಪ ಹೊಸಳ್ಳಿ ಕಾರ್ಯಕ್ರಮ ನಿರ್ವಹಿಸಿದರು.
ತದನಂತರ ನರ್ಸಿಂಗ್ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ಜರುಗಿತು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 