ಶುದ್ಧ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಧಿಕಾರಿಗಳು ಕ್ರಮವಹಿಸಿ: ಸಚಿವ ಲಾಡ್
ಧಾರವಾಡ ಏ.7: ಜಿಲ್ಲೆಯಲ್ಲಿ ಬೇಸಿಗೆ ಸಮಯದಲ್ಲಿ ಶುದ್ಧ ಕುಡಿಯುವ ನೀರಿನ ಸಮಸ್ಯೆ ಆಗಬಾರದು. ಜನರಿಗೆ ಶುದ್ಧ ಕುಡಿಯುವ ನೀರನ್ನು ಸತತವಾಗಿ ಪೂರೈಕೆ ಮಾಡಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ನೀರಿನ ಸಮಸ್ಯೆಯಾಗದಂತೆ ಕ್ರಮವಹಿಸಬೇಕು ಎಂದು ಕಾರ್ಮಿಕ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಅವರು ಹೇಳಿದರು. ಇಂದು ಬೆಳಿಗ್ಗೆ ಅವರು ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿ ನೂತನ ಸಭಾಂಗಣದಲ್ಲಿ 2025-26 ನೇ ಸಾಲಿನ ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರು, ಅಕಾಲಿಕ ಮಳೆಯಿಂದ ಆಗುವ ಹಾನಿಯ ಬಗ್ಗೆ ಮುನ್ನೆಚ್ಚರಿಕೆ ಕೈಗೊಳ್ಳುವ ಕುರಿತು ಅಧಿಕಾರಿಗಳ ಸಭೆ ಜರುಗಿಸಿ, ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಳ್ನಾವರ, ಧಾರವಾಡ, ಹುಬ್ಬಳ್ಳಿ, ಕುಂದಗೋಳ, ಕಲಘಟಗಿ ಸೇರಿದಂತೆ ವಿವಿಧ ತಾಲೂಕಿನ ಹಳ್ಳಿಗಳಲ್ಲಿ ಕುಡಿಯುವ ನೀರಿನ ಅಭಾವ ಆಗುವ ಸಂಭವವಿದೆ. ನವಲಗುಂದ ಹಾಗೂ ಅಣ್ಣಿಗೇರಿ ತಾಲೂಕಿನಲ್ಲಿ ಯಾವುದೇ ಹಳ್ಳಿಗಳಲ್ಲಿ ನೀರಿನ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೇ ಕುಡಿಯುವ ನೀರಿನ ಕೆರೆಗಳನ್ನು ತುಂಬಿಸಿಕೊಳ್ಳಲಾಗಿದ್ದು, ಮುಂದಿನ 30 ವಾರಗಳವರೆಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದರು. ಏಪ್ರೀಲ್ 20 ರೊಳಗಾಗಿ ಕುಡಿಯುವ ನೀರಿನ ಸಮಸ್ಯೆಗಳಿರುವ ಹಳ್ಳಿಗಳಿಗೆ ತೆರಳಿ ಸಮಸ್ಯೆ ಬಗ್ಗೆ ಮಾಹಿತಿ ಸಂಗ್ರಹಿಸಬೇಕು. ನಂತರ ಕುಡಿಯುವ ನೀರಿನ ಅಭಾವ ಬಗ್ಗೆ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು. ಶಾಸಕರ ಜೊತೆ ಅಧಿಕಾರಿಗಳು ಕುಡಿಯುವ ನೀರಿನ ಸಮಸ್ಯೆ ಕುರಿತು ಸಭೆ ನಡೆಸಬೇಕಿದೆ. ಹುಬ್ಬಳ್ಳಿ ನಗರಕ್ಕೆ ನೀರಸಾಗರ ಜಲಾಶಯದಿಂದ ಕುಡಿಯುವ ನೀರು ಒದಗಿಸಲಾಗುತ್ತಿದೆ. ಕುಡಿಯುವ ನೀರು ಸರಬರಾಜು ಮಾಡುವ ಯೋಜನೆಗಳ ಅನುಷ್ಠಾನಕ್ಕೆ ಪಾಲಿಕೆ ಮುಂದಾಗಬೇಕು. