ರಾಷ್ಟ್ರೀಯ ಮಾನವ ಹಕ್ಕುಗಳ ದಿನಾಚರಣೆ ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮ
ಹಾವೇರಿ 10: ಮೂಲಭೂತ ಹಕ್ಕುಗಳು ಹುಟ್ಟಿನಿಂದ ಬರುತ್ತವೆ. ಘನತೆಯ ಬದುಕು, ಮಾನವ ಹಕ್ಕುಗಳ ಉಲ್ಲಂಘನೆಯಾಗದಂತೆ ಎಲ್ಲರೂ ನಡೆದುಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಸಿ. ಸದಾನಂದಸ್ವಾಮಿ ಅವರು ಹೇಳಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ನ್ಯಾಯಾಂಗ, ಜಿಲ್ಲಾ ಕಾನೂನು ಸೇವೆಗಳ ಪ್ರಾದೇಶಿಕ, ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ, ಜಿಲ್ಲಾ ಪೊಲೀಸ್, ಜಿಲ್ಲಾ ನ್ಯಾಯವಾದಿಗಳ ಸಂಘ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದಲ್ಲಿ ಆಯೋಜಿಸಲಾದ ರಾಷ್ಟ್ರೀಯ ಮಾನವ ಹಕ್ಕುಗಳ ದಿನಾಚರಣೆ ಅಂಗವಾಗಿ ಕಾನೂನು ಅರಿವು-ನೆರವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮಾನವ ಹಕ್ಕುಗಳ ಆಯೋಗದ ಕಾರ್ಯವ್ಯಾಪ್ತಿಯನ್ನು ವಿವರಿಸಿದರು.
ಪ್ರತಿ ಪ್ರಜೆಗೂ ಘನತೆ ಹಾಗೂ ಗೌರವದಿಂದ ಬದುಕುವ ಹಕ್ಕಿದೆ. ಮಾನವ ಹಕ್ಕುಗಳ ಉಲ್ಲಂಘನೆಯಾಗದಂತೆ ಎಲ್ಲರು ಕೆಲಸಮಾಡಬೇಕು. ಪ್ರತಿಯೊಬ್ಬರೂ ತಮ್ಮ ಹಕ್ಕುಗಳ ಜೊತೆಗೆ ತಮ್ಮ ಜವಾಬ್ದಾರಿಯನ್ನು ಅರಿತುಕೊಳ್ಳಬೇಕು. ಮಾನವ ಹಕ್ಕುಗಳ ಉಲ್ಲಂಘಣೆ ಪ್ರಕರಣಗಳಲ್ಲಿ ಮರಣಹೊಂದಿದ ವ್ಯಕ್ತಿಯ ವಾರಸುದಾರರಿಗೆ ಸರ್ಕಾರದಿಂದ ಪರಿಹಾರ ಕೊಡಿಸುವ ಕಾರ್ಯವನ್ನು ಕೇಂದ್ರ ಹಾಗೂ ರಾಜ್ಯ ಮಾನವ ಹಕ್ಕುಗಳ ಆಯೋಗ ಮಾಡಿದೆ ಎಂದು ಹೇಳಿದರು.
ಕೆಲವು ಶಾಲಾ ಪ್ರದೇಶಗಳಲ್ಲಿ ಚಾಕಲೇಟ್‌ನಲ್ಲಿ ಡ್ರಗ್ಸ್ ನೀಡಲಾಗುತ್ತಿದೆ. ಇದರಿಂದ ಮಕ್ಕಳ ಹುಕ್ಕುಗಳ ಉಲ್ಲಂಘನೆಯಾಗುತ್ತದೆ. ಈ ಕುರಿತು ಪರೀಶೀಲನೆ ನಡೆಸಲಾಗುತ್ತಿದೆ. ಇಂತಹ ಪ್ರಕರಣಗಳು ಕಂಡುಬಂದಲ್ಲಿ ಶಿಕ್ಷಕರು ಹಾಗೂ ಸಹಪಾಠಿಗಳು ಸಂಬಂಧಿಸಿದವರಿಗೆ ವರದಿ ನೀಡುವುದು ತಮ್ಮ ಕರ್ತವ್ಯವಾಗಿದೆ. ಜೊತೆಗೆ ದಿನನಿತ್ಯದಲ್ಲಿ ನಡೆಯುವ ಪೋಕ್ಸೋ ಪ್ರಕರಣಗಳು, ದೌರ್ಜನ್ಯ ಪ್ರಕರಣಗಳ ತಡೆಗೆ ಎಲ್ಲರೂ ಕೈಜೋಡಿಸಬೇಕು. ಹಕ್ಕುಗಳನ್ನು ತಿಳಿದುಕೊಳ್ಳಬೇಕು ಹಾಗೂ ನಿಮ್ಮ ಸುತ್ತಮುತ್ತಲಿನವರಿಗೆ ತಿಳಿಸಿದಾಗ ಈ ಕಾರ್ಯಕ್ರಮದ ಉದ್ದೇಶ ಸಫಲವಾಗುತ್ತದೆ ಎಂದು ಹೇಳಿದರು.
ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಮಾತನಾಡಿ, ಹುಟ್ಟಿನಿಂದ ಮರಣದವರೆಗೆ ಬರುವ ಎಲ್ಲ ಹಕ್ಕುಗಳು ಮಾನವ ಹಕ್ಕುಗಳಾಗಿವೆ. ಸಮಾನತೆ ಹಾಗೂ ಜನಾಂಗೀಯ ತಾರತಮ್ಯವಾಗಬಾರದು. ಬಡತನ, ಅನಕ್ಷರತೆ ಹೀಗೆ ಹಲವಾರು ಕಾರಣಗಳಿಂದ ನಿತ್ಯದ ಬದುಕಿನಲ್ಲಿ ಬಾಲಕಾರ್ಮಿಕ, ವರದಕ್ಷಿಣೆ ಕಿರುಕುಳ, ಮಹಿಳೆಯರ ಮೇಲೆ ದೌರ್ಜನ್ಯ ಹೀಗೆ ಹಲವಾರು ಮಾನವ ಹಕ್ಕುಗಳ ಉಲ್ಲಂಘನೆಯಾಗುತ್ತಿವೆ. ನಮ್ಮಿಂದ ಹಾಗೂ ಬೇರೆಯವರಿಂದ ಮಾನವ ಹಕ್ಕುಗಳ ಉಲ್ಲಂಘನೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದರು.
ಹಕ್ಕುಗಳ ಉಲ್ಲಂಘನೆಯಾದಾಗ ಸಂತ್ರಸ್ಥರ ಪರವಾಗಿ ನಿಲ್ಲಬೇಕು. ಯಾರೇ ಇರಲಿ ಎಲ್ಲರೊಂದಿಗೆ ಸೌಜನ್ಯದಿಂದ ವರ್ತಿಸಬೇಕು ಹಾಗೂ ಗೌರವದಿಂದ ನಡೆದುಕೊಳ್ಳಬೇಕು. ಮಾನವ ಹಕ್ಕುಗಳ ಉಲ್ಲಂರ್ಘನೆಯಾಗದಂತೆ ನೋಡಿಕೊಳ್ಳುವುದು ನಮ್ಮನಿಮ್ಮೆಲ್ಲರ ಜವಾಬ್ದಾರಿಯಾಗಿದೆ. ಎಲ್ಲರೂ ಹಕ್ಕುಗಳ ಬಗ್ಗೆ ತಿಳಿದುಕೊಳ್ಳಬೇಕು ಹಾಗೂ ಇತರರಿಗೂ ಅರಿವು ಮೂಡಿಸಬೇಕು ಎಂದು ಸಲಹೆ ನೀಡಿದರು.
ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ಶಿರಕೋಳ ಅವರು ಮಾತನಾಡಿ, ಮಾನವ ಹಕ್ಕುಗಳ ಉಲ್ಲಂಘನೆ ಕುರಿತು ಪೊಲೀಸ್ ಹಾಗೂ ಮಿಲಿಟರಿ ಅವರ ಮೇಲೆ ಆಪಾಧನೆಗಳಿವೆ. ಆದರೆ ನಾವು ಎಲ್ಲರೊಂದಿಗೆ ಗೌರವದಿಂದ ನಡೆದುಕೊಳ್ಳುತ್ತೇವೆ. ಸಾಮಾನ್ಯ ಜನರಿಗಿಂತ ಬಂದಿತ ವ್ಯಕ್ತಿಗಳಿಗೆ ಹಕ್ಕುಗಳು ಹೆಚ್ಚಾಗಿರುತ್ತವೆ. ವಿವಿಧ ಪ್ರಕರಣಗಳಲ್ಲಿ ಬಂದಿಸಲಾದ ವ್ಯಕ್ತಿಗಳಿಗೆ ದಿನದ ಮೂರು ಸಮಯ ಪೌಷ್ಠಿಕ ಆಹಾರ ನೀಡಲಾಗುತ್ತದೆ. ಕುಡಿಯಲು ಬಿಸ್ಲೆರಿ ನೀರು ಪೂರೈಸಲಾಗುತ್ತದೆ. ಜೊತೆಗೆ ಸೆಲ್‌ಗಳಲ್ಲಿ ಸ್ವಚ್ಚತೆ ಕಾಪಾಡಿಕೊಳ್ಳಲಾಗುತ್ತದೆ. ಮಾನವ ಹಕ್ಕುಗಳು ಉಲ್ಲಂಘನೆಯಾಗದಂತೆ ಕಾನೂನಿನ ಚೌಕಟ್ಟಿನಲ್ಲಿ ಕಾರ್ಯನಿರ್ವಸಲಾಗುತ್ತದೆ ಎಂದು ಹೇಳಿದರು.
ಜಿಲ್ಲಾ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಸ್.ಎಚ್.ಜತ್ತಿ ಅವರು ಮಾನವ ಹಕ್ಕುಗಳ ಉಲ್ಲಂಘನೆಯಾದರೆ ರಾಜ್ಯ ಮಾನವ ಹಕ್ಕುಗಳ ಆಯೋಗ ಸ್ವಯಂ ಪ್ರೇರಣೆಯಿಂದ ತನಿಖೆ ನಡೆಸಿ ತಪ್ಪಿಸ್ಥರಿಗೆ ನೋಟಿಸ್ ಜಾರಿ ಮಾಡುತ್ತದೆ. ಉದಾಹಣೆಗೆ ಒಂದು ಖಾಸಗಿ ವಾಹಿನಿ ರಿಯಾಲಿಟಿ ಶೋನಲ್ಲಿ ನರಕ ಹಾಗೂ ಸ್ವರ್ಗ ಎಂಬ ವಿಭಾಗವನ್ನು ಮಾಡಿತ್ತು. ಆಗ ನರಕವಾಸಿಗಳಿಗೆ ಮೂಲಭೂತ ಸೌಲಭ್ಯಗಳ ಕೊರತೆ ಗಮನಿಸಿದ ಆಯೋಗ ಆ ವಾಹಿನಿಗೆ ತಕ್ಷಣ ನೋಟಿಸ್ ಜಾರಿ ಮಾಡಿತ್ತು. ಒಟ್ಟಾರೆಯಾಗಿ ಮಾಹವ ಹಕ್ಕುಗಳ ಉಲ್ಲಂಘನೆಯಾಗದಂತೆ ನೋಡಿಕೊಳ್ಳುವುದು ಎಲ್ಲರ ಕರ್ತವ್ಯವಾಗಿದ ಎಂದು ಹೇಳಿದರು.
ಉಪನ್ಯಾಸಕರಾಗಿ ಭಾಗವಹಿಸಿದ ಸಹಾಯಕ ಕಾನೂನು ನೆರವು ಅಭಿರಕ್ಷಣಾ ವಕೀಲ ಎನ್.ಎನ್.ಡಿಳ್ಳೆಪ್ಪನವರ ಅವರು ಮಾತನಾಡಿ, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸ್ವಾತಂತ್ರ್ಯ ಹಾಗೂ ಘನತೆಯಿಂದ ಬದುಕುವ ಹಕ್ಕಿದೆ. ಜೀವನ, ಸ್ವಾತಂತ್ರ್ಯ ಹಾಗೂ ಸಮಾನತೆಗೆ ಹೆಚ್ಚು ಒತ್ತು ನೀಡಲಾಗಿದೆ. ಪ್ರತಿ ಪ್ರಜೆಗೂ ಆಹಾರ, ವಸತಿ, ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು. ಎಲ್ಲರಿಗೂ ಸಮಾನ ಅವಕಾಶ ನೀಡುವ ಅಡಿಯಲ್ಲಿ ಸಂವಿಧಾನ ಹಾಗೂ ಕಾನೂನುಗಳನ್ನು ರಚಿಸಲಾಗಿದೆ ಎಂದು ಹೇಳಿದರು.
ಮಾನವ ಹಕ್ಕುಗಳ ರಕ್ಷಣೆಗೆ ಮತ್ತು ಅವುಗಳ ಪರಿಣಾಮಕಾರಿ ಜಾರಿಗಾಗಿ ಮಾನವ ಹಕ್ಕುಗಳ ರಕ್ಷಣೆ ಕಾಯ್ದೆ 1993ರನ್ವಯ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮತ್ತು ರಾಜ್ಯ ಮಾನವ ಹಕ್ಕುಗಳ ಆಯೋಗವನ್ನು ರಚನೆ ಮಾಡಲಾಗಿದೆ. ಮಾನವ ಹಕ್ಕುಗಳ ಉಲ್ಲಂಘನೆಯಾದರೆ ಮಾನವ ಹಕ್ಕುಗಳ ಆಯೋಗಕ್ಕೆ ವಿವಿಧ ವಿಧಾನಗಳ ದೂರು ಸಲ್ಲಿಸಬಹುದು. ಮಾನವ ಹಕ್ಕು ರಕ್ಷಣೆ ಆ್ಯಪ್, ಕೆ.ಎಸ್.ಎಚ್.ಆರ್‌ಸಿ ವೆಬ್‌ಸೈಟ್(ಣಣಠಿ://ಡಿಛಿ.ಞಚಿಡಿಟಿಚಿಣಚಿಞಚಿ.ರಠ.ಟಿ ) ದೂರು ನಿರ್ವಹಣಾ ವ್ಯವಸ್ಥೆ ಆನ್‌ಲೈನ್ ತಿತಿತಿ.ಡಿಛಿಟಿಜಣ.ಟಿಛಿ.ಟಿ ಮೂಲಕ ದೂರು ದಾಖಲಿಸಬಹುದು. ಶುಲ್ಕ ರಹಿತ ಸಹಾಯವಾಣಿ ಸಂಖ್ಯೆ 1800-4552-3333 ಸಂಪರ್ಕಿಸಬಹುದೆಂದು ಹೇಳಿದರು.
ಅಪರ ಜಿಲ್ಲಾಧಿಕಾರಿ ಡಾ.ನಾಗರಾಜ ಎಲ್ ಅವರು ಮಾನವ ಹಕ್ಕುಗಳ ದಿನಾಚರಣೆ ಪ್ರತಿಜ್ಞೆವಿಧಿ ಬೋಧಿಸಿದರು.
ಮೌನಾಚರಣೆ: ಇದೇ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ದಿ.ಎಸ್.ಎಂ.ಕೃಷ್ಣ ಅವರ ನಿಧನದ ಪ್ರಯುಕ್ತ ಒಂದು ನಿಮಿಷ ಮೌನಾಚರಣೆ ಆಚರಿಸಿ ಅವರ ಆತ್ಮಕ್ಕೆ ಶಾಂತಿ ಕೋರಲಾಯಿತು.
ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಗಳಾದ ಬಿ.ಆರ್.ಮುತಾಲಿಕದೇಸಾಯಿ ಅವರು ಉಪಸ್ಥಿತರಿದ್ದರು.
ವಯಸ್ಕರ ಶಿಕ್ಷಣ ಇಲಾಖೆ ಅಧಿಕಾರಿ ವಿರೇಶ ಬೇವಿನಮರದ ಸ್ವಾಗತಿಸಿದರು. ಶಿಕ್ಷಕ ಜಗದೀಶ ಚೌಟಗಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.