ಅನೀರೀಕ್ಷಿತ ದಾಳಿ ನಡೆಸಿ, ಬಾಲ ಕಾರ್ಮಿಕರನ್ನು ರಕ್ಷಿಸುವ ಕಾರ್ಯ ಚುರುಕಾಗಲಿ: ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ
ಬಳ್ಳಾರಿ 10: ಜಿಲ್ಲೆಯಲ್ಲಿ ಬಾಲಕಾರ್ಮಿಕ ಅನಿಷ್ಠ ಪದ್ಧತಿಯನ್ನು ನಿರ್ಮೂಲನೆ ಮಾಡಲು ವಿವಿಧ ಇಲಾಖೆಗಳೊಂದಿಗೆ ಸಮನ್ವಯತೆ ಸಾಧಿಸಿ ಅನೀರೀಕ್ಷಿತ ದಾಳಿ ನಡೆಸಿ, ಬಾಲ ಕಾರ್ಮಿಕ ಮಕ್ಕಳನ್ನು ರಕ್ಷಿಸುವ ಕಾರ್ಯ ಚುರುಕಾಗಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು.
ನಗರದ ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಶುಕ್ರವಾರ ಏರಿ್ಡಸಿದ್ದ ಬಾಲಕಾರ್ಮಿಕ ಯೋಜನೆಯ ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಮಕ್ಕಳನ್ನು ದುಡಿಸಿಕೊಳ್ಳುವುದು ಹಾಗೂ ಶಿಕ್ಷಣದಿಂದ ವಂಚಿತರನ್ನಾಗಿ ಮಾಡುವುದು ಅಪರಾಧ. ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಅನೀರೀಕ್ಷಿತ ದಾಳಿ ನಡೆಸಿ ಮಕ್ಕಳಿಗೆ ರಕ್ಷಣೆ ಒದಗಿಸಬೇಕು. ಮಕ್ಕಳನ್ನು ಕಾನೂನು ಬಾಹಿರವಾಗಿ ದುಡಿಸಿಕೊಳ್ಳುತ್ತಿರುವವರ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಹೇಳಿದರು.ಹದಿನಾಲ್ಕು ವರ್ಷದೊಳಗಿನ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು. ಮಕ್ಕಳ ಆರೋಗ್ಯ ಮತ್ತು ಶಿಕ್ಷಣಕ್ಕೆ ಪ್ರಥಮ ಆದ್ಯತೆ ನೀಡಬೇಕು. ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಸರ್ಕಾರದ ಜತೆಗೆ ಸರ್ಕಾರೇತರ ಸಂಸ್ಥೆಗಳು ಕೈಜೋಡಿಸಿದಾಗ ಮಾತ್ರ ಈ ಪದ್ಧತಿ ನಿರ್ಮೂಲನೆ ಮಾಡಲು ಸಾಧ್ಯವಾಗುತ್ತದೆ ಹೇಳಿದರು.ಶಾಲೆಗಳಲ್ಲಿ ಮಕ್ಕಳು ಏಳು ದಿನ ಮೇಲ್ಪಟ್ಟು ಗೈರಾಗಿದ್ದರೆ ಶಾಲಾ ಮುಖ್ಯೋಪಾಧ್ಯಯರು, ಶಿಕ್ಷಕರು ಮನೆ ಭೇಟಿ ನಡೆಸಿ, ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ಕರೆತರುವ ಪ್ರಯತ್ನ ಮಾಡಬೇಕು ಎಂದು ಸೂಚಿಸಿದರು.ಈಗಾಗಲೇ ಜಾರಿಯಲ್ಲಿರುವ ಜಿಲ್ಲಾ ಹಾಗೂ ತಾಲೂಕು ಮಟ್ಟದ ಟಾಸ್ಕ್ ಫೋರ್ಸ್ ಸಮಿತಿಗಳು ಹೆಚ್ಚಿನ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು. ಕಾಲಕಾಲಕ್ಕೆ ಕಾರ್ಯಪಡೆ ಸಭೆಯನ್ನು ನಡೆಸಿ, ದಾಳಿಗಳನ್ನು ಕೈಗೊಂಡು ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕರನ್ನು ರಕ್ಷಿಸುವ ಕಾರ್ಯ ಚುರುಕಾಗಬೇಕು. ಕೆಲಸಕ್ಕೆ ನೇಮಿಸಿಕೊಂಡ ಮಾಲೀಕರ ವಿರುದ್ಧ ಕ್ರಮಕೈಗೊಳಬೇಕೆಂದು ತಿಳಿಸಿದರು.ಜಿಲ್ಲಾ ಬಾಲ ಕಾರ್ಮಿಕ ಯೋಜನೆಯ ಯೋಜನಾಧಿಕಾರಿ ಎ.ಮೌನೇಶ್ ಅವರು ಮಾತನಾಡಿ, ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಇಲ್ಲಿಯವರೆಗೆ 20 ಆಕಸ್ಮಿಕ ದಾಳಿಗಳನ್ನು ನಡೆಸಲಾಗಿದ್ದು, ಒಟ್ಟು 24 ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಮಕ್ಕಳನ್ನು ರಕ್ಷಣೆ ಮಾಡಿ, ದುಡಿಸಿಕೊಳ್ಳುತ್ತಿರುವ ಮಾಲೀಕರ ವಿರುದ್ಧ 19 ಪ್ರಕರಣ ದಾಖಲಿಸಲಾಗಿದೆ ಎಂದು ಸಭೆಗೆ ತಿಳಿಸಿದರು.
ಬಾಲ ಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಪದ್ದತಿ ನಿರ್ಮೂಲನೆಗೆ ಹಲವು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಗೋಡೆ ಬರಹ, ಕರಪತ್ರ, ಆಟೊ ಪ್ರಚಾರ, ಕಾನೂನು ಅರಿವು ನೆರವು ಕಾರ್ಯಕ್ರಮ, ತರಬೇತಿ ಕಾರ್ಯಾಗಾರ, ಜಾಗೃತಿ ಸಭೆ ನಡೆಸಬೇಕು ಎಂದು ತಿಳಿಸಿದರು.ಜಿಲ್ಲಾಧಿಕಾರಿಗಳು ಮಾತನಾಡಿ, ಬಾಲ ಕಾರ್ಮಿಕ ಪದ್ಧತಿಗೆ ಸಂಪೂರ್ಣ ಕಡಿವಾಣ ಹಾಕಲು ಪೋಷಕರಿಗೆ, ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕೆಲಸ ಮಾಡಬೇಕು. ನಗರ ವ್ಯಾಪ್ತಿಯಲ್ಲಿಯೂ ಮಕ್ಕಳನ್ನು ದುಡಿಸಿಕೊಳ್ಳುತ್ತಿರುವ ಮಳಿಗೆ, ಸಂಸ್ಥೆಗಳ ಮೇಲೆ ಅನೀರೀಕ್ಷಿತ ದಾಳಿ ನಡೆಸಬೇಕು ಎಂದು ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನವೀನ್ ಕುಮಾರ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.