ಕಪ್ಪಗಲ್ಲು ಗ್ರಾಮ: ವೈದ್ಯಕೀಯ ಪದವಿ ಇಲ್ಲದೆ ವೈದ್ಯ ವೃತ್ತಿ ಮಾಡುತ್ತಿದ್ದ 05 ನಕಲಿ ವೈದ್ಯರ ಕ್ಲಿನಿಕ್ ಸೀಜ್
ಬಳ್ಳಾರಿ 20: ತಾಲ್ಲೂಕಿನ ಕಪ್ಪಗಲ್ಲು ಗ್ರಾಮದಲ್ಲಿ ಯಾವುದೇ ವೈದ್ಯಕೀಯ ಪದವಿ ಪಡೆಯದೇ ಓಷಧಿಗಳ ಮಾಹಿತಿ ಹೊಂದಿ ಜನತೆಗೆ ತಾವು ವೈದ್ಯರೆಂದು ಸುಳ್ಳು ಹೇಳಿ ವೈದ್ಯ ವೃತ್ತಿ ಮಾಡುತ್ತಿದ್ದ ನಕಲಿ ವೈದ್ಯರ 05 ಕ್ಲಿನಿಕ್‌ಗಳನ್ನು ಸೀಜ್ ಮಾಡಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶಬಾಬುತಿಳಿಸಿದ್ದಾರೆ.
ಸಾರ್ವಜನಿಕರಿಂದ ದೂರು ಬಂದ ಹಿನ್ನಲೆಯಲ್ಲಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರ ಸೂಚನೆ ಮೇರೆಗೆ ತಾಲ್ಲೂಕ ಆರೋಗ್ಯ ಅಧಿಕಾರಿ ಡಾ.ಆರ್.ಅಬ್ದುಲ್ಲಾ ಅವರ ತಂಡ ಕಪ್ಪಗಲ್ಲು ಗ್ರಾಮಕ್ಕೆ ತೆರಳಿ ಸಾರ್ವಜನಿಕರಿಗೆ ತಾವು ವೈದ್ಯರೆಂದು ಬಿಂಬಿಸಿ ಯಾವುದೇ ವೈದ್ಯಕೀಯ ಪದವಿ ಪಡೆಯದೇ ಎಸ್‌ಎಸ್‌ಎಲ್‌ಸಿ, ಪಿಯುಸಿ ತನಕ ಓದಿಕೊಂಡು ಜನತೆಗೆ ಚಿಕಿತ್ಸೆ ನೀಡುತ್ತಿದ್ದ ರಾಜಣ್ಣ ಕ್ಲಿನಿಕ್, ಶೇಕ್ಷಾವಲಿ ಕ್ಲಿನಿಕ್, ರೆಹಮಾನ್ ಕ್ಲಿನಿಕ್, ಮಹದೇವ್ ಕ್ಲಿನಿಕ್ ಮತ್ತು ಗುರು ಕ್ಲಿನಿಕ್‌ಗಳನ್ನು ಸೀಜ್ ಮಾಡಿ ಜಿಲ್ಲಾಧಿಕಾರಿಗಳ ಮುಂದಿನ ಕ್ರಮಕ್ಕಾಗಿ ವರದಿ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಸಾರ್ವಜನಿಕರು ಆರೋಗ್ಯದ ದೃಷ್ಟಿಯಿಂದ ಅಧಿಕೃತ ವೈದ್ಯ ಪದವಿ ಪಡೆದ ವೈದ್ಯರ ಬಳಿ ತಪಾಸಣೆ ಮಾಡಿಸಿ ಚಿಕಿತ್ಸೆ ಪಡೆಯುವುದರಿಂದ ಆರೋಗ್ಯದ ಮೇಲೆ ಉಂಟಾಗಬಹುದಾದ ಗಂಭೀರ ಪರಿಣಾಮಗಳನ್ನು ತಡೆಯಬಹುದಾಗಿದೆ.ಗ್ರಾಮಗಳಲ್ಲಿ ವೈದ್ಯ ವೃತ್ತಿ ಮಾಡುತ್ತಿರುವವರು ಕಂಡುಬಂದಲ್ಲಿ ಅವರ ವೈದ್ಯಕೀಯ ಪದವಿಯ ಮಾಹಿತಿ ಪಡೆದುಕೊಂಡು ಚಿಕಿತ್ಸೆ ಪಡೆಯಬೇಕು. ಒಂದು ವೇಳೆ ನಕಲಿ ವೈದ್ಯರು ಎಂದು ಕಂಡುಬಂದರೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಾರ್ಯಾಲಯಕ್ಕೆ ದೂರು ನೀಡಬಹುದು. ಕರ್ನಾಟಕ ಖಾಸಗಿ ಆಸ್ಪತ್ರೆಗಳ ಅಧಿನಿಯಮ 2007 ರ ಅಡಿ ಕ್ರಮ ಜರುಗಿಸಬಹುದಾಗಿದೆ ಎಂದು ತಿಳಿಸಿದ್ದಾರೆ.ದಾಳಿಯ ವೇಳೆ ಆರೋಗ್ಯ ನೀರೀಕ್ಷಣಾಧಿಕಾರಿ ಅರುಣ್ ಕುಮಾರ್, ಶಾಂತ್ ಕುಮಾರ್, ಮಹೇಂದ್ರ ಕುಮಾರ್, ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ರಿಹಾನಾ ಸೇರಿದಂತೆ ಆಶಾ-ಕಾರ್ಯಕರ್ತೆಯರು ಹಾಜರಿದ್ದರು.