ಸವದತ್ತಿ ಬಸ್ ನಿಲ್ದಾಣದ ಮುಂದೆ ಟ್ರಾಫಿಕ್ ಜಾಮ್ ಹಿ ಸಾರ್ವಜನಿಕರ ಆಕ್ರೋಶ

ಸವದತ್ತಿ ಬಸ್ ನಿಲ್ದಾಣದ ಮುಂದೆ ಟ್ರಾಫಿಕ್ ಜಾಮ್ ಹಿ ಸಾರ್ವಜನಿಕರ ಆಕ್ರೋಶ  Public outrage over traffic jam in front of Savadatti bus stand

ಸವದತ್ತಿ 16: ನಗರದ ಪ್ರಮುಖ ಬಸ್ ನಿಲ್ದಾಣದ ಮುಂಭಾಗದಲ್ಲಿ ವಾಹನಗಳ ಅಸ್ತವ್ಯಸ್ತ ನಿಲುಗಡೆಯಿಂದಾಗಿ ಸಾರ್ವಜನಿಕರು ಹಾಗೂ ವಾಹನ ಸವಾರರು ಪ್ರತಿದಿನವೂ ತೀವ್ರ ಸಂಕಷ್ಟವನ್ನು ಎದುರಿಸುತ್ತಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.  

ಮಂಗಳವಾರ, ಬುಧವಾರ ಹಾಗೂ ಶುಕ್ರವಾರಗಳ ಸಂತೆ ದಿನಗಳು ಹಾಗೂ ಹುಣ್ಣಿಮೆ ಸೇರಿದಂತೆ ವಿಶೇಷ ದಿನಗಳಲ್ಲಿ ಭಕ್ತರ ಮತ್ತು ಪ್ರಯಾಣಿಕರ ದಟ್ಟಣೆ ಹೆಚ್ಚಾಗುತ್ತದೆ. ಈ ಸಮಯದಲ್ಲಿ ಆಟೋ ಮತ್ತು ಟಂಟಂ ರಿಕ್ಷಾಗಳ ಅಸಂಘಟಿತ ಹಾಗೂ ಅಡ್ಡಾದಿಡ್ಡಿ ನಿಲುಗಡೆಯಿಂದ ಬಸ್ ನಿಲ್ದಾಣದ ಸುತ್ತಮುತ್ತ ಪ್ರದೇಶವು ಟ್ರಾಫಿಕ್ ಜಾಮ್ ಕೇಂದ್ರವಾಗುತ್ತಿದೆ.  

ರಸ್ತೆಯ ಮಧ್ಯಭಾಗದಲ್ಲೇ ವಾಹನಗಳನ್ನು ನಿಲ್ಲಿಸಿ ಪ್ರಯಾಣಿಕರನ್ನು ಹತ್ತಿಸಿಕೊಳ್ಳುವ ಚಾಲಕರ ವರ್ತನೆಯಿಂದ ಬಸ್ಗಳ ಸಂಚಾರಕ್ಕೂ ಅಡಚಣೆ ಉಂಟಾಗುತ್ತಿದೆ. ಇದರಿಂದ ಬಸ್ ನಿಲ್ದಾಣಕ್ಕೆ ಬರುವ ಹಾಗೂ ಹೊರಡುವ ವಾಹನಗಳು ಸಂಚರಿಸಲು ಹರಸಾಹಸ ಪಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.  

ರಸ್ತೆ ಅತಿಕ್ರಮಣದಿಂದ ಬೈಕ್ ಸವಾರರು ಹಾಗೂ ಪಾದಚಾರಿಗಳು ಅಪಾಯದ ನಡುವೆಯೇ ಸಂಚರಿಸುವ ಸ್ಥಿತಿ ಉಂಟಾಗಿದೆ. ಶಾಲಾ-ಕಾಲೇಜು ವಿದ್ಯಾರ್ಥಿಗಳು ಮತ್ತು ಹಿರಿಯ ನಾಗರಿಕರು ರಸ್ತೆ ದಾಟಲು ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಈಗಾಗಲೇ ಈ ಅವ್ಯವಸ್ಥೆಯಿಂದ ಸಣ್ಣಪುಟ್ಟ ಅಪಘಾತಗಳೂ ಸಂಭವಿಸಿದ್ದು, ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗಿದೆ.  

ಈ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸಂಚಾರಿ ಪೊಲೀಸ್ ಇಲಾಖೆ ತಕ್ಷಣ ಕ್ರಮ ಕೈಗೊಳ್ಳಬೇಕು ಹಾಗೂ ಬಸ್ ನಿಲ್ದಾಣದ ಮುಂಭಾಗದಲ್ಲಿ ಸಂಚಾರಕ್ಕೆ ಅಡ್ಡಿಯಾಗದಂತೆ ಪ್ರತ್ಯೇಕ ಪಾರ್ಕಿಂಗ್ ವ್ಯವಸ್ಥೆ ಕಲ್ಪಿಸಬೇಕು ಎಂದು ನಾಗರಿಕರು ಆಗ್ರಹಿಸಿದ್ದಾರೆ.