ಮಾ.11 ರಂದು ಶ್ರೀ ಕನಕದುರ್ಗಮ್ಮ ದೇವಸ್ಥಾನ ಸಿಡಿಬಂಡಿ ಮಹೋತ್ಸವ

Sri Kanakadurgamma Temple Sidibandi Mahotsav on March 11

ಮಾ.11 ರಂದು ಶ್ರೀ ಕನಕದುರ್ಗಮ್ಮ ದೇವಸ್ಥಾನ ಸಿಡಿಬಂಡಿ ಮಹೋತ್ಸವ 

ಬಳ್ಳಾರಿ 18: ಬರುವ ಮಾ.11 ರಂದು ನಡೆಯಲಿರುವ ಶ್ರೀ ಕನಕದುರ್ಗಮ್ಮ ದೇವಸ್ಥಾನದ ಸಿಡಿಬಂಡಿ ರಥೋತ್ಸವವನ್ನು ಅದ್ದೂರಿಯಾಗಿ ಆಚರಿಸಲು ಎಲ್ಲಾ ರೀತಿಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಸೂಚಿಸಿದರು. 

ಶ್ರೀ ಕನಕದುರ್ಗಮ್ಮ ದೇವಸ್ಥಾನದ ಸಿಡಿಬಂಡಿ ಮಹೋತ್ಸವ ಅಂಗವಾಗಿ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಏರಿ​‍್ಡಸಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 

ನಗರದ ಅಧಿದೇವತೆಯ ಮಹೋತ್ಸವವನ್ನು ಸಂಪ್ರದಾಯದಂತೆ ಆಚರಣೆಗೆ ಕ್ರಮ ವಹಿಸಬೇಕು. ಯಾವುದೇ ರೀತಿಯ ಲೋಪವಾಗದಂತೆ ನೋಡಿಕೊಳ್ಳಬೇಕು. ಈ ಕುರಿತು ಗಾಣಿಗ ಸಮುದಾಯದವರ ಸಲಹೆ ಪಡೆದುಕೊಳ್ಳಬೇಕು ಎಂದು ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. 

ರಥೋತ್ಸವ ಕಾರ್ಯಕ್ರಮದಲ್ಲಿ ಸುಮಾರು 3 ರಿಂದ 4 ಲಕ್ಷ ಜನರು ಸೇರುವ ಸಾಧ್ಯತೆ ಇದೆ. ಬರುವ ಸಾರ್ವಜನಿಕರು ಮತ್ತು ಭಕ್ತಾಧಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ, ಸರತಿ ಸಾಲಿನ ವ್ಯವಸ್ಥೆ, ಪಾರ್ಕಿಂಗ್ ವ್ಯವಸ್ಥೆ, ವಿದ್ಯುತ್ ವ್ಯವಸ್ಥೆ, ಪೊಲೀಸ್ ಬಂದೋಬಸ್ತ್‌ ನಿಯೋಜಿಸಬೇಕು ಎಂದು ತಿಳಿಸಿದರು. 

ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಮಾತನಾಡಿ, ಬರುವ ಭಕ್ತರು ಹಾಗೂ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರು ವ್ಯವಸ್ಥೆ ಮಾಡಬೇಕು. ನೀರು ಒದಗಿಸಿಸುವ ಟ್ಯಾಂಕರ್ ಗಳನ್ನು ಸ್ವಚ್ಛಗೊಳಿಸಿ, ಬಳಿಕ ಪರೀಕ್ಷಿಸಿದ ನಂತರವೇ ಪೂರೈಸಬೇಕು. ಅನ್ನ ದಾಸೋಹ ಮಾಡಿದಲ್ಲಿಯೂ ಸಹ ಆಹಾರ ಪರೀಕ್ಷಿಸಬೇಕು ಎಂದು ಆರೋಗ್ಯಾಧಿಕಾರಿಗಳಿಗೆ ಸೂಚಿಸಿದರು. 

ದೇವಸ್ಥಾನದ ನೈರ್ಮಲೀಕರಣಕ್ಕೆ ದೇವಸ್ಥಾನದ ಸುತ್ತಲು ಜಾತ್ರಾ ಪ್ರದೇಶವನ್ನು ನಿರಂತರ ಸ್ವಚ್ಛವಾಗಿಟ್ಟುಕೊಳ್ಳಬೇಕು. ತಾತ್ಕಾಲಿಕ ಶೌಚಾಲಯ ಸ್ಥಾಪಿಸಬೇಕು ಹಾಗೂ ಅವುಗಳ ನಿರ್ವಹಣೆ ಕೈಗೊಳ್ಳಬೇಕು ಎಂದು ಮಹಾನಗರ ಪಾಲಿಕೆಯ ಅಧಿಕಾರಿಗಳಿಗೆ ತಿಳಿಸಿದರು. ವಿದ್ಯುತ್ ಸರಬರಾಜು ನಿರಂತರವಾಗಿರಲಿ, ಸಿಡಿಬಂಡಿಯು ಸಂಚರಿಸುವಾಗ ವ್ಯತ್ಯಯ ಮಾಡಬೇಕು ಎಂದು ಜೆಸ್ಕಾಂ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. 