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯ 82 ವಾರ್ಡಗಳಲ್ಲಿ ಸುಮಾರು 29 ವಾರ್ಡ್‌ಗಳಲ್ಲಿ ನೀರಿನ ಸಮಸ್ಯೆಯಾಗುತ್ತಿದೆ. 24*7 ನಿರಂತರ ನೀರು ಸರಬರಾಜು ಮಾಡುವ ವಾರ್ಡ್‌ಗಳಲ್ಲಿ ಯಾವುದೇ ರೀತಿಯ ತೊಂದರೆಯಾಗುತ್ತಿಲ್ಲ. ಕುಡಿಯುವ ನೀರಿನ ಸಮಸ್ಯೆ ಉಲ್ಬಣವಾಗುವ ವಾರ್ಡ್‌ಗಳಿಗೆ ಒಂದು ಸಮಿತಿ ರಚಿಸಿ, ಮಾಹಿತಿ ಸಂಗ್ರಹಿಸಬೇಕಾಗಿದೆ. ಮುಂದಿನ 3 ದಿನಗಳಲ್ಲಿ ವರದಿ ಸಲ್ಲಿಸಬೇಕು ಎಂದು ಪಾಲಿಕೆಯ ಆಯುಕ್ತರಿಗೆ ಸಚಿವರು ನಿರ್ದೇಶನ ನೀಡಿದರು. ಮಳೆಗಾಲದ ಸಂದರ್ಭದಲ್ಲಿ ಅರಣ್ಯ ಇಲಾಖೆ, ಹೆಸ್ಕಾಂ ಹಾಗೂ ತಹಶೀಲ್ದಾರರು ಹೆಚ್ಚಾಗಿ ತಮ್ಮ ಕಾರ್ಯಸ್ಥಾನಗಳಲ್ಲಿ ಇರಬೇಕು. ಜನರಿಂದ ದೂರುಗಳು ಬಂದ ತಕ್ಷಣ ಸ್ಪಂದಿಸಬೇಕಾಗುತ್ತದೆ. ಕಲಘಟಗಿ ತಾಲೂಕಿನಾದ್ಯಂತ ಕಳೆದ ಮೂರು ತಿಂಗಳಲ್ಲಿ 623 ಟ್ರಾಸ್ಸಫಾರ್ಮರ್‌ಗಳು ಹಾಳಾಗಿವೆ. ಹೀಗಾಗಿ ಹೆಚ್ಚಿನ ಗಮನ ಹರಿಸಬೇಕಾಗಿದೆ ಎಂದು ಸಚಿವರು ಅಧಿಕಾರಿಗಳಿಗೆ ತಿಳಿಸಿದರು. ಶಾಸಕರಾದ ಎನ್.ಎಚ್.ಕೋನರಡ್ಡಿ ಮಾತನಾಡಿ, ನವಲಗುಂದ ತಾಲ್ಲೂಕಿನಲ್ಲಿ ಯಾವುದೇ ರೀತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಇಲ್ಲ ಎಂದು ವರದಿ ಮಾಡಲಾಗಿದೆ. ಆದರೆ ಯಮನೂರು, ಕೊಂಗವಾಡ ಹಳ್ಳಿಗಳಿಗೆ ಸ್ವತಃ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಭೇಟಿ ನೀಡಿ, ಪರೀಶೀಲನೆ ನಡೆಸಿದ್ದಾರೆ. ಕುಡಿಯುವ ನೀರಿನ ಬಗ್ಗೆ ಅಧಿಕಾರಿಗಳ ಸಭೆ ಕರೆಯುತ್ತೇನೆ. ಜಿಲ್ಲೆಯಲ್ಲಿ ಬಿಸಿಲಿನ ತಾಪ 48 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಹೀಗಾಗಿ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸಲು ಅಧಿಕಾರಿಗಳು ಮುಂದಾಗಬೇಕಿದೆ. ಇದರಲ್ಲಿ ಯಾವುದೇ ರೀತಿಯಲ್ಲಿ ಅಲಕ್ಷ್ಯ ಹಾಗೂ ಬೇಜವಾಬ್ದಾರಿಯಾಗಿ ಕಾರ್ಯನಿರ್ವಹಣೆ ಮಾಡಬಾರದು. ಜಲಜೀವನ ಮಿಷನ್ ಕಾಮಗಾರಿಗಳಲ್ಲಿ ಸರಿಯಾಗಿ ನೀರು ಪೂರೈಕೆಯಾಗುತ್ತಿಲ್ಲ ಎಂಬ ದೂರುಗಳು ಬರುತ್ತಿವೆ. ಅವುಗಳನ್ನು ದುರಸ್ತಿ ಪಡಿಸಿ, ಕುಡಿಯುವ ನೀರು ಒದಗಿಸಬೇಕು. ವಿದ್ಯುತ್ ತಂತಿಗಳು ಕೆಳಮಟ್ಟದಲ್ಲಿ ಇರುವುದನ್ನು ಸರಿಪಡಿಸಬೇಕು. ಹಳ್ಳಿಗಳಲ್ಲಿ ಕೊರೆಸಿದ ಬೋರವೆಲ್‌ಗಳಿಗೆ ಚೌಕಟ್ಟು ನಿರ್ಮಾಣ ಮಾಡಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು, ಮಾತನಾಡಿ, ಜನರಿಗೆ ಕುಡಿಯುವ ನೀರು ಒದಗಿಸುವುದು ನಮ್ಮ ಕರ್ತವ್ಯವಾಗಿದೆ. ಅದನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕು. ಶುದ್ಧ ಕುಡಿಯುವ ನೀರು ಒದಗಿಸುವುದು ನಮ್ಮ ಜವಾಬ್ದಾರಿ ಆಗಿದೆ. ಮಳೆಗಾಲದಲ್ಲಿ ಕಾಲರಾ, ಮಲೆರೀಯಾ ರೋಗ ಹರಡುವ ಸಾಧ್ಯತೆ ಹೆಚ್ಚಾಗಿರುತ್ತದೆ. ಹೀಗಾಗಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಾಗುತ್ತದೆ. ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ. ಕಲಘಟಗಿ, ನವಲಗುಂದ ತಾಲೂಕಿನಲ್ಲಿ ಕುಡಿಯುವ ನೀರಿನ ಕಾಮಗಾರಿಗಳು ನಡೆದಿವೆ. ಮುಂದಿನ ದಿನಗಳಲ್ಲಿ ದಿನದ 24 ಗಂಟೆಗಳ ಕಾಲ ನಿರಂತರ ನೀರು ಸರಬರಾಜು ಮಾಡಲಾಗುವುದು. ಹುಬ್ಬಳ್ಳಿ ಧಾರವಾಡ ನಗರದಲ್ಲಿ ಒಟ್ಟಾರೆಯಾಗಿ ನೀರು ಸರಬರಾಜು ಮಾಡುವ ಬಗ್ಗೆ ಮಾಹಿತಿ ಪಡೆಯಲಾಗುವುದು. ಜಿಲ್ಲೆಯ 395 ಹಳ್ಳಿಗಳಲ್ಲಿ ಸುಮಾರು 90 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಬಹುದು ಎಂದು ಅಂದಾಜಿಸಲಾಗಿದೆ. ಈಗಾಗಲೇ 160 ಕಡೆಗಳಲ್ಲಿ ಬೋರವೆಲ್ ಕೊರೆಸಲು ಸ್ಥಳಗಳನ್ನು ಗುರುತಿಸಲಾಗಿದೆ. ಜಿಲ್ಲಾ ಪಂಚಾಯತ ವತಿಯಿಂದ ಬೋರೆವೆಲ್ ಕೊರೆಸಲು ತೀರ್ಮಾನಿಸಲಾಗಿದೆ. ಕುಡಿಯುವ ನೀರಿನ ಕುರಿತು ಸಹಾಯವಾಣಿ ಸಹ ತೆರೆಯಲಾಗಿದೆ. ಸಾರ್ವಜನಿಕರಿಂದ ದೂರುಗಳು ಸಹ ಬರುತ್ತಿವೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದರು. ವಿದ್ಯುತ್ ಸಮಸ್ಯೆಯಿಂದ ನಿರಂತರ ನೀರು ಸರಬರಾಜು ಮಾಡಲು ತೊಂದರೆ ಉಂಟಾಗುತ್ತಿದೆ. 