ಜ.30ರಿಂದ ಫೆ.13ರ ವರೆಗೆ ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನ
ಬಳ್ಳಾರಿ 30: ಜಿಲ್ಲೆಯಲ್ಲಿ ಜ.30 ರಿಂದ ಫೆ.13 ರ ವರೆಗೆ ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದ್ದು, ನಗರ ಮತ್ತು ಇತರೆ ಪ್ರದೇಶಗಳಲ್ಲಿ ಸಮೀಕ್ಷೆ ಕಾರ್ಯ ವ್ಯವಸ್ಥಿತವಾಗಿ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು.
ಗುರುವಾರದಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನದ ಕುರಿತು ಆಯೋಜಿಸಿದ್ದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕುಷ್ಠರೋಗದ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು. ವ್ಯಾಪಕ ಮಾಹಿತಿ ನೀಡುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಪ್ರಾಥಮಿಕ ಆರೋಗ್ಯ ಸಂರಕ್ಷಣಾಧಿಕಾರಿಗಳಿಗೆ ಹಾಗೂ ಆಶಾ ಕಾರ್ಯಕರ್ತೆಯರಿಗೆ ತಿಳಿಸಬೇಕು ಎಂದರು.
ಅಭಿಯಾನದಲ್ಲಿ ಮಾಡುವ ಸರ್ವೇ ಕಾರ್ಯವು ಯೋಜನಾಧಾರಿತವಾಗಿರಬೇಕು. ಸಮೀಕ್ಷೆ ಕಾರ್ಯದಲ್ಲಿ ಸ್ಥಳೀಯ ಮುಖಂಡರು ಮತ್ತು ಸ್ಥಳೀಯ-ಸಂಸ್ಥೆಗಳ ಮುಖ್ಯಾಧಿಕಾರಿಗಳ ಸಹಕಾರ ಪಡೆದುಕೊಳ್ಳಬೇಕು. ಅಂದಾಗ ಮಾತ್ರ ಪ್ರಕರಣಗಳನ್ನು ಗುರುತಿಸಲು ಸಾಧ್ಯ ಎಂದು ಅವರು ನಿರ್ದೇಶನ ನೀಡಿದರು.
ಕೇವಲ ಆಶಾಕಾರ್ಯಕರ್ತೆಯರು ಬೆಳಿಗ್ಗೆ ಅಥವಾ ಸಂಜೆ ಸಮಯದಲ್ಲಿ ಮನೆ-ಮನೆಗಳಿಗೆ ಭೇಟಿ ನೀಡಿ ಸಮೀಕ್ಷೆ ಕೈಗೊಳ್ಳಬೇಕು. ಒಟ್ಟಾರೆಯಾಗಿ ವ್ಯವಸ್ಥಿತ ಯೋಜನೆ ರೂಪಿಸಿ ಅಭಿಯಾನ ಯಶಸ್ವಿಗೊಳಿಸಬೇಕು ಎಂದು ವೈದ್ಯಾಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ವೀರೇಂದ್ರಕುಮಾರ್ ಅವರು ಮಾತನಾಡಿ, ಕುಷ್ಠರೋಗವು ಸಾಂಕ್ರಾಮಿಕ ರೋಗವಾಗಿದ್ದು, ಸಾರ್ವಜನಿಕರು ಇದಕ್ಕೆ ಭಯಪಡುವ ಅಗತ್ಯವಿರುವುದಿಲ್ಲ.ಜಿಲ್ಲೆಯ ಸಂಡೂರು ಮತ್ತು ಕುರುಗೋಡು ಭಾಗಗಳಲ್ಲಿ ಹೆಚ್ಚು ಪ್ರಕರಣ ಕಂಡುಬರುತ್ತಿದ್ದು, ಈ ಜಾಗೃತಿ ಅಭಿಯಾನದ ಸಂದರ್ಭದಲ್ಲಿ ಗ್ರಾಮಗಳಲ್ಲಿ ಜಾಗೃತಿ ಮೂಡಿಸುವುದೂ ಸೇರಿದಂತೆ ಕುಷ್ಠರೋಗ ನಿರ್ಮೂಲನೆಯ ಕುರಿತು ಎಲ್ಲರಿಗೂ ಪ್ರತಿಜ್ಞಾವಿಧಿ ಬೋಧಿಸಲಾಗುವುದು ಎಂದರು.
ಪಾದಗಳ ಮತ್ತು ಬೆರಳುಗಳ ದೌರ್ಬಲ್ಯ, ಕಣ್ಣು ಮುಚ್ಚುವಲ್ಲಿ ತೊಂದರೆ, ವ್ಯಕ್ತಿಯ ದೇಹದ ಮೇಲೆ ಸ್ಪರ್ಶ ಜ್ಞಾನವಿಲ್ಲ ಮಚ್ಚೆಗಳು, ತ್ವಚ್ಚೆಯ ಮೇಲೆ ಕೆಂಪಾದ ಬಾವು, ನೋವಿನಿಂದ ಕೂಡಿದ ಹಗ್ಗದ ಹಾಗೆ ಊದಿಕೊಂಡ ನರಗಳು, ವ್ಯಕ್ತಿಯ ದೇಹದ ಯಾವುದೇ ಭಾಗಗಳಲ್ಲಿ ತಿಳಿ ಬಿಳಿ ತಾಮ್ರದ ವರ್ಣದ ಸ್ಪರ್ಶ ಜ್ಞಾನವಿಲ್ಲದ ಮಚ್ಚೆಗಳು ಕಂಡು ಬಂದಲ್ಲಿ ಸಮೀಪದ ಸರ್ಕಾರಿ ಆರೋಗ್ಯ ಕೇಂದ್ರಕ್ಕೆ ತೆರಳಿ ಪರೀಕ್ಷಿಸಿಕೊಳ್ಳಬೇಕು ಎಂದು ಅವರು ಹೇಳಿದರು.
ಸಭೆಯಲ್ಲಿ ನಿಕ್ಷಯಮಿತ್ರ ಯೋಜನೆ, ನಾಯಿ ಕಡಿತ, ಹಾವು ಕಡಿತ ಸೇರಿದಂತೆ ವಿವಿಧ ವಿಷಯಗಳ ಕುರಿತು ಸುಧೀರ್ಘ ಚರ್ಚಿಸಲಾಯಿತು.
ಬಳಿಕ ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ಕುರಿತು ಪ್ರತಿಜ್ಞೆಯನ್ನು ಸ್ವೀಕರಿಸಿದರು. ನಂತರ ಸ್ಪರ್ಶ್ ಕುಷ್ಠರೋಗ ಜಾಗೃತಿ ಅಭಿಯಾನದ ಭಿತ್ತಿಚಿತ್ರಗಳನ್ನು ಬಿಡುಗಡೆಗೊಳಿಸಲಾಯಿತು.
ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶ್ ಬಾಬು, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿ, ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ.ಹನುಮಂತಪ್ಪ, ಜಿಲ್ಲಾ ಆಶ್ರೀತ ರೋಗಗಳ ನಿಯಂತ್ರಣಾಧಿಕಾರಿ ಡಾ.ಅಬ್ದುಲ್ಲಾ, ಜಿಲ್ಲಾ ಕುಟುಂಬ ಕಲ್ಯಾಣ ಅನುಷ್ಠಾನ ಅಧಿಕಾರಿ ಡಾ.ಪೂರ್ಣಿಮಾ ಕಟ್ಟಿಮನಿ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ.ವಿ.ಕೆ., ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ.ಇಂದ್ರಾಣಿ.ವಿ., ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ದಾಸಪ್ಪನವರ್ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ತಾಲ್ಲೂಕು ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.