ಡಿಸೆಂಬರ್ 14 ರಂದು ರಾಷ್ಟ್ರೀಯ ಲೋಕ ಅದಾಲತ್ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಸದಾವಕಾಶ
ಡಿಸೆಂಬರ್ 14 ರಂದು ರಾಷ್ಟ್ರೀಯ ಲೋಕ ಅದಾಲತ್ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಸದಾವಕಾಶ
ಗದಗ 15: ಜಿಲ್ಲೆಯಲ್ಲಿ ಡಿಸೆಂಬರ್ 14 ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗುತ್ತಿದ್ದು, ಸಾರ್ವಜನಿಕರು, ಪಕ್ಷಗಾರರು ತಮ್ಮ ವ್ಯಾಜ್ಯಗಳನ್ನು ಪರಸ್ಪರ ರಾಜೀ ಸಂಧಾನ ಮಾಡಿಕೊಳ್ಳುವ ಮೂಲಕ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಿಕೊಳ್ಳಲು ಇದೊಂದು ಸದಾವಕಾಶವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಸವರಾಜ ಅವರು ತಿಳಿಸಿದರು. ನಗರದ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ವಿಡಿಯೋ ಕಾನ್ಫರನ್ಸ್ ಹಾಲ್‌ದಲ್ಲಿ ಶುಕ್ರವಾರ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಅವರು ಮಾತನಾಡಿದರು. ರಾಜೀ ಸಂಧಾನದಲ್ಲಿ ಪಾಲ್ಗೊಂಡು ತಮಗಾಗುವ ಆರ್ಥಿಕ ಹೊರೆ ಹಾಗೂ ಸಮಯ ಪೋಲಾಗುವುದನ್ನು ತಪ್ಪಿಸಲು, ಮತ್ತು ರಾಜಿ ಸಂಧಾನದಲ್ಲಿ ಪ್ರಕರಣ ಇತ್ಯರ್ಥವಾದರೆ ನ್ಯಾಯಾಲಯಕ್ಕೆ ತುಂಬಿದ ಶುಲ್ಕವನ್ನು ಸಂಪೂರ್ಣ ಮರುಪಾವತಿ ಮಾಡಲಾಗುವುದು ಹಾಗೂ ಪ್ರಕರಣ ರಾಜೀ ಆದಲ್ಲಿ ಉಭಯ ಪಕ್ಷಗಾರರಿಗೆ ಮೇಲ್ಮನವಿ ಸಲ್ಲಿಸಲು ಅವಕಾಶವಿರುವುದಿಲ್ಲ ಇಲ್ಲಿಗೆ ಪ್ರಕರಣ ಮುಕ್ತಾಯಗೊಂಡು ತಮ್ಮ ಮೊದಲಿನ ಬಾಂದವ್ಯ ಉಳಿಸಿಕೊಳ್ಳಲು ಸಹಾಯಕವಾಗುತ್ತದೆ ಎಂದರು. ಗದಗ ಜಿಲ್ಲೆಯಲ್ಲಿ ರಾಜೀ ಸಂಧಾನಕ್ಕಾಗಿ ಪ್ರತಿಯೊಂದು ನ್ಯಾಯಾಲಯಕ್ಕೆ ಒಂದು ಬೆಂಚಿನಂತೆ ಒಟ್ಟು 14 ಬೆಂಚಗಳನ್ನು ರಚಿಸಿದ್ದು ಗದಗ ಜಿಲ್ಲೆಯಲ್ಲಿ ಒಟ್ಟು 19896 ವಿವಿಧ ಚಾಲ್ತಿ ಪ್ರಕರಣಗಳಿದ್ದು ಅದರಲ್ಲಿ ಈಗಾಗಲೇ ರಾಜೀ ಆಗಬಹುದಾದ 2821 ಪ್ರಕರಣಗಳನ್ನು ಗುರುತಿಸಿದ್ದು ಇದರಲ್ಲಿ ಸಿವಿಲ್ ದಾವೆಗಳು ಅಂದರೆ ಜಮೀನುಗಳಿಗೆ ಸಂಬಂಧಪಟ್ಟ ವ್ಯಾಜ್ಯಗಳು ಮನೆ ಹಾಗೂ ನಿವೇಶನಗಳಿಗೆ ಸಂಬಂಧಪಟ್ಟ ವ್ಯಾಜ್ಯಗಳು, ಬೂಸ್ವಾಧೀನ ಪ್ರಕರಣಗಳು, ಬ್ಯಾಂಕ ವಸೂಲಾತಿ ಪ್ರಕರಣಗಳು, ದರಖಾಸ್ತು ಅರ್ಜಿಗಳು, ಕಾರ್ಮಿಕ ಪ್ರಕರಣಗಳು, ಮರಳು ಕಳ್ಳ ಸಾಗಾಣಿಕೆೆ ಪ್ರಕರಣಗಳು, ಚೆಕ್‌ಬೌನ್ಸ್ ಪ್ರಕರಣಗಳು, ಮೋಟರ್ ವಾಹನ ಅಪಘಾತ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಹಾಗೂ ರಾಜೀ ಆಗಲು ಅರ್ಹವಿರುವ ಕ್ರಿಮಿನಲ್ ಕಂಪೌಂಡೆಬಲ್ ಪ್ರಕರಣಗಳು ಸೇರಿದಂತೆ ಹಲವಾರು ಪ್ರಕರಣಗಳನ್ನು ರಾಜೀಗಾಗಿ ಗುರುತಿಸಲಾಗಿರುತ್ತದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಸವರಾಜ ಅವರು ತಿಳಿಸಿದರು. ಪ್ರತಿದಿನ ರಾಜೀಗಾಗಿ ಆಯ್ಕೆ ಮಾಡಿದ ಪ್ರಕರಣಗಳನ್ನು ಸಂಬಂದಪಟ್ಟ ವಕೀಲರು ಹಾಗೂ ಪಕ್ಷಗಾರರೊಂದಿಗೆ ಮುಂಚಿತವಾಗಿಯೇ ರಾಜೀ ಸಂಧಾನದಿಂದ ಆಗುವ ಪ್ರಯೋಜನಗಳ ಬಗ್ಗೆ ತಿಳಿಸಿ ಅವರ ಮನ ಒಲಿಸಿ ರಾಜೀ ಸಂಧಾನ ಮಾಡಿಕೊಳ್ಳಲು ತಿಳಿಯಪಡಿಸಲಾಗುವುದು, ಪ್ರಕರಣಗಳಿಗೆ ಸಂಬಂದಪಟ್ಟ ವಕೀಲರು, ಕಕ್ಷಿದಾರರು ಹಾಗೂ ವಿವಿದ ಇಲಾಖೆಗಳಿಗೆ ಸಂಬಂದಪಟ್ಟ ಅಧಿಕಾರಿಗಳು, ಇಲಾಖೆಗಳವರು ಡಿಸೆಂಬರ್ 14 ರಂದು ಜರುಗುವ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಪಾಲ್ಗೊಂಡು ತಮ್ಮ ವ್ಯಾಜ್ಯಗಳನ್ನು ರಾಜೀ ಸಂಧಾನ ಮೂಲಕ ಪರಿಹರಿಸಿಕೊಳ್ಳಬಹುದಾಗಿದೆ . ಪಕ್ಷಗಾರರು ನ್ಯಾಯಾಲಯಗಳಲ್ಲಿರುವ ತಮ್ಮ ವ್ಯಾಜ್ಯಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ ಎಂದರು. ಕಳೆದ ಸೆಪ್ಟೆಂಬರ್-2024 ರಂದು ಜರುಗಿದ ಲೋಕ ಅದಾಲತ್‌ನಲ್ಲಿ 1770 ಚಾಲ್ತಿ ಪ್ರಕರಣಗಳನ್ನು ಹಾಗೂ 19898 ವ್ಯಾಜ್ಯಪೂರ್ವ ಪ್ರಕರಣಗಳನ್ನು ಸೇರಿ ಒಟ್ಟು 21668 ಪ್ರಕರಣಗಳ್ನು ರಾಜೀ ಮೂಲಕ ಇತ್ಯರ್ಥಪಡಿಸಿದೆ. ಇದರಲ್ಲಿ ವಿಶೇಷವಾಗಿ 08 ಕೌಟುಂಬಿಕ ಪ್ರಕರಣಗಳನ್ನು ಪುನಃ ಒಂದುಗೂಡಿಸಿ ಕಳುಹಿಸಲಾಗಿದೆ. ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಿ.ಎಸ್.ಶಿವನಗೌಡ್ರ, ವಾರ್ತಾಧಿಕಾರಿ ವಸಂತ ಮಡ್ಲೂರ ಅವರು ಉಪಸ್ಥಿತರಿದ್ದರು.