7-8 ದಿನಗಳ ಕಾಲ ನೀರು ಸರಬರಾಜು ಮಾಡಲು ಸಮಸ್ಯೆ ಉಲ್ಬಣವಾಗಿದೆ. ಮಳೆಯಿಂದ ಜಾನುವಾರು ಸಾವು ಮತ್ತು ಗುಡಿಸಲುಗಳಿಗೆ ಹಾನಿಯಾಗಿದ್ದು, ಪರಿಹಾರ ಧನವನ್ನು ವಿತರಣೆ ಮಾಡಲಾಗಿದೆ ಎಂದು ಅವರು ಸಭೆಗೆ ತಿಳಿಸಿದರು. ಜಾತ್ರೆಗಳು ಇರುವ ಹಳ್ಳಿಗಳಲ್ಲಿ ನೀರಿನ ಅಭಾವ ಆಗದಂತೆ ಕ್ರಮವಹಿಸಿ: ಜಿಲ್ಲೆಯ ವಿವಿಧ ಹಳ್ಳಿಗಳಲ್ಲಿ ಜಾತ್ರೆಗಳು ನಡೆಯುತ್ತಿವೆ. ಜಾತ್ರೆಗಳು ಇದ್ದಲ್ಲಿ ಕುಡಿಯುವ ನೀರಿನ ಬಗ್ಗೆ ಹೆಚ್ಚಿನ ಒತ್ತು ನೀಡಬೇಕಾಗುತ್ತದೆ. ಯಾವುದೇ ರೀತಿಯಲ್ಲಿ ಕುಡಿಯುವ ನೀರಿನ ಅಭಾವ ಆಗದಂತೆ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು. ತಾಲೂಕು ಮಟ್ಟದ ಅಧಿಕಾರಿಗಳ ತಂಡ ರಚಿಸಿ: ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗುವ ಸಂಭವನೀಯತೆ ಹೆಚ್ಚಾಗಿರುತ್ತದೆ. ಹೀಗಾಗಿ ತಾಲೂಕು ಮಟ್ಟದ ಅಧಿಕಾರಿಗಳ ತಂಡವನ್ನು ರಚಿಸಬೇಕು. ಇದರಿಂದ ಸಮಸ್ಯೆಗಳಿಗೆ ಶೀಘ್ರಗತಿಯಲ್ಲಿ ಪರಿಹಾರ ಕ್ರಮಗಳನ್ನು ಕೈಗೊಳ್ಳಲು ಅನುಕೂಲವಾಗುತ್ತದೆ ಎಂದು ಸಚಿವರು ತಿಳಿಸಿದರು. ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರಾದ ಎನ್.ಶಶಿಕುಮಾರ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಗೋಪಾಲ ಬ್ಯಾಕೋಡ, ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾದ ರುದ್ರೇಶ ಘಾಳಿ, ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ವೇದಿಕೆಯಲ್ಲಿದ್ದರು. ಸಭೆಯಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಅಜೀಜ್ ದೇಸಾಯಿ, ಎಲ್ಲ ತಾಲೂಕುಗಳ ತಹಶೀಲ್ದಾರರು, ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು, ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ಇತರರು ಹಾಜರಿದ್ದರು. ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ. ಅವರು ಸ್ವಾಗತಿಸಿ, ವಂದಿಸಿದರು.