ನವೆಂಬರ್ 1 ರಂದು ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ, ಅದ್ದೂರಿಯಾಗಿ ಆಚರಿಸಲು ಅಗತ್ಯ ಸಿದ್ಧತೆ

ನವೆಂಬರ್ 1 ರಂದು ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ, ಅದ್ದೂರಿಯಾಗಿ ಆಚರಿಸಲು ಅಗತ್ಯ ಸಿದ್ಧತೆ Necessary preparations to celebrate Rajyotsava on November 1st in a meaningful and grand manner

ನವೆಂಬರ್ 1 ರಂದು ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ, ಅದ್ದೂರಿಯಾಗಿ ಆಚರಿಸಲು ಅಗತ್ಯ ಸಿದ್ಧತೆ

ಧಾರವಾಡ   17: ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಮತ್ತು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದ್ದು, ಇಲಾಖೆ ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಸೂಚಿಸಿದರು. ಅವರು ನಿನ್ನೆ (ಅ.16) ಸಂಜೆ ಜಿಲ್ಲಾಧಿಕಾರಿಗಳ ಕಚೇರಿ ನೂತನ ಸಭಾಂಗಣದಲ್ಲಿ ಜರುಗಿದ ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯೋತ್ಸವದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ, ಮಾತನಾಡಿದರು. ಕನ್ನಡ ನಾಡು, ನುಡಿಯ ಬಗ್ಗೆ ಜಾಗೃತಿ ಮೂಡಿಸುವಲ್ಲಿ ರಾಜ್ಯೋತ್ಸವ ಕಾರ್ಯಕ್ರಮಗಳು ರೂಪಗೊಳ್ಳಬೇಕು. ಕರ್ನಾಟಕದ ಏಕೀಕರಣದಲ್ಲಿ ಉತ್ತರ ಕರ್ನಾಟಕದ ಅದರಲ್ಲೂ ವಿಶೇಷವಾಗಿ ಧಾರವಾಡ ಜಿಲ್ಲೆಯ ಪಾತ್ರ ಬಹು ಮುಖ್ಯವಾಗಿದೆ. ಕನ್ನಡ ನಾಡಿನ ಕಲ್ಪನೆ ಕಟ್ಟಿದ ಆಲೂರು ವೆಂಕಟರಾಯರು ಧಾರವಾಡದವರು. ಅಖಂಡ ಧಾರವಾಡ ಜಿಲ್ಲೆಯ ಇಂತಹ ಅನೇಕ ಮಹನೀಯರ ಕೊಡುಗೆ ಕರ್ನಾಟಕ ಏಕೀಕರಣದಲ್ಲಿ ಬಹು ಮುಖ್ಯವಾಗಿದೆ. ಆದ್ದರಿಂದ ನಾವು ನಮ್ಮ ಹಿರಿಯರ, ಹೋರಾಟಗಾರರ ಕೊಡುಗೆಯನ್ನು ಸ್ಮರಿಸುವ ನಿಟ್ಟಿನಲ್ಲಿ ವಿವಿಧ ಪ್ರಕಾರದ ಕಾರ್ಯಕ್ರಮಗಳನ್ನು ರೂಪಿಸುವ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು. ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವು, ಜಿಲ್ಲೆಯಲ್ಲಿ ಜರುಗಿರುವ ಕನ್ನಡ ಹೋರಾಟ, ನಾಡಿನ ಏಕೀಕರಣ ಚಳುವಳಿಗಳ ಹಿನ್ನಲೆಯಲ್ಲಿ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಇತಿಹಾಸ ತಿಳಿಸುವ ಕೆಲಸವಾಗಬೇಕು. ಈ ನಿಟ್ಟಿನಲ್ಲಿ ಸಾಂಸ್ಕೃತಿಕವಾಗಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಶಾಲಾ ಶಿಕ್ಷಣ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತವಾಗಿ ಸಾಂಸ್ಕೃತಿಕ  ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದರು. 

ಪ್ರತಿ ವರ್ಷದಂತೆ ರಾಜ್ಯೋತ್ಸವವನ್ನು ಆರ್‌.ಎನ್‌.ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗುತ್ತದೆ. ಎಲ್ಲ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ಶಿಕ್ಷಣ ಇಲಾಖೆಯ ಅಧಿಕಾರಿಗಳು ಶಾಲಾ ಮಕ್ಕಳನ್ನು ಮತ್ತು ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ವಸತಿ ನಿಲಯಗಳ ವಿದ್ಯಾರ್ಥಿಗಳೊಂದಿಗೆ ಕಾರ್ಯಕ್ರಮಕ್ಕೆ ಹಾಜರಾಗಬೇಕೆಂದು ಅವರು ಸೂಚಿಸಿದರು. ಪೊಲೀಸ್ ಪಡೆ, ಜಿಲ್ಲಾ ಮೀಸಲು ಪೊಲೀಸ್ ಪಡೆ, ಜಿಲ್ಲಾ ಗೃಹರಕ್ಷಕ ದಳ, ಅರಣ್ಯ ಇಲಾಖೆ, ಅಗ್ನಿಶಾಮಕ ದಳ, ಎನ್‌.ಸಿ.ಸಿ. ವಿದ್ಯಾರ್ಥಿಗಳು, ಭಾರತ ಸೇವಾದಳ ಮತ್ತು ಸ್ಕೌಟ್ಸ್‌ ಮತ್ತು ಗೈಡ್ಸ್‌ ವಿದ್ಯಾರ್ಥಿಗಳು ಕವಾಯತ್ ದಲ್ಲಿ ಪಾಲ್ಗೊಂಡು ಉತ್ತಮ ರೀತಿಯಲ್ಲಿ ಪ್ರದರ್ಶನ ನೀಡುವಂತೆ ಪೊಲೀಸ್ ಇಲಾಖೆ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅವರು ಹೇಳಿದರು. 

