ಕುಷ್ಟಗಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರೀಶೀಲನಾ ಸಭೆ
ಕೊಪ್ಪಳ 05: ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದ ಯಾವುದೇ ದೂರು, ಸಮಸ್ಯೆಗಳಿಗೆ ತಕ್ಷಣವೇ ತಾಲ್ಲೂಕು ಮಟ್ಟದ ಅಧಿಕಾರಿಗಳು ಸ್ಪಂದಿಸಬೇಕು ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಎಸ್.ಆರ್.ಮೆಹರೋಜ್ ಖಾನ್ ಸೂಚನೆ ನೀಡಿದರು.
ಅವರು ಬುಧವಾರ ಕುಷ್ಟಗಿ ತಾಲೂಕು ಪಂಚಾಯತ್ ಕಛೇರಿ ಸಭಾಂಗಣದಲ್ಲಿ ಕರೆದ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಪ್ರಗತಿ ಪರೀಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.
ಗ್ಯಾರಂಟಿ ಯೋಜನೆಗಳು ರಾಜ್ಯ ಸರ್ಕಾರದ ಮಹತ್ವಕಾಂಕ್ಷೆಯಾಗಿರುವ ಸಾಮಾಜಿಕ ಕಾರ್ಯಕ್ರಮವಾಗಿದೆ. ಸಮಾಜದ ಕಟ್ಟಕಡೆ ವ್ಯಕ್ತಿಗೂ ಆರ್ಥಿಕ ಸಬಲೀಕರಣಕ್ಕೆ ತುಂಬಾ ಸಹಕಾರಿಯಾಗಿರುವ ಪಂಚ ಗ್ಯಾರಂಟಿ ಯೋಜನೆಗಳ ಸಮರ್ಕವಾಗಿ ಅನುಷ್ಠಾನಕ್ಕೆ ಸಂಬಂಧಿಸಿದ ಅನುಷ್ಠಾನ ಇಲಾಖೆಗಳ ಅಧಿಕಾರಿಗಳು ಹೆಚ್ಚಿನ ಮುತುವರ್ಜಿ ವಹಿಸಬೇಕು. ಅರ್ಹರೆಲ್ಲರೂ ಗ್ಯಾರಂಟಿ ಯೋಜನೆಗಳ ವ್ಯಾಪ್ತಿಗೆ ಒಳಪಡಬೇಕು ಎಂಬುದು ಸರ್ಕಾರದ ಉದ್ದೇಶವಾಗಿದ್ದು, ಯಾವುದೇ ಅರ್ಹ ಫಲಾನುಭವಿಗಳು ಈ ಯೋಜನೆಯಿಂದ ಹೊರಗುಳಿಯಬಾರದು. ಶಕ್ತಿ, ಗೃಹಲಕ್ಷ್ಮಿ, ಅನ್ನಭಾಗ್ಯ, ಗೃಹಜ್ಯೋತಿ ಹಾಗೂ ಯುವನಿಧಿ ಸೇರಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಉಂಟಾಗುತ್ತಿರುವ ಸಣ್ಣ-ಪುಟ್ಟ ತಾಂತ್ರಿಕ ಸಮಸ್ಯೆಗಳನ್ನು ಕೂಡಲೇ ಬಗೆಹರಿಸಿ, ಅರ್ಹ ಫಲಾನುಭವಿಗಳಿಗೆ ಯೋಜನೆಯ ಲಾಭ ದೊರಕಿಸಿ, ಶೇ.100 ರಷ್ಟು ಪ್ರಗತಿ ಸಾಧಿಸಬೇಕು ಎಂದರು.
ಮಹತ್ವದ ಕಾರ್ಯಕ್ರಮವಾದ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ಸುಲಭವಾಗಿ ತಲುಪಿಸಲು ಹಾಗೂ ಸಮರ್ಕವಾಗಿ ಅನುಷ್ಠಾನಕ್ಕೆ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿಗಳನ್ನು ಸರ್ಕಾರವು ನೇಮಕ ಮಾಡಿದ್ದು ಈ ಯೋಜನೆಗಳು ಪ್ರತಿಯೊಬ್ಬ ಅರ್ಹ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಸಮಿತಿ ಅಧ್ಯಕ್ಷರು, ಸದಸ್ಯರು ಅನುಷ್ಠಾನ ಇಲಾಖೆಗಳ ಅಧಿಕಾರಿಗಳು ಶ್ರಮಿಸಬೇಕು ಎಂದು ಹೇಳಿದರು.
ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ನಿಮಿತ್ತ ಕಲಬುರಗಿಯಲ್ಲಿ ರಾಜ್ಯ ಸರ್ಕಾರದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಇದಕ್ಕಾಗಿ ಗ್ಯಾರಂಟಿ ಯೋಜನೆಗಳಡಿ ಲಾಭ ಪಡೆದು ಇತರರಿಗೆ ಮಾದರಿಯಾದ ಫಲಾನುಭವಿಗಳು ಹಾಗೂ ವಿಶೇಷವಾಗಿ ಗೃಹಲಕ್ಷ್ಮಿ ಯೋಜನೆಯಿಂದ 2000 ಸಾವಿರಗಳನ್ನು ಕೂಡಿಟ್ಟು, ಅದರಿಂದ ಸ್ವಯಂ ಉದ್ಯೋಗ ಪ್ರಾರಂಭಿಸಿರುವಂತಹ ಫಲಾನುಭವಿಗಳನ್ನು ಗುರುತಿಸಿ, ಅವರ ವಿವರವನ್ನು ಸಲ್ಲಿಸಬೇಕು ಎಂದರು.
ಸಭೆಯಲ್ಲಿ ಕೊಪ್ಪಳ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ರೆಡ್ಡಿ ಶ್ರೀನಿವಾಸ್, ಉಪಾಧ್ಯಕ್ಷರಾದ ಮಂಜುನಾಥ ಗೊಂಡಬಾಳ, ನಾಗರಾಜ್ ಅರಳಿ ಹಾಗೂ ಅಮರೇಶ ಗಾಂಜಿ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ, ಕುಷ್ಟಗಿ ತಾಲ್ಲೂಕ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಫಾರೂಖ್ ದಲಾಯತ್, ಜಿಲ್ಲಾ ಸಮಿತಿ ಸದಸ್ಯರಾದ ಶಾರದಾ ಕಟ್ಟಿಮನಿ, ಕುಷ್ಟಗಿ ತಾ.ಪಂ ಇಓ ಪಂಪಾಪತಿ ಹಿರೇಮಠ ಸೇರಿದಂತೆ ತಾಲ್ಲೂಕು ಸಮಿತಿ ಸದಸ್ಯರು, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.