ಅರ್ಥಪೂರ್ಣ-ಅದ್ದೂರಿಯಾಗಿ ಸಾಂಸ್ಕೃತಿಕ ನಾಯಕ ಬಸವಣ್ಣನವರ ಜಯಂತಿ ಆಚರಣೆ: ಎಡಿಸಿ ಮಹಮ್ಮದ್ ಝುಬೇರ್
ಬಳ್ಳಾರಿ 15: ಸಮಾಜಕ್ಕೆ ತಮ್ಮ ಆಚಾರ-ವಿಚಾರ ಸಂದೇಶಗಳನ್ನು ತಲುಪಿಸಿದ ಬಸವಣ್ಣನವರ ಕೊಡುಗೆ ಅಪಾರ. ಅಂತಹ ಭಕ್ತಿ ಭಂಡಾರಿ ಬಸವಣ್ಣನವರ ಜಯಂತಿಯನ್ನು ಏ. 30 ರಂದು ಜಿಲ್ಲಾ ಕೇಂದ್ರದಲ್ಲಿ ಅರ್ಥಪೂರ್ಣವಾಗಿ ಅದ್ದೂರಿಯಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್ ಅವರು ಹೇಳಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಬಸವಣ್ಣನವರ ಜಯಂತಿ ಆಚರಣೆ ಸಂಬಂಧ ಮಂಗಳವಾರ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಹಾನುಭಾವರ ಜೀವನ ಮೌಲ್ಯಗಳನ್ನು ಸಮಾಜಕ್ಕೆ ನೀಡುವ ಸಲುವಾಗಿ ಜಯಂತಿಗಳನ್ನು ಆಚರಿಸಲಾಗುತ್ತಿದೆ. ಜಯಂತಿಗಳ ಆಚರಣೆಯ ಉದ್ದೇಶ ಮಹನೀಯರ ಆದರ್ಶಗಳನ್ನು ಪಾಲನೆ ಮಾಡುವುದು ಆಗಿದೆ. ಬಸವಣ್ಣನವರನ್ನು ರಾಜ್ಯ ಸರ್ಕಾರವು ಸಾಂಸ್ಕೃತಿಕ ನಾಯಕ ಎಂದು ಘೋಷಿಸಲಾಗಿದೆ ಎಂದು ತಿಳಿಸಿದರು.
ಏ.30 ರಂದು ಬೆಳಿಗ್ಗೆ 09 ಗಂಟೆಗೆ ನಗರದ ಹೆಚ್.ಆರ್.ಗವಿಯಪ್ಪ ವೃತ್ತದ ಬಳಿಯ ಬಸವೇಶ್ವರರ ಪ್ರತಿಮೆಗೆ ಮಾಲಾರೆ್ಣ ಹಾಗೂ ಪುಷ್ಪಾರ್ಚನೆ ಮಾಡಲಾಗುವುದು. ನಂತರ ಸಂಜೆ 07.30 ಗಂಟೆಗೆ ಬಸವಣ್ಣನವರ ಜಯಂತಿಯನ್ನು ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದಲ್ಲಿ ಆಚರಣೆ ಮಾಡಲಾಗುವುದು ಎಂದು ತಿಳಿಸಿದರು.
ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣ ಜಯಂತಿ ಅಂಗವಾಗಿ ಅಂದು ಸಂಜೆ 05 ಗಂಟೆಗೆ ನಗರದ ಡಾ.ರಾಜ್ ಕುಮಾರ್ ರಸ್ತೆಯ ಮುನಿಸಿಪಲ್ ಕಾಲೇಜು ಮೈದಾನದಿಂದ ಭವ್ಯ ಮೆರವಣಿಗೆ ನಡೆಯಲಿದೆ. ಮೆರವಣಿಗೆಯು ಗಡಿಗಿ ಚೆನ್ನಪ್ಪ ವೃತ್ತ-ಬೆಂಗಳೂರು ರಸ್ತೆ-ಬ್ರೂಸ್ಪೇಟೆ ಪೊಲೀಸ್ ಠಾಣೆ-ಜೈನ್ ಮಾರ್ಕೆಟ್ ರಸ್ತೆ-ಹೆಚ್.ಆರ್.ಗವಿಯಪ್ಪ ವೃತ್ತದ ಮೂಲಕ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರದ ವೇದಿಕೆ ಕಾರ್ಯಕ್ರಮದ ವರೆಗೆ ನಡೆಯಲಿದೆ ಎಂದರು.
ಹೆಚ್.ಆರ್.ಗವಿಯಪ್ಪ ವೃತ್ತದಲ್ಲಿನ ಬಸವೇಶ್ವರರ ಪ್ರತಿಮೆಯ ಸ್ಥಳದ ಆವರಣದಲ್ಲಿ ಸ್ವಚ್ಚತೆ ಹಾಗೂ ಜಯಂತಿ ನಡೆಯುವ ಸ್ಥಳದಲ್ಲಿ ಆಸನದ ಸ್ವಚ್ಛತೆ, ಕುಡಿಯುವ ನೀರಿನ ವ್ಯವಸ್ಥೆಯನ್ನು ಮಹಾನಗರ ಪಾಲಿಕೆಯ ವತಿಯಿಂದ ಮಾಡಬೇಕು ಎಂದು ಸೂಚನೆ ನೀಡಿದರು.
ಜಯಂತಿ ಆಚರಣೆಗೆ ಶಿಷ್ಠಾಚಾರದಂತೆ ಆಮಂತ್ರಣ ಪತ್ರಿಕೆ ಮುದ್ರಿಸಿ ಜನಪ್ರತಿನಿಧಿಗಳಿಗೆ ಮುಖಂಡರಿಗೆ ಆಹ್ವಾನ ನೀಡಲಾಗುವುದು. ರಂಗಮಂದಿರದಲ್ಲಿ ವಚನ ಗಾಯನ ಏರಿ್ಡಸಲಾಗುವುದು. ಜಯಂತಿ ಮೆರವಣಿಗೆಗಳಲ್ಲಿ ಜಾನಪದ ಕಲಾತಂಡಗಳನ್ನು ನಿಯೋಜಿಸಲಾಗುವುದು ಎಂದು ಸಭೆಗೆ ತಿಳಿಸಿದರು.
ಜಯಂತಿಯಲ್ಲಿ ವಿಶೇಷ ಉಪನ್ಯಾಸ ನೀಡಲು ಸಂಪನ್ಮೂಲ ವ್ಯಕ್ತಿಯೊಬ್ಬರನ್ನು ನಿಯೋಜಿಸಲಾಗುವುದು. ಸಮುದಾಯದಲ್ಲಿ ವಿಶೇಷ ಸಾಧನೆಗೈದವರನ್ನು ಸನ್ಮಾನಿಸಲು ಸಾಧಕರ ಹೆಸರು ನೀಡಲಾಗುವುದು ಎಂದು ಸಮುದಾಯದ ಮುಖಂಡರು ಸಭೆಗೆ ಮಾಹಿತಿ ನೀಡಿದರು.
ಇದೇ ಸಂದರ್ಭದಲ್ಲಿ ಸಮುದಾಯದ ಮುಖಂಡರುಗಳು ತಮ್ಮ ಸಲಹೆ-ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ, ಮಹಾನಗರ ಪಾಲಿಕೆಯ ರೆಹಮಾನ್ ಸೇರಿದಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಮುದಾಯದ ಮುಖಂಡರು ಹಾಗೂ ಮತ್ತೀತರರು ಉಪಸ್ಥಿತರಿದ್ದರು.