 ಜಿಲ್ಲಾ ಕ್ರೀಡಾಂಗಣದಲ್ಲಿ ಕ್ರೀಡಾ ಇಲಾಖೆಯು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ  ಅನುಕೂಲವಾಗುವಂತೆ ಗ್ಯಾಲರಿ ವ್ಯವಸ್ಥೆ ಮಾಡಬೇಕು. ಮಹಾನಗರ ಪಾಲಿಕೆಯಿಂದ ಶೌಚಾಲಯಗಳ ವ್ಯವಸ್ಥೆಯನ್ನು ಮಾಡಬೇಕು. ರಾಜ್ಯೋತ್ಸವದ ಮುನ್ನ ದಿನ  ಪ್ರಮುಖ ಸರ್ಕಾರಿ ಕಟ್ಟಡಗಳನ್ನು ದೀಪಾಲಂಕರ ಮಾಡಬೇಕು. ಲೋಕೋಪಯೋಗಿ ಇಲಾಖೆಯಿಂದ ಸುಂದರವಾದ ವೇದಿಕೆಯನ್ನು ಸಿದ್ಧಗೊಳಿಸಬೇಕು ಎಂದು ಅವರು ಹೇಳಿದರು. ಎಲ್ಲ ಇಲಾಖೆಗಳು ತಮ್ಮ ಅದೀನದಲ್ಲಿ ಅನುಷ್ಠಾನಗೊಂಡಿರುವ ಪ್ರಮುಖ ಕಾರ್ಯಕ್ರಮ ಮತ್ತು ಯೋಜನೆಗಳ ಕುರಿತು ಸಂಕ್ಷಿಪ್ತ ವರದಿಯನ್ನು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಗಳಿಗೆ ಸಲ್ಲಿಸಬೇಕು. ಅವರು ಸಚಿವರ ರಾಜ್ಯೋತ್ಸವದ ಸಂದೇಶವನ್ನು ರೂಪಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು 

ಕಾರ್ಯಕ್ರಮ ಸ್ಥಳದಲ್ಲಿ ಅಗತ್ಯ ಕುಡಿಯುವ ನೀರು, ಶೌಚಾಲಯ ಮತ್ತು ವಿದ್ಯಾರ್ಥಿಗಳಿಗೆ  ಅಲ್ಫೋಪಹಾರ ವ್ಯವಸ್ಥೆಯನ್ನು ಮಾಡಬೇಕು. ಆರೋಗ್ಯ ಇಲಾಖೆಯಿಂದ ಸಿಬ್ಬಂದಿಗಳನ್ನು ನೇಮಿಸಬೇಕು. ಯಾವುದೇ ರೀತಿಯ ತೊಂದರೆ ಆಗದಂತೆ ವ್ಯವಸ್ಥಿತವಾಗಿ ಕಾರ್ಯಕ್ರಮವನ್ನು ರೂಪಿಸಬೇಕೆಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ಅವರು ನಿರ್ದೇಶಿಸಿದರು. ಇಂದಿ ಸಭೆಗೆ ಕೆಲವು ಇಲಾಖೆ ಅಧಿಕಾರಿಗಳು ಪೂರ್ವಾನುಮತಿ ಪಡೆಯದೆ ಗೈರಾಗಿದ್ದಾರೆ ಮತ್ತು ಕೆಲವು ಇಲಾಖೆ ಅಧಿಕಾರಿಗಳು ತಮ್ಮ ಬದಲಿಗೆ ಪ್ರತಿನಿಧಿಗಳನ್ನು ಕಳುಹಿಸಿದ್ದಾರೆ. ಅವರಿಗೆ ಎಚ್ಚರಿಕೆ ನೋಟಿಸ್ ನೀಡಲು ಜಿಲ್ಲಾಧಿಕಾರಿಗಳು ಸೂಚಿಸಿದರು.  ಸಭೆಯಲ್ಲಿ ಸಹಾಯಕ ಪೊಲೀಸ್ ಆಯುಕ್ತ ಪ್ರಶಾಂತ್ ಸಿದ್ದನಗೌಡ, ಧಾರವಾಡ ತಹಸಿಲ್ದಾರ ಡಾ. ಡಿ .ಎಚ್ ಹೂಗಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಡಾ. ಎಚ್‌.ಎಚ್ .ಕುಕನೂರ, ಜಿಲ್ಲಾ ಅರೋಗ್ಯಾಧಿಕಾರಿ ಡಾ.ಎಸ್‌.ಎಂ.ಹೊನಕೇರಿ,   ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.