ಮಹಾತ್ಮ ಗಾಂಧಿ ನರೇಗಾ ಯೋಜನೆ ಪ್ರಗತಿ ಪರೀಶೀಲನೆ ಗ್ರಾಮೀಣ ಜನರಿಗೆ ನಿರಂತರ ಉದ್ಯೋಗ ಒದಗಿಸಿ
ವಿಜಯಪುರ 12: ಗ್ರಾಮೀಣ ಜನರಿಗೆ ನರೇಗಾ ಯೋಜನೆಯಡಿ ನಿರಂತರವಾಗಿ ಉದ್ಯೋಗ ಒದಗಿಸುವಂತೆ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ಆಯುಕ್ತರಾದ ಪವನಕುಮಾರ ಮಾಲಪಾಟಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಗುರುವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜರುಗಿದ ಮಹಾತ್ಮ ಗಾಂಧಿ ನರೇಗಾ ಯೋಜನೆ ಪ್ರಗತಿ ಪರೀಶೀಲನಾ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಪ್ರಸ್ತುತ ಸಾಲಿನಲ್ಲಿ ವಿಜಯಪುರ ಜಿಲ್ಲೆಗೆ 42.00ಲಕ್ಷ ಮಾನವ ದಿನಗಳ ಗುರಿ ನಿಗದಿಪಡಿಸಲಾಗಿದೆ. ಈಗಾಗಲೇ 30.70ಲಕ್ಷಗಳ ಮಾನವ ದಿನಗಳ ಸೃಜನೆಯಾಗಿದೆ. ಪ್ರಸ್ತುತ ವರ್ಷ ಮುಕ್ತಾಯಗೊಳ್ಳಲು 4 ತಿಂಗಳು ಬಾಕಿ ಇದೆ. ಆದ್ದರಿಂದ ಬಾಕಿ ಉಳಿದ ಮಾನವ ದಿನಗಳನ್ನು ಗ್ರಾಮ ಪಂಚಾಯಿತಿ ಮತ್ತು ಅನುಷ್ಠಾನ ಇಲಾಖೆಗಳಾದ ಅರಣ್ಯ ಇಲಾಖೆ, ತೋಟಗಾರಿಕೆ ಇಲಾಖೆ, ರೇಷ್ಮೆ ಇಲಾಖೆ, ಕೃಷಿ ಇಲಾಖೆಗಳಿಂದ ನಿಗದಿಪಡಿಸಿದ ಕಾಲದಲ್ಲಿ ಮಾನವ ದಿನಗಳನ್ನು ಸೃಜನೆ ಮಾಡಬೇಕು. ಇದಕ್ಕೆ ಪೂರಕವಾಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಗಳಲ್ಲಿ ಸಾರ್ವಜನಿಕರಿಗೆ ನರೇಗಾ ಯೋಜನೆಯ ಕುರಿತು ಜಾಗೃತಿ ಮೂಡಿಸಬೇಕು. ನಿರಂತರವಾಗಿ ಕೂಲಿಕಾರರಿಗೆ ಉದ್ಯೋಗ ಒದಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕಾಮಗಾರಿಗಳನ್ನು ನಿಯಮಾನುಸಾರ ಅನುಷ್ಠಾನ ಮಾಡಬೇಕು. ಕಾಮಗಾರಿಗಳಲ್ಲಿ ಉತ್ತಮ ಗುಣಮಟ್ಟದ ಸಾಮಗ್ರಿಗಳನ್ನು ಬಳಕೆ ಮಾಡಬೇಕು ಮತ್ತು ನಿಗದಿಪಡಿಸಿದ ಅನುದಾನದಲ್ಲಿಯೇ ಕಾಮಗಾರಿಗಳನ್ನು ಅನುಷ್ಟಾನ ಮಾಡಬೇಕು. 2022-23ನೇ ಸಾಲಿನಿಂದ 2024-25ನೇ ಸಾಲಿನವರೆಗೆ ಪೂರ್ಣಗೊಳ್ಳದೇ ಇರುವ ಕಾಮಗಾರಿಗಳನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಬೇಕು. ನರೇಗಾ ಕಾಮಗಾರಿಗಳ ಪೂರ್ವ ಹಂತ, ಪ್ರಗತಿ ಹಂತ ಹಾಗೂ ಮುಕ್ತಾಯವಾದ ಕಾಮಗಾರಿಗಳನ್ನು ಜಿಯೋ ಟ್ಯಾಗ್ ಮಾಡುವ ಕಾರ್ಯವನ್ನು ಪ್ರಗತಿ ಸಾಧಿಸಬೇಕು. ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯ ಅನುಷ್ಠಾನದಲ್ಲಿ ಯಾವುದೇ ತಾಂತ್ರಿಕ ಸಮಸ್ಯೆಗಳಿದ್ದರೆ ಕೂಡಲೇ ಅವುಗಳನ್ನು ಸರಿಪಡಿಸಿ ಪ್ರಗತಿ ಸಾಧಿಸಲು ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.
