ಜಿಲ್ಲೆಯ ಜನತೆಗೆ ಸಮರ್ಕ ಕುಡಿಯುವ ನೀರು ಪೂರೈಕೆ ಅಗತ್ಯ ಕ್ರಮ
ಹಾವೇರಿ 06: ಪ್ರಸಕ್ತ ವರ್ಷ ಜಿಲ್ಲೆಯಲ್ಲಿ ನೀರಿನ ಸಂಗ್ರಹ ಉತ್ತಮವಾಗಿದ್ದು, ಬೇಸಿಗೆ ಮಳೆಯಾಗುತ್ತಿದ್ದರೂ ಕೂಡಾ ಮುಂದಿನ ಎರಡು ತಿಂಗಳ ಬೇಸಿಗೆ ಅವಧಿಯಲ್ಲಿ ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಸಂಬಂಧಿಸಿ ಯಾವುದೇ ರೀತಿಯ ಸಮಸ್ಯೆ ಎದುರಾಗದಂತೆ ಅಧಿಕಾರಿಗಳು ಮುನ್ನೆಚ್ಚರಿಕಾ ಅಗತ್ಯ ಕ್ರಮ ವಹಿಸಬೇಕು ಎಂದು ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶನಾಲಯ,ಕೃಷಿ ಮಾರುಕಟ್ಟೆ ಸಚಿವರು ಹಾಗೂ ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವಾನಂದ ಪಾಟೀಲ ಹೇಳಿದರು.ನಗರದ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ಭಾನುವಾರ ಹಮ್ಮಿಕೊಂಡಿರುವ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಈಗ ನೀರಿನ ನಿರ್ವಹಣೆಗೆ ಅಗತ್ಯ ಕ್ರಮ ವಹಿಸಿದರೆ, ಇರುವ ನೀರನ್ನು ಮುಂದಿನ ಎರಡು ತಿಂಗಳ ಕಾಲ ಸಮರ್ಕವಾಗಿ ಪೂರೈಕೆ ಮಾಡಲು ಸಾಧ್ಯವಾಗಲಿದೆ. ನೀರಿನ ಸಂಗ್ರಹವಿದೆ ಎಂಬ ಕಾರಣಕ್ಕೆ ನಿರ್ಲಕ್ಷತನ ತೋರದೆ ಸಾರ್ವಜನಿಕರಿಗೆ ಸಮರ್ಕ ಕುಡಿಯುವ ನೀರಿನ ಪೂರೈಕೆ ಆಗಬೇಕು ಎಂದು ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.
ಹಾಗೆಯೇ ಜಿಲ್ಲೆಯ ಬಹುಗ್ರಾಮ ಕುಡಿಯುವ ನೀರು ಯೋಜನೆಯ ಕಾಮಗಾರಿಗಳನ್ನು ಹಿಂದಿನ ಸಭೆಗಳಲ್ಲಿ ಗೊತ್ತುಪಡಿಸಿದ ಅವಧಿಯೊಳಗೆ ಪೂರ್ಣಗೊಳಿಸಬೇಕು ಇಲ್ಲವಾದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನೇ ನೆರೆವಾಗಿ ಹೊಣೆಗಾರರನ್ನಾಗಿ ಮಾಡಿ ಕಾನೂನು ಕ್ರಮ ಜರುಗಿಸಲಾಗುವುದು ಎಂದರು.ಜಿಲ್ಲೆಯ ಕುಡಿಯುವ ನೀರಿನ ಸಮಸ್ಯೆ ಕುರಿತ ಚರ್ಚೆಯ ವೇಳೆ ಜಿಲ್ಲಾಧಿಕಾರಿ ಡಾ.ವಿಜಯ ಮಹಾಂತೇಶ್ ದಾನಮ್ಮನವರ ಮಾಹಿತಿ ನೀಡಿ, ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚಿನ ಮಳೆಯಾಗಿರುವ ಕಾರಣ ಬೇಸಿಗೆಯ ನೀರಿನ ಪೂರೈಕೆಗೆ ಅಗತ್ಯ ನೀರಿನ ಸಂಗ್ರಹವಿದೆ.ನಗರಕ್ಕೆ ಮೂರು ಮೂಲಗಳಿಂದ ನೀರು ಸರಬರಾಜು ಮಾಡಲಾಗುತ್ತಿದೆ. ತುಂಗಭದ್ರ, ವರದಾ ಮತ್ತು ಹೆಗ್ಗೇರಿ ಕೆರೆ ಮುಖಾಂತರ ನೀರು ಸರಬರಾಜು ಮಾಡಲಗುತ್ತಿದೆ. ಫೆಬ್ರವರಿ ಮಾಹೆಯಲ್ಲಿ ತುಂಗಭದ್ರಾ ನದಿಯಿಂದ 7 ಎಂ ಎಲ್ ಡಿ ಹಾಗೂ ಹೆಗ್ಗೆರೆ ಕೆರೆಯಿಂದ 3 ಎಂ ಎಲ್ ಡಿ ನೀರು ಪಡೆದು ಜಿಲ್ಲೆಯ 31 ವಾರ್ಡಗಳಿಗೂ ಪ್ರತಿ 6 ಇಲ್ಲವೇ 9 ದಿನಕ್ಕೊಮ್ಮೆ ಸಾರ್ವಜನಿಕರಿಗೆ ಕುಡಿಯುವ ನೀರು ಪೂರೈಸಲಾಗುತ್ತಿದೆ ಎಂದರು. ಸಭೆಯಲ್ಲಿ ಬ್ಯಾಡಗಿ ಶಾಸಕರಾದ ಬಸವರಾಜ್ ಶಿವಣ್ಣವರ, ಹಿರೇಕೆರೂರ ಶಾಸಕರಾದ ಯು ಬಿ ಬಣಕಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹನಾಧಿಕಾರಿ ರುಚಿ ಬಿಂದಾಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ, ಅಪರ ಜಿಲ್ಲಾಧಿಕಾರಿ ಡಾ. ಎಲ್ ನಾಗರಾಜ್, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ತಾಲೂಕ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.