ರಾಜ್ಯ ಸರ್ಕಾರ ರೈತರನ್ನು ಸಂಕಷ್ಟಕ್ಕೆ ತಳ್ಳಿದೆ: ನಡಹಳ್ಳಿ

ರಾಜ್ಯ ಸರ್ಕಾರ ರೈತರನ್ನು ಸಂಕಷ್ಟಕ್ಕೆ ತಳ್ಳಿದೆ: ನಡಹಳ್ಳಿ  State government has pushed farmers into distress: Nadahalli


ತಾಳಿಕೋಟಿ, ಸೆ.15: ವಿಜಯಪುರ ಜಿಲ್ಲೆಯ 13 ತಾಲೂಕುಗಳ ಪೈಕಿ ಕೇವಲ ಆರು ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಿ, ಉಳಿದ ಏಳು ತಾಲೂಕುಗಳ ರೈತರನ್ನು ರಾಜ್ಯ ಸರ್ಕಾರ ಸಂಕಷ್ಟಕ್ಕೆ ತಳ್ಳಿದೆ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್‌. ಪಾಟೀಲ ನಡಹಳ್ಳಿ ಆರೋಪಿಸಿದರು.  

ತಾಳಿಕೋಟಿ ಪಟ್ಟಣದ ಪ್ರವಾಸಿ ಮಂದಿರದ ಮುಂಭಾಗ ಅಖಂಎ ಕರ್ನಾಟಕ ರೈತ ಸಂಘದ ನೇತೃತ್ವದಲ್ಲಿ ಕಳೆದ 11 ದಿನಗಳಿಂದ ನಡೆಯುತ್ತಿರುವ ಅನಿರ್ದಿಷ್ಟ ಅಹೋರಾತ್ರಿ ಧರಣಿ ಸ್ಥಳಕ್ಕೆ ಭೇಟಿ ನೀಡಿ ರೈತರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ ಅವರು ಮಾತನಾಡಿದರು.  

ರಾಜ್ಯದಲ್ಲಿ ಹಿಂದೆಂದೂ ಕಾಣದಂತಹ ಭೀಕರ ಬರ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರು ಬೆಳೆ ನಷ್ಟದಿಂದ ಸಂಕಷ್ಟದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ರೈತರ ನೆರವಿಗೆ ಧಾವಿಸಬೇಕಾದ ರಾಜ್ಯ ಸರ್ಕಾರ ತನ್ನ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದೆ. ಕೇಂದ್ರ ಸರ್ಕಾರದತ್ತ ಬೆರಳು ತೋರಿಸುವ ಬದಲು ರಾಜ್ಯ ಸರ್ಕಾರವೇ ಮೊದಲು ರೈತರ ನೆರವಿಗೆ ಬರಬೇಕು ಎಂದು ನಡಹಳ್ಳಿ ಒತ್ತಾಯಿಸಿದರು.  

ಮುಂಗಾರು ಹಾಗೂ ಹಿಂಗಾರು ಬೆಳೆ ನಷ್ಟಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಂಟಿಯಾಗಿ ಪ್ರತಿ ಎಕರೆಗೆ ಕನಿಷ್ಠ ?50 ಸಾವಿರ ಪರಿಹಾರ ಘೋಷಿಸಬೇಕು. ಬರಪೀಡಿತ ತಾಲೂಕುಗಳ ವ್ಯಾಪ್ತಿಯನ್ನು ವಿಸ್ತರಿಸಿ, ಸಂಕಷ್ಟದಲ್ಲಿರುವ ಎಲ್ಲ ರೈತರಿಗೂ ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಿದರು.  

‘ಇದು ರಾಜಕೀಯ ಹೋರಾಟವಲ್ಲ; ರೈತರ ಬದುಕಿನ ಹೋರಾಟ. ರೈತ ಸಂಘಟನೆಗಳು ಕರೆ ನೀಡುವ ಎಲ್ಲ ಹೋರಾಟಗಳಿಗೂ ರೈತರ ಪರವಾಗಿ ಬೆಂಬಲ ನೀಡುತ್ತೇವೆ’ ಎಂದು ನಡಹಳ್ಳಿ ಭರವಸೆ ನೀಡಿದರು.  

ತಾಳಿಕೋಟಿ ಪಟ್ಟಣ ಬಂದ್ ನಡೆಸಿ ಹೋರಾಟ ತೀವ್ರಗೊಳಿಸುವ ಕುರಿತು ಸ್ಥಳೀಯ ಮುಖಂಡರು ಹಾಗೂ ವಿವಿಧ ಗ್ರಾಮಗಳ ರೈತ ಮುಖಂಡರೊಂದಿಗೆ ಚರ್ಚಿಸಿ, ಇನ್ನೆರಡು ದಿನಗಳಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.  

ಅಖಂಜ್ ಕರ್ನಾಟಕ ರೈತ ಸಂಘದ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ, ಜಿ.ಪಂ. ಮಾಜಿ ಸದಸ್ಯ ಬಸನಗೌಡ ಒಣಕ್ಯಾಳ, ಡಿ.ಕೆ. ಪಾಟೀಲ, ರವೀಂದ್ರ ಕಟ್ಟಿಮನಿ ಸೇರಿದಂತೆ ವಿವಿಧ ರೈತ ಮುಖಂಡರು ಮಾತನಾಡಿದರು. ರೈತ ಸಂಘದ ತಾಲೂಕು ಅಧ್ಯಕ್ಷ ಬಾಳಪ್ಪಗೌಡ ಲಿಂಗದಳ್ಳಿ, ಉಪಾಧ್ಯಕ್ಷ ರಾಮನಗೌಡ ಹಾದಿಮನಿ ಸೇರಿದಂತೆ ವಿವಿಧ ಗ್ರಾಮಗಳ ರೈತ ಮುಖಂಡರು ಹಾಗೂ ರೈತರು ಉಪಸ್ಥಿತರಿದ್ದರು.