2025-26ನೇ ಸಾಲಿನ ಮಹಾತ್ಮ ಗಾಂಧಿ ನರೇಗಾ ಯೋಜನೆಯ ಕ್ರಿಯಾ ಯೋಜನೆ ತಯಾರಿಸುವ ಪ್ರಕ್ರಿಯೆಯು ಕಳೆದ ಅಕ್ಟೋಬರ್ ತಿಂಗಳಲ್ಲಿ ಪ್ರಾರಂಭವಾಗಿದೆ. ಈ ಪ್ರಕ್ರಿಯೆಯಲ್ಲಿ ಫಲಾನುಭವಿಗಳಿಂದ ವೈಯಕ್ತಿಕ ಕಾಮಗಾರಿಗಳಿಗೆ ಬೇಡಿಕೆ ಸಂಗ್ರಹಿಸುವುದು, ಗ್ರಾಮ ಸಭೆಗಳನ್ನು ಏರಿ್ಡಸುವುದು ಪೂರ್ಣಗೊಂಡಿದೆ. ತದನಂತರ ಗ್ರಾಮ ಸಭಾ ನಡವಳಿಗಳನ್ನು ನರೇಗಾ ತಂತ್ರಾಂಶದಲ್ಲಿ ಅಳವಡಿಸುವ ಪ್ರಕ್ರಿಯೆ ಇನ್ನೂ ಬಾಕಿ ಉಳಿದಿರುವುದರಿಂದ ಕೂಡಲೇ ಸದರಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು. ಈ ಎಲ್ಲ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿ ಕ್ರಿಯಾ ಯೋಜನೆಯನ್ನು ತಯಾರಿಸಬೇಕು. ಮುಂದಿನ 15 ದಿನಗಳಲ್ಲಿ ತಾಲೂಕು ಪಂಚಾಯತಿ ಮಟ್ಟದಲ್ಲಿ ಎಲ್ಲ ಗ್ರಾಮ ಪಂಚಾಯಿತಿಗಳ ಕ್ರಿಯಾ ಯೋಜನೆಗಳು ಸಲ್ಲಿಕೆಯಾಗಬೇಕು ಎಂದು ಅವರು ಹೇಳಿದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ, ಉಪಕಾರ್ಯದರ್ಶಿವಿಜಯಕುಮಾರ ಆಜೂರ, ಜಿಲ್ಲೆಯ ಎಲ್ಲ ಅನುಷ್ಠಾನ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲೆಯ ಎಲ್ಲ ತಾಲೂಕುಗಳ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು (ಗ್ರಾ.ಉ), ಜಿಲ್ಲಾ ಪಂಚಾಯಿತಿಯ ಅಧಿಕಾರಿಗಳು, ಸಿಬ್ಬಂದಿಯವರು, ಅನುಷ್ಠಾನ ಇಲಾಖೆಗಳ ತಾಲೂಕು ಮಟ್ಟದ ಅಧಿಕಾರಿಗಳು, ತಾಂತ್ರಿಕ ಸಂಯೋಜಕರು, ತಾಂತ್ರಿಕ ಸಹಾಯಕರು, ತಾಲೂಕು ಎಂ.ಐ.ಎಸ್ ಸಂಯೋಜಕರು, ತಾಲೂಕು ಐಇಸಿ ಸಂಯೋಜಕರು, ಆಡಳಿತ ಸಹಾಯಕರು ಉಪಸ್ಥಿತರಿದ್ದರು.