ರಾಷ್ಟ್ರೀಯ ಮತದಾರರ ದಿನಾಚರಣೆ

National Voter's Day

ರಾಷ್ಟ್ರೀಯ ಮತದಾರರ ದಿನಾಚರಣೆ 

ವಿಜಯಪುರ 25: ಪ್ರಥಮ ಬಾರಿಗೆ ಮತದಾನ ಮಾಡುವ ಯುವ ಜನತೆ ಆಮಿಷಕ್ಕೆ ಒಳಗಾಗದೇ ಮತದಾನ ಮಾಡಬೇಕು ಎಂದು ಪ್ರಧಾನ ಸತ್ರ ನ್ಯಾಯಾಧೀಶ ಶಿವಾಜಿ ನಲವಡೆ ಹೇಳಿದರು. 

ನಗರದ ಜಿಲ್ಲಾ ಪಂಚಾಯತ ಸಭಾ ಭವನದಲ್ಲಿ ಶನಿವಾರ ರಾಷ್ಟ್ರೀಯ ಮತದಾನ ದಿನಾಚರಣೆ ಅಂಗವಾಗಿ ಆಯೋಜಿಸಿದ ಕಾರ್ಯಕ್ರಮದ ಉದ್ಘಾಟಿಸಿ ಮಾತನಾಡಿದ ಅವರು ರಾಜಕೀಯ ವ್ಯವಸ್ಥೆ ಕೆಟ್ಟಿದೆ ಎಂದು ದುರುತ್ತಾ ಕೂಡುವ ಬದಲು ಯೋಗ್ಯರನ್ನು ಆಯ್ಕೆ ಮಾಡುವ ಕಾರ್ಯ ಯುವ ಮತದಾನರಿಂದ ನಡೆಯಬೇಕು ಎಂದು ಅವರು ಯುವ ಜನತೆಗೆ ಕರೆಕೊಟ್ಟರು. ಚುನಾವಣೆಯಲ್ಲಿ ಹೆಚ್ಚು ಸಂಖ್ಯೆಯಲ್ಲಿ ಮತದಾನರು ಭಾಗಿಯಾಗುವುದರಿಂದ ಜನಪರ ಸರ್ಕಾರ ಆಡಳಿತಕ್ಕೆ ಬರಲು ಸಾಧ್ಯ ಎಂದು ಅವರು ತಿಳಿಸಿದರು. 

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಟಿ. ಭೂಬಾಲನ ಮಾತನಾಡಿ ಚುನಾವಣಾ ಆಯೋಗ ಕಳೆದ 15 ವರ್ಷಗಳಿಂದ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನಾಗಿ ಪ್ರತಿ ಜನವರಿ 25 ನ್ನು ಆಚರಿಸುತ್ತ ಬಂದಿದ್ದು ಮತದಾರರಲ್ಲಿ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಎಲ್ಲಾ ಅಧಿಕಾರಿಗಳು ಅದರಲ್ಲಿಯೂ ಬೂತ್ ಮಟ್ಟದ ಅಧಿಕಾರಿಗಳು, ಮಾಸ್ಟರ್ ಟ್ರೈನರ್ಗಳು , ಸ್ವೀಪ್ ಚಟುವಟಿಕೆಗಳಲ್ಲಿ ಭಾಗವಹಿಸಿದ ಎಲ್ಲಾ ಅಧಿಕಾರಿಗಳಿಗೆ ನಮ್ಮ ಜಿಲ್ಲೆಯಲ್ಲಿ ಮತದಾನ ಪ್ರಮಾಣ ಹೆಚ್ಚಲು ಕಾರಣವಾದ ಕಾರಣ ಅವರಿಗೆ ಅಭಿನಂದನೆಯನ್ನು ಸಲ್ಲಿಸುತ್ತೇನೆ ಅದೇ ರೀತಿ ಮುಂದೆ ನಡೆಯಲಿರುವ ಎಲ್ಲಾ ಚುನಾವಣೆಗಳಲ್ಲಿಯೂ ಉತ್ತಮವಾದಂತಹ ಮತದಾನದ ಪ್ರಮಾಣ ಹೆಚ್ಚಿಸುವ ಕಾರ್ಯಕ್ಕೆ ಎಲ್ಲರೂ ಪ್ರಯತ್ನಿಸೋಣ ಎಲ್ಲಾ ಚುನಾವಣೆಗಳಲ್ಲಿಯೂ ಉತ್ತಮ ಪ್ರಮಾಣದ ಮತದಾನ ನಡೆಯುವ ಹಾಗೇ ಶ್ರಮಿಸೋಣ ಎಂದು ಅವರು ಹೇಳಿದರು.  

ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದ ಆರ್‌.ಸಿ. ಹಿರೇಮಠ ಮಾತನಾಡಿ ಒಂದೇ ಒಂದು ಮತ ಇಡೀ ಚುನಾವಣೆಯ ಫಲಿತಾಂಶವನ್ನೇ ಬದಲಾವಣೆ ಮಾಡಿದ ಅನೇಕ ಉದಾಹರಣೆಗಳಿವೆ. ಹಾಗಾಗಿ ಎಲ್ಲರೂ ಮತದಾನ ಪ್ರಕ್ರಿಯೆ ಯಲ್ಲಿ ಭಾಗಿಯಾಗಬೇಕೆಂದು ಹೇಳಿದರು. 

ಕಳೆದ ಲೋಕಸಭಾ ಚುನಾವಣೆಯಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿ; ಮತದಾನ ಪ್ರಮಾಣ ಹೆಚ್ಚಲು ಕಾರಣವಾದ ಎಲ್ಲಾ ಅಧಿಕಾರಿಗಳಿಗೆ ಜಿಲ್ಲಾಡಳಿತದಿಂದ ಅಭಿನಂದನೆ ಸಲ್ಲಿಸಲಾಯಿತು. 

ಕಾರ್ಯಕ್ರಮದಲ್ಲಿ ಪ್ರಬಂಧ, ರಂಗೋಲಿ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಮಾಣ ಪತ್ರ ಬಹುಮಾನ ವಿತರಿಸಲಾಯಿತು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ. ಅರವಿಂದ ಹಂಗರಗಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ರಿಷಿ ಆನಂದ, ಸೈನಿಕ ಶಾಲೆಯ ಪ್ರಾಂಶುಪಾಲರಾದ ಪ್ರತಿಭಾ ಭೀಷ್ಟ, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ, ಜಿಲ್ಲಾ ಪಂಚಾಯತ ವಿವಿಧ ಶಾಖೆಯ ಅಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.