ಬಾಯಿ ಆರೋಗ್ಯ ಕಾಳಜಿ ವಹಿಸಿ: ಡಿಹೆಚ್‌ಓ ಡಾ.ಯಲ್ಲಾ ರಮೇಶಬಾಬು

Take care of oral health: DHO Dr. Yalla Rameshbabu

ಬಾಯಿ ಆರೋಗ್ಯ ಕಾಳಜಿ ವಹಿಸಿ: ಡಿಹೆಚ್‌ಓ ಡಾ.ಯಲ್ಲಾ ರಮೇಶಬಾಬು

ಬಳ್ಳಾರಿ 14 :ಬಾಯಿ ಆರೋಗ್ಯ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳಿಗೆ ಎಲ್ಲಾ ಸರ್ಕಾರಿ ಅರೋಗ್ಯ ಕೇಂದ್ರಗಳಲ್ಲಿ ಉಚಿತ ಚಿಕಿತ್ಸಾ ಸೌಲಭ್ಯವಿದ್ದು, ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶಬಾಬು ಅವರು ಹೇಳಿದರು. 

ರಾಷ್ಟ್ರೀಯ ಬಾಯಿ ಆರೋಗ್ಯ ಕಾರ್ಯಕ್ರಮದಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ವೈದ್ಯಾಧಿಕಾರಿಗಳು ದಂತ ವೈದ್ಯರಿಗೆ ಶುಕ್ರವಾರ ಏರಿ​‍್ಡಸಿದ್ದ ಮಾಹಿತಿ ಕಾರ್ಯಾಗಾರದಲ್ಲಿ ಭಾಗವಹಿಸಿ ಅವರು ಮಾತನಾಡಿದರು.  

ಮನುಷ್ಯನ ದೇಹದ ಅಂಗಗಳಲ್ಲಿ ಬಾಯಿಯು ಸೂಕ್ಷ್ಮ ಮಹತ್ವ ಹೊಂದಿದ್ದು, ಸಾರ್ವಜನಿಕರಿಗೆ ಹೆಚ್ಚಿನ ಜಾಗೃತಿಯ ಮೂಲಕ ಆರೋಗ್ಯಕರ ಬಾಯಿ ಕಾಪಾಡಿಕೊಳ್ಳುವಂತೆ ತಿಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ತಿಳಿಸಿದರು.  

ಜಿಲ್ಲೆಯಾದ್ಯಂತ ಪ್ರತಿ ಮಂಗಳವಾರ ದಂತ ವೈದ್ಯ ಮಹಾವಿದ್ಯಾಲಯದ ಸಹಯೋಗದಲ್ಲಿ ಒಂದು ಆರೋಗ್ಯ ಕೇಂದ್ರದಂತೆ ಉಚಿತ ಶಿಬಿರ ಹಮ್ಮಿಕೊಳ್ಳುವ ಕುರಿತು ಸಿದ್ದತೆ ಮಾಡಿಕೊಳ್ಳಲಾಗುತ್ತಿದ್ದು, ಪ್ರತಿಯೊಬ್ಬ ಅರ್ಹ ನಾಗರಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ವ್ಯಾಪಕ ಪ್ರಚಾರ ಕೈಗೊಳ್ಳಬೇಕು ಎಂದು ಸೂಚಿಸಿದರು.  

*ದಂತಭಾಗ್ಯ:*ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ದಂತಭಾಗ್ಯ ಯೋಜನೆಯಡಿ 45 ವರ್ಷ ಮೇಲ್ಪಟ್ಟ ಬಿಪಿಎಲ್ ಕುಟುಂಬಗಳ ನಾಗರಿಕರಿಗೆ ಉಚಿತ ದಂತ ಪಂಕ್ತಿಯನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ಪರೀಕ್ಷಿಸಿ, ಬಳ್ಳಾರಿಯ ಸರ್ಕಾರಿ ದಂತ ಮಹಾವಿದ್ಯಾಲಯಲ್ಲಿ ಅಳವಡಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದರು. 

ಜಿಲ್ಲಾ ಬಾಯಿ ಅರೋಗ್ಯ ಕಾರ್ಯಕ್ರಮ ಅಧಿಕಾರಿ ಡಾ.ವಿಶಾಲಾಕ್ಷಿ ಅವರು ಮಾತನಾಡಿ, ಜಿಲ್ಲೆಯ ಎಲ್ಲ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ದಂತ ವೈದ್ಯರು, ಹುಳುಕಾದ, ಅಲುಗಾಡುತ್ತಿರುವ, ಹಲ್ಲು ಕೀಳುವ, ದಂತ ಕುಳಿ ಶುಚಿಗೊಳಿಸಿ ಸಿಮೆಂಟ್ ತುಂಬುವ ಕಾರ್ಯ ಮಾಡುವ ಜೊತೆಗೆ ಇತರೆ ಬಾಯಿ ಸಮಸ್ಯೆಗಳಿಗೆ ಚಿಕಿತ್ಸೆ ನೀಡಲಾಗುವುದು. ಮುಂದಿನ ದಿನಗಳಲ್ಲಿ ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ತಪಾಸಣೆ ಕೈಗೊಳ್ಳಲಾಗುವುದು ಎಂದು ಹೇಳಿದರು.ಈ ಸಂದರ್ಭದಲ್ಲಿ ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮ ಅಧಿಕಾರಿ ಡಾ.ಪೂರ್ಣಿಮಾ ಕಟ್ಟಿಮನಿ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಅಬ್ದುಲ್ಲಾ.ಆರ್‌., ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಇಂದ್ರಾಣಿ.ವಿ., ಜಿಲ್ಲಾ ಸರ್ವೆಕ್ಷಣಾಧಿಕಾರಿ ಡಾ.ಮರಿಯಂಬಿ.ವಿ.ಕೆ., ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ವೀರೇಂದ್ರಕುಮಾರ, ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ.ಹನುಮಂತಪ್ಪ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್ ದಾಸಪ್ಪನವರ, ಡಿಎನ್‌ಓ ಗೀರೀಶ್ ಸೇರಿದಂತೆ ವೈದ್ಯಾಧಿಕಾರಿಗಳು, ದಂತ ವೈದ್ಯರು ಉಪಸ್ಥಿತರಿದ್ದರು.