ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಿಗೆ ಮೇಯರ್ ಚಾಲನೆ

Mayor inaugurates district-level government employees' sports meet and cultural competitions

ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಿಗೆ ಮೇಯರ್ ಚಾಲನೆ 

ಬಳ್ಳಾರಿ 05: ದೈನಂದಿನ ಜೀವನದಲ್ಲಿ ಪ್ರತಿಯೊಬ್ಬರ ದೈಹಿಕ ಮತ್ತು ಮಾನಸಿಕ ಸದೃಢ ಆರೋಗ್ಯಕ್ಕೆ ಕ್ರೀಡೆಗಳು ಅವಿಭಾಜ್ಯ ಅಂಗವಾಗಿದ್ದು, ಪ್ರತಿದಿನ ಸಮಯಕ್ಕನುಗುಣವಾಗಿ ಕ್ರೀಡೆ ಹಾಗೂ ವ್ಯಾಯಾಮಗಳಿಗೆ ಮೀಸಲಿಡಬೇಕು ಎಂದು ಬಳ್ಳಾರಿ ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಬಳ್ಳಾರಿ ಇವರ ಸಂಯುಕ್ತಾಶ್ರಯದಲ್ಲಿ ನಗರದ ಜಿಲ್ಲಾ ಕ್ರೀಡಾಂಗಣ ಮೈದಾನದಲ್ಲಿ ಶನಿವಾರ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಪ್ರಸ್ತುತದಲ್ಲಿ ಎಲ್ಲರೂ ಮೊಬೈಲ್ ಗೀಳಿಗೆ ದಾಸರಾಗುತ್ತಿದ್ದು, ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡುವಲ್ಲಿ ಸೋಮಾರಿತನ ಹಿಂಬಾಲಿಸುತ್ತಿದೆ. ಹಾಗಾಗಿ ಎಲ್ಲರೂ ತಪ್ಪದೇ ಸಿಗುವ ಸಮಯದಲ್ಲಿಯೇ ನಿಯಮಿತ ವ್ಯಾಯಾಮ ಮತ್ತು ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳೋಣ ಎಂದು ಕರೆ ನೀಡಿದರು. ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹ್ಯಾರೀಸ್ ಸುಮೈರ್ ಅವರು ಕ್ರೀಡಾ ಪ್ರತಿಜ್ಞಾ ವಿಧಿ ಬೋಧಿಸಿ ಮಾತನಾಡಿ, ದೈಹಿಕ ಹಾಗೂ ಮಾನಸಿಕ ನೆಮ್ಮದಿಗೆ  ಕ್ರೀಡಾಕೂಟಗಳು ಹೆಚ್ಚು ಸಹಕಾರಿಯಾಗಿದ್ದು, ಸರ್ಕಾರಿ ನೌಕರರು  ಉತ್ಸಾಹದಿಂದ ಭಾಗವಹಿಸಬೇಕು. ಕ್ರೀಡಾ ಚಟುವಟಿಕೆಗಳು ಕೇವಲ ಒಂದು ದಿನಕ್ಕೆ ಸೀಮಿತವಾಗದೇ ಹೆಚ್ಚಾಗಿ ಆಯೋಜಿಸಬೇಕು ಎಂದು ಹೇಳಿದರು. ಸರ್ಕಾರಿ ನೌಕರರು ದಿನನಿತ್ಯದ ಒತ್ತಡ ನಿವಾರಣೆಗೆ ತಮ್ಮ ಆರೋಗ್ಯಕ್ಕೆ  ಹೆಚ್ಚಿನ ಗಮನ ನೀಡಬೇಕು. ತಮ್ಮಿಷ್ಟದ ಕ್ರೀಡೆಗಳಲ್ಲಿ ದಿನಂಪ್ರತಿ ಭಾಗವಹಿಸುವ ಮೂಲಕ ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಲು ಸಲಹೆ ನೀಡಿದರು. ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್‌.ಎನ್ ಅವರು ಮಾತನಾಡಿ, ಹಣದಿಂದ ಆರೋಗ್ಯ ಸಿಗುವುದಿಲ್ಲ, ಬದಲಾಗಿ ದೈನಂದಿನ ಚಟುವಟಿಕೆಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಾಗ ಮಾತ್ರ ಆರೋಗ್ಯವನ್ನು ಸದೃಢವಾಗಿಟ್ಟುಕೊಳ್ಳಬಹುದು ಎಂದು ಕಿವಿಮಾತು ಹೇಳಿದರು. ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಕಾರ್ಯದರ್ಶಿ ಜಿ.ವೈ.ತಿಪ್ಪಾರೆಡ್ಡಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಸರ್ಕಾರಿ ನೌಕರರು ಇಲಾಖೆಗಳ ಪ್ರತಿದಿನದ ಕೆಲಸಗಳಿಂದ ಒತ್ತಡಮುಕ್ತರಾಗಿ ಕ್ರೀಡೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ತಮ್ಮಲ್ಲಿನ ಪ್ರತಿಭೆ ಹೊರಹಾಕಲು ಸೂಕ್ತ ವೇದಿಕೆಯಾಗಿದ್ದು, ಬಿರು-ಬಿಸಿಲಿನಲ್ಲಿಯೂ ಉತ್ಸುಕತೆಯಿಂದ ಭಾಗವಹಿಸುತ್ತಿರುವುದು ಕೀರ್ತಿದಾಯಕ ಸಂಗತಿಯಾಗಿದೆ ಎಂದು ಹೇಳಿದರು. ಸ್ಪರ್ಧಾ ಮನೋಭಾವನೆಯಿಂದ ಭಾಗವಹಿಸಿ ಜಿಲ್ಲಾ, ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಜಿಲ್ಲೆಯ ಕೀರ್ತಿ ಬೆಳಗಿಸಬೇಕು. 2024-25ನೇ ಸಾಲಿನ ಜಿಲ್ಲಾ ಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಏ.05 ರಿಂದ ಎರಡು ದಿನಗಳ ಕಾಲ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದ್ದು, ಎಲ್ಲರೂ ಭಾಗವಹಿಸಬಹುದು ಎಂದು ತಿಳಿಸಿದರು.