ಸಂಡೂರು: ನಂದಿಹಳ್ಳಿ ಸ್ನಾತಕೋತರ ಕೇಂದ್ರದಲ್ಲಿ ಗ್ಯಾರಂಟಿ ಯೋಜನೆಗಳ ಕುರಿತ ‘ಮುಕ್ತ ಸಂವಾದ ಕಾರ್ಯಕ್ರಮ
ಬಳ್ಳಾರಿ 06: ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳಿಂದ ಸಮಾಜದಲ್ಲಿ ಧನಾತ್ಮಕ ಬದಲಾವಣೆಗಳು ಆಗುತ್ತಿದ್ದು, ಸಮಾಜಮುಖಿ ಕಾರ್ಯಗಳು ಸಹ ಆಗುತ್ತಿವೆ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಉಪಾಧ್ಯಕ್ಷ ಎಸ್.ಆರ್.ಮೆಹರೋಜ್ ಖಾನ್ ಅವರು ಹೇಳಿದರು. ರಾಜ್ಯ ಸರ್ಕಾರದ ಪ್ರತಿಷ್ಠಿತ ಪಂಚ ಗ್ಯಾರಂಟಿ ಯೋಜನೆಗಳ ಕುರಿತು ಸಂಡೂರು ತಾಲ್ಲೂಕಿನ ನಂದಿಹಳ್ಳಿ ಬಳಿಯ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಸ್ನಾತಕೋತರ ಕೇಂದ್ರದಲ್ಲಿ ಪ್ರಾಧ್ಯಾಪಕರು, ಸ್ನಾತಕೋತ್ತರ ಹಾಗೂ ಸಂಶೋಧನಾ ವಿದ್ಯಾರ್ಥಿಗಳೊಂದಿಗೆ ಗುರುವಾರ ಏರಿ್ಡಸಿದ್ದ ಮುಕ್ತ ಸಂವಾದ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯ ಸರ್ಕಾರದ ಪ್ರಮುಖ ಐದು ಗ್ಯಾರಂಟಿ ಯೋಜನೆಗಳ ಸೌಲಭ್ಯವನ್ನು ರಾಜ್ಯದ ನಾಲ್ಕುವರೆ ಕೋಟಿ ಜನರು ಪಡೆದುಕೊಳ್ಳುತ್ತಿದ್ದು, ಶೇ.98 ರಷ್ಟು ಗುರಿ ಪ್ರಗತಿ ಸಾಧಿಸಲಾಗಿದೆ, ಉಳಿದಂತೆ ಶೇಕಡ ನೂರಕ್ಕೆ ನೂರರಷ್ಟು ಪ್ರಗತಿ ಸಾಧಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಅವರು ತಿಳಿಸಿದರು. ಗೃಹಲಕ್ಷ್ಮಿ ಯೋಜನೆಯಿಂದ ಮಹಿಳೆಯರಲ್ಲಿ ಆರ್ಥಿಕ ಸ್ವಾವಲಂಬನೆ ಹೆಚ್ಚಾಗುತ್ತಿದೆ. ಸ್ವಯಂ ಉದ್ಯೋಗ ಸೃಷ್ಟಿಯಾಗಿ ನಿರುದ್ಯೋಗ ಕಡಿಮೆಯಾಗುತ್ತಿದೆ. ಪಂಚ ಗ್ಯಾರಂಟಿ ಯೋಜನೆಗಳು ಎಲ್ಲ ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕೆಲಸ ಪ್ರತಿ ತಾಲ್ಲೂಕಿನಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರವು ಮಾಡುತ್ತಿದೆ ಎಂದು ಅವರು ತಿಳಿಸಿದರು. ಸಂಡೂರು ಶಾಸಕರಾದ ಈ.ಅನ್ನಪೂರ್ಣ ಅವರು ಮಾತನಾಡಿ, ರಾಜ್ಯದ ಮಹತ್ವಕಾಂಕ್ಷಿ ಯೋಜನೆಗಳಾದ ಪಂಚ ಗ್ಯಾರಂಟಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ ತುಂಬಾ ಆಸಕ್ತಿಯಿಂದ ಜಾರಿ ಮಾಡಿದೆ.
