ಕೈಗಾರಿಕಾ ಪ್ರದೇಶಗಳಿಗೆ ಮೂಲ ಸೌಲಭ್ಯ ಒದಗಿಸಿ: ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ

Provide basic facilities to industrial areas: District Collector K. Lakshmeepriya

ಕೈಗಾರಿಕಾ ಪ್ರದೇಶಗಳಿಗೆ ಮೂಲ ಸೌಲಭ್ಯ ಒದಗಿಸಿ: ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ 

ಕಾರವಾರ, ಫೆ.12 :- ಜಿಲ್ಲೆಯಲ್ಲಿರುವ ಕೈಗಾರಿಕಾ ಪ್ರದೇಶಗಳಿಗೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಮೂಲಕ ಕೈಗಾರಿಕೆಗಳ ಬೆಳವಣಿಗೆಗೆ ಎಲ್ಲಾ ರೀತಿಯ ನೆರವು ಒದಗಿಸುವಂತೆ ಕೈಗಾರಿಕಾ ಇಲಾಖೆ ಮತ್ತು ನಗರಾಭಿವೃದ್ಧಿ ಕೋಶದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ನಿರ್ದೇಶನ ನೀಡಿದರು.  

ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಏಕ ಗವಾಕ್ಷಿ ಒಪ್ಪಿಗೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 

ದಾಂಡೇಲಿ ಕೈಗಾರಿಕಾ ವಸಾಹತು ಪ್ರದೇಶದಲ್ಲಿನ ಕೈಗಾರಿಕೆಗಳಿಂದ ಸ್ವಚ್ಛತಾ ಶುಲ್ಕ ವಸೂಲಿ ಮಾಡಿದರು ಸಹ ನಗರ ಸ್ಥಳೀಯ ಸಂಸ್ಥೆಯಿಂದ ತ್ಯಾಜ್ಯ ವಿಲೇವಾರಿ, ಚರಂಡಿ ಸ್ವಚ್ಚತೆ ಮತ್ತು ರಸ್ತೆ ದುರಸ್ಥಿ ಮಾಡದೇ ಇರುವ ಬಗ್ಗೆ ಕೈಗಾರಿಕೋದ್ಯಮಿಗಳು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು, ಜಿಲ್ಲೆಯ ಎಲ್ಲಾ ಕೈಗಾರಿಕಾ ವಸಾಹತುಗಳಲ್ಲಿ ನೀರು, ವಿದ್ಯುತ್, ರಸ್ತೆ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳ ಕೊರತೆಯಾಗದಂತೆ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದರು. 

ದಾಂಡೇಲಿ ಕೈಗಾರಿಕಾ ವಸಾಹತುನಲ್ಲಿ ಹಂಚಿಕೆಯಾಗಿರುವ ನಿವೇಶನಗಳ ನೋಂದಣಿ ಕುರಿತಂತೆ ಇರುವ ಸಮಸ್ಯೆಯನ್ನು ಕೈಗಾರಿಕಾ ಇಲಾಖೆಯ ಅಧಿಕಾರಿಗಳು ಭೂ ದಾಖಲೆಗಳ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ, ಒಂದು ವಾರದ ಒಳಗೆ ಸಭೆ ನಡೆಸಿ, ಆದಷ್ಟು ಶೀಘ್ರದಲ್ಲಿ ಈ ಸಮಸ್ಯೆಯನ್ನು ಬಗೆಹರಿಸುವಂತೆ ತಿಳಿಸಿದರು. 

ಜಿಲ್ಲೆಯ ಕೈಗಾರಿಕಾ ಪ್ರದೇಶಗಳಿಂದ ಸುತ್ತಮುತ್ತಲಿನ ಜನ ವಸತಿ ಪ್ರದೇಶ ಸೇರಿದಂತೆ ಯಾವುದೇ ಪ್ರದೇಶದಲ್ಲಿ ವಾಯು ಮಾಲಿನ್ಯ ಮತ್ತು ಜಲ ಮಾಲಿನ್ಯ ಆಗದಂತೆ ನಿಯಮಿತವಾಗಿ ಈ ಪ್ರದೇಶಗಳಿಗೆ ಭೇಟಿ ನೀಡಿ ಪರೀಶೀಲನೆ ನಡೆಸುವಂತೆ ಪರಿಸರ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. 

ಸಭೆಯಲ್ಲಿ ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಜಯಂತ್, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಸ್ಟೆಲ್ಲಾ ವರ್ಗಿಸ್, ಜಿಲ್ಲಾ ಪರಿಸರ ಅಧಿಕಾರಿ ಸಂತೋಷ್ ಹಾಗೂ  ಜಿಲ್ಲೆಯ ವಿವಿಧ ಕೈಗಾರಿಕೋದ್ಯಮಿಗಳು ಉಪಸ್ಥಿತರಿದ್ದರು.    

ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷರ ಪ್ರವಾಸ 

ಕಾರವಾರ, 12 :- ಆಡಳಿತ ಸುಧಾರಣಾ ಆಯೋಗ ಅಧ್ಯಕ್ಷ ಆರ್‌.ವಿ. ದೇಶಪಾಂಡೆ ಅವರು ಫೆಬ್ರವರಿ ಮಾಹೆಯಲ್ಲಿ ಉತ್ತರಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದು, ಫೆ. 13 ರಂದು ಬೆಳಗ್ಗೆ 11 ಗಂಟೆಗೆ ಮಂಗಳವಾಡ ಶ್ರೀ ಗ್ರಾಮದೇವಿ ಜಾತ್ರಾ ನಿಮಿತ್ತ ರಥೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಉಳವಿ ಶ್ರೀ ಕ್ಷೇತ್ರ ಉಳವಿ ಚೆನ್ನಬಸವೇಶ್ವರ ಜಾತ್ರಾ ನಿಮಿತ್ತ ರಥೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. 

ಫೆ.14 ರಂದು ಬೆಳಗ್ಗೆ 10 ಗಂಟೆಗೆ ಹಳಿಯಾಳದಲ್ಲಿ ಸಾರ್ವಜನಿಕರ ಭೇಟಿ ಮಾಡಲಿದ್ದಾರೆ. 11.30 ಕ್ಕೆ ಹಳಿಯಾಳ ಪುರಭವನದಲ್ಲಿ  ಪುರಸಭೆಯ 15 ನೇ ಹಣಕಾಸು ಯೋಜನೆಯಡಿ ಖರೀದಿಸಿದ ಐದು ಕಸ ವಿಲೆವಾರಿ ಘಟಕದ ಸ್ವಚ್ಚತಾ ವಾಹನಗಳ ಹಸ್ತಾಂತರ ಕಾರ್ಯಕ್ರಮ ಹಾಗೂ ಕಾರ್ಮಿಕ ಇಲಾಖೆ ವತಿಯಿಂದಿ ಕಾರ್ಮಿಕರಿಗೆ ನೀಡಲಾಗುವ ಕಾರ್ಮಿಕ ಕಿಟ್ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಅವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.