ನವದೆಹಲಿ, ನ.25: ಮಹಾರಾಷ್ಟ್ರದಲ್ಲಿ ಸಂವಿಧಾನದ ಮೌಲ್ಯಗಳನ್ನು ಉಲ್ಲಂಘಿಸಿರುವುದನ್ನು ವಿರೋಧಿಸಿ ಮಂಗಳವಾರ ಸಂಸತ್‌ನ ಸೆಂಟ್ರಲ್ ಹಾಲ್‌ನಲ್ಲಿ ಏರ್ಪಡಿಸಿರುವ ಸಂವಿಧಾನ ದಿನ ಕಾರ್ಯಕ್ರಮವನ್ನು ಬಹಿಷ್ಕರಿಸಲು ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳು ಸೋಮವಾರ ನಿರ್ಧರಿಸಿವೆ.
ಸಂವಿಧಾನದ ದಿನದ ಅಂಗವಾಗಿ ಸಂಸತ್‌ನ ಸೆಂಟ್ರಲ್ ಹಾಲ್‌ನಲ್ಲಿ ಏರ್ಪಡಿಸಿರುವ ಸಂಸತ್‌ನ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಷ್ಟ್ರಪತಿ ರಾಮನಾಥ್ ಕೋವಿಂದ್, ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಲಿದ್ದಾರೆ.
ಸಂಸತ್‌ನ ಅಂಬೇಡ್ಕರ್ ಪ್ರತಿಮೆ ಬಳಿ ಕಾಂಗ್ರೆಸ್ ನಾಳೆ ಬೆಳಗ್ಗೆ 10 ಗಂಟೆಯಿಂದ 11 ಗಂಟೆಯವರೆಗೆ ಪ್ರತಿಭಟನೆ ನಡೆಸಲಿದೆ.
ಎನ್‌ಸಿಪಿ, ಡಿಎಂಕೆ, ಆರ್‌ಜೆಡಿ ಸೇರಿದಂತೆ ಯುಪಿಎಯ ಅಂಗ ಪಕ್ಷಗಳು, ಇತರ ವಿರೋಧ ಪಕ್ಷಗಳಾದ ಶಿವಸೇನೆ, ಸಮಾಜವಾದಿ ಪಕ್ಷ, ತೃಣಮೂಲ ಕಾಂಗ್ರೆಸ್ ಕೂಡ 70ನೇ ಸಂವಿಧಾನ ದಿನದ ಕಾರ್ಯಕ್ರಮವನ್ನು ಬಹಿಷ್ಕರಿಸಲು ಮುಂದಾಗಿವೆ.
ಮಹಾರಾಷ್ಟ್ರದಲ್ಲಿ ಬಿಜೆಪಿಯ ದೇವೇಂದ್ರ ಫಡ್ನವಿಸ್ ಸರ್ಕಾರ ರಚಿಸಿರುವುದನ್ನು ವಿರೋಧಿಸಿ ಸಂಸತ್ತಿನ ಒಳಗೆ ಮತ್ತು ಹೊರಗೆ ಸೋಮವಾರ ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳು ಪ್ರತಿಭಟನೆ ನಡೆಸಿದ್ದು, ಮಹಾರಾಷ್ಟ್ರ ಬೆಳವಣಿಗೆಯನ್ನು 'ಪ್ರಜಾಪ್ರಭುತ್ವದ ಕಗ್ಗೊಲೆ' ಎಂದು ಕರೆದಿದ್ದವು.