ಎಲ್ಲಾ ಅಧಿಕಾರಿಗಳು ಮತ್ತು ಪ್ರಾಧಿಕಾರವೂ ಸೇರಿ ಪಂಚ ಗ್ಯಾರಂಟಿಗಳ ಸಮರ್ಕ ಅನುಷ್ಠಾನಕ್ಕೆ ಶ್ರಮಿಸಬೇಕೆಂದು ಕರೆ ನೀಡಿದರು. ವಿದ್ಯಾಕೇಂದ್ರದ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರದ ಗಮನ ಸೆಳೆಯಲಾಗುವುದು. ವಿದ್ಯಾರ್ಥಿಗಳು ಶೈಕ್ಷಣಿಕ, ರಾಜಕೀಯ ಮತ್ತು ಆಡಳಿತಾತ್ಮಕ ಕ್ಷೇತ್ರದಲ್ಲಿ ಸಾಧನೆ ಮಾಡಿ ನಂದಿಹಳ್ಳಿ ಸ್ನಾತಕೋತ್ತರ ಪದವಿ ಕೇಂದ್ರದ ಕೀರ್ತಿ ಹೆಚ್ಚಿಸಬೇಕು ಎಂದು ಕಿವಿಮಾತು ಹೇಳಿದರು. ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ ಅವರು ಮಾತನಾಡಿ, ಗೃಹಲಕ್ಷ್ಮಿ ಯೋಜನೆ ಕೇವಲ ತಾಯಂದಿರು ಮಾತ್ರವಲ್ಲ, ಹಲವು ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೂ ನೆರವಾಗುತ್ತಿದೆ. ವಿದ್ಯಾರ್ಥಿಗಳ ಭವಿಷ್ಯಕ್ಕೆ ಪಂಚ ಗ್ಯಾರಂಟಿ ಯೋಜನೆಗಳು ಸದ್ಬಳಕೆಯಾಗುತ್ತಿವೆ. ಶಕ್ತಿ ಯೋಜನೆಯಿಂದ ವಿದ್ಯಾರ್ಥಿಗಳು ಸೇರಿದಂತೆ ಎಲ್ಲಾ ಮಹಿಳೆಯರಿಗೆ ಆರ್ಥಿಕ ಉಳಿತಾಯವಾಗುತ್ತಿದೆ ಎಂದು ಅವರು ಹೇಳಿದರು.
ಯುವನಿಧಿ ಶಕ್ತಿ ಯೋಜನೆಯಿಂದ ವಿದ್ಯಾರ್ಥಿಗಳಿಗೆ ಆಗುತ್ತಿರುವ ಅನುಕೂಲಗಳ ಕುರಿತು ಮಾಹಿತಿ ನೀಡಿ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದರು. ಮುಕ್ತ ಸಂವಾದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಗ್ಯಾರಂಟಿ ಯೋಜನೆಗಳ ಬಗ್ಗೆ ತಮ್ಮ ಅನಿಸಿಕೆ-ಅಭಿಪ್ರಾಯಗಳನ್ನು ಮುಕ್ತವಾಗಿ ಹಂಚಿಕೊಂಡರು. ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷರಾದ ಆಶಾಲತಾ ಸೋಮಪ್ಪ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಉಪನಿರ್ದೇಶಕ ವಿಜಯಕುಮಾರ್, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರಾದ ಸಕೀನಾ, ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಹಟ್ಟಪ್ಪ, ಡಿಟಿಓ ಚಾಮರಸ ಸೇರಿದಂತೆ, ಜೆಸ್ಕಾಂ ಅಧಿಕಾರಿಗಳು, ವಿವಿ ಸ್ನಾತಕೋತ್ತರ ಕೇಂದ್ರದ ನಿರ್ದೇಶಕರು, ಉಪನ್ಯಾಸಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.