ಆಹ್ವಾನ ಪತ್ರಿಕೆ ಮುದ್ರಿಸಿ ಶಿಷ್ಠಾಚಾರದಂತೆ ಎಲ್ಲಾ ಗಣ್ಯರನ್ನು ಆಹ್ವಾನಿಸಬೇಕು. ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ವಹಿಸಿದ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಆರೋಗ್ಯದ ವಿಚಾರ ಸಂಬಂಧಿಸಿದಂತೆ ವೈದ್ಯಾಧಿಕಾರಿಗಳ ತಂಡವನ್ನು ರಚಿಸಿ, ಆಂಬ್ಯುಲೆನ್ಸ್‌ ವ್ಯವಸ್ಥೆ ಮಾಡಬೇಕು ಎಂದರು.  

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ವಿ.ಜೆ ಅವರು ಮಾತನಾಡಿ, ಸಾರ್ವಜನಿಕರು ಮತ್ತು ಭಕ್ತಾಧಿಗಳಿಗೆ ಸಾಲಿನಲ್ಲಿ ಬಂದು ದೇವಿಯ ದರ್ಶನ ಪಡೆಯಲು ಬ್ಯಾರಿಕೇಡ್ ಮತ್ತು ಸಿಸಿಟಿವಿ ಕ್ಯಾಮೆರಗಳನ್ನು ಅಳವಡಿಸಬೇಕು. ಜಾತ್ರಾ ಮಹೋತ್ಸವದಲ್ಲಿ ತುರ್ತು ಸಂದರ್ಭಕ್ಕಾಗಿ ದೇವಸ್ಥಾನದ ಆವರಣದಲ್ಲಿ ಪೊಲೀಸ್ ಸಹಾಯವಾಣಿ ಕೇಂದ್ರ ತೆರೆಯಬೇಕು. ಅಗ್ನಿಶಾಮಕದಳ ಸೇವೆ ಸಿದ್ಧವಾಗಿಟ್ಟುಕೊಳ್ಳಬೇಕು ಎಂದು ಹೇಳಿದರು. 

ಟ್ರಾಫಿಕ್ ನಿರ್ವಹಣೆಗಾಗಿ ದೇವಸ್ತಾನದ ಸುತ್ತ-ಮುತ್ತಲಿನ ಪ್ರಮುಖ ರಸ್ತೆಗಳ ಸೂಕ್ತ ಸ್ಥಳದಲ್ಲಿ ಅವಕಾಶ ಮಾಡಲಾಗುತ್ತದೆ ಎಂದು ಸಭೆಗೆ ತಿಳಿಸಿದರು.  

ಸಿಡಿಬಂಡಿ ರಥೋತ್ಸವ ಸುತ್ತಲೂ ಬ್ಯಾರಿಕೇಡ್ ಅಳವಡಿಸಬೇಕು. ದೇವಿಯ ದರ್ಶನಕ್ಕೆ ಬರುವ ವಿಐಪಿ ವ್ಯಕ್ತಿಗಳಿಗೆ ನಿಗದಿತ ಸಮಯ ಮೀಸಲಿರಿಸಬೇಕು. ಸಾರ್ವಜನಿಕರಿಗೆ ತೊಂದರೆಯಾಗಬಾರದು. ಅಂದು ಸಂಜೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಭಕ್ತಿ ಗಾಯನ, ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಬೇಕು ಎಂದು ಗಾಣಿಗ ಸಮಾಜದ ಮುಖಂಡರು ಸಭೆಯಲ್ಲಿ ಪ್ರಸ್ತಾಪಿಸಿದರು. 

ಸಾರ್ವಜನಿಕರು ಸಿಡಿಬಂಡಿ ರಥಕ್ಕೆ ಕೋಳಿಗಳನ್ನು ಎಸೆಯಬಾರದು. ಇದು ಕಾನೂನು ಬಾಹಿರವಾಗಿದೆ. ಈ ಕುರಿತು ಸಾರ್ವಜನಿಕರಿಗೆ ಸೂಚಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಹೇಳಿದರು. 

ಸಭೆಯಲ್ಲಿ ಮಹಾನಗರ ಪಾಲಿಕೆ ಮೇಯರ್ ಮುಲ್ಲಂಗಿ ನಂದೀಶ್, ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಹನುಮಂತಪ್ಪ, ಗಾಣಿಗ ಸಮುದಾಯದವರು ಹಾಗೂ ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು, ಮಹಾನಗರ ಪಾಲಿಕೆ ಸದಸ್ಯರು ಸೇರಿದಂತೆ ಇನ್ನೀತರರು ಉಪಸ್ಥಿತರಿದ್